ತಮಿಳು ವೈದ್ಯರ ನೇಮಕ್ಕೆ ಮುಂದಾದ ರಾಜ್ಯ ಸರ್ಕಾರ
ಬೆಂಗಳೂರು, ಆ.4: ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳು ನಿಪುಣ ವೈದ್ಯರ ಕೊರತೆ ಅನುಭವಿಸುತ್ತಿವೆ. ಈ ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರ ತಮಿಳುನಾಡು, ಆಂಧ್ರ ಹಾಗೂ ಮಹಾರಾಷ್ಟ್ರ ರಾಜ್ಯದ ಸ್ನಾತಕೋತ್ತರ ವೈದ್ಯ ಪದವೀಧರರ ನೇಮಕಕ್ಕೆ ಮುಂದಾಗಿರುವುದಾಗಿ ವೈದ್ಯಕೀಯ ಸಚಿವ ರಾಮಚಂದ್ರ ಗೌಡ ತಿಳಿಸಿದ್ದಾರೆ.
ವಿಧಾನ ಪರಿಷತ್ ಅಧಿವೇಶನದ ಪ್ರಶ್ನೋತ್ತರ ಅವಧಿಯಲ್ಲಿ ಅರ್ಹ ವೈದ್ಯರ ಕೊರತೆ ಬಗ್ಗೆ ವಿರೋಧ ಪಕ್ಷ ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಿದ್ದ ಸಚಿವರು, ರಾಜ್ಯ ಅರ್ಹ ವೈದ್ಯರು ಹಾಗೂ ತಜ್ಞರ ಕೊರತೆ ಎದುರಿಸುತ್ತಿದೆ. ಈ ಸಮಸ್ಯೆ ನಿವಾರಿಸಲು ರಾಜ್ಯ ಸರ್ಕಾರ ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರ ಹಾಗೂ ಮಹಾರಾಷ್ಟ್ರದ ವೈದ್ಯರಿಗೆ ಬೇಡಿಕೆ ಸಲ್ಲಿಸಿದೆ ಎಂದರು.
ರಾಜ್ಯ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸಲು ಇಚ್ಛಿಸುವ ವೈದ್ಯರಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಮುಖ್ಯವಾಗಿ ತಮಿಳುನಾಡು ಹಾಗೂ ಮಹಾರಾಷ್ಟ್ರದ ವೈದ್ಯರಿಗೆ ಹೆಚ್ಚಿನ ಸವಲತ್ತುಗಳನ್ನು ನೀಡಲು ರಾಜ್ಯ ಸರ್ಕಾರ ಸಿದ್ಧವಿದೆ. ಕರ್ನಾಟಕ ವೈದ್ಯಕೀಯ ವಿಶ್ವವಿದ್ಯಾಲಯವನ್ನು ನವದೆಹಲಿಯಲ್ಲಿನ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಮಟ್ಟಕ್ಕೆ ಏರಿಸಲಾಗುತ್ತದೆ ಎಂದು ಅವರು ಸಭೆಗೆ ತಿಳಿಸಿದರು.
(ದಟ್ಸ್‌ಕನ್ನಡ ವಾರ್ತೆ)












Click it and Unblock the Notifications