ಹೊಗೆ ಹಗೆ ನಿಲ್ಲಿಸಲು ದೆಹಲಿ ತನಕ ದೂರು
ಶಿಕಾರಿಪುರ, ಆ. 6 : ಅನೇಕ ವರ್ಷಗಳಿಂದ ಜ್ವಲಂತ ಸಮಸ್ಯೆಯಾಗಿ ರಾಜ್ಯವನ್ನು ಕಾಡುತ್ತಿರುವ ಹೊಗೇನಕಲ್ ಜಲಾಶಯ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸುವ ಮೂಲಕ ವಿವಾದಕ್ಕೆ ನಾಂದಿ ಹಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರನ್ನು ಒತ್ತಾಯಿಸಿದ್ದಾರೆ.
ಇಲ್ಲಿಗೆ ಸಮೀಪದ ಅಂಜನಾಪುರ ಜಲಾಶಯ ಭರ್ತಿಯಾದ ಸಂದರ್ಭದಲ್ಲಿ ಬಾಗಿನ ಅರ್ಪಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳನಾಡು ಸರ್ಕಾರದ ತಂಟೆಕೋರತನದಿಂದ ಸಮಸ್ಯೆ ಮತ್ತಷ್ಟು ಜಟಿಲವಾಗಿದೆ ಎಂದು ಆರೋಪಿಸಿದರು. ಆದ್ದರಿಂದ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಿ ಕರ್ನಾಟಕ ಮತ್ತು ತಮಿಳನಾಡು ಮುಖ್ಯಮಂತ್ರಿಗಳ ಸಭೆ ಕರೆಯಬೇಕು. ಸಮಸ್ಯೆ ಕುರಿತು ವಿಸ್ತಾರವಾಗಿ ಚರ್ಚಿಸಬೇಕು ಹಾಗೂ ಕೇಂದ್ರ ಸರ್ಕಾರದ ಮೂಲಕ ಸಮರ್ಪಕವಾಗಿ ಗಡಿಯ ಜಂಟಿ ಸರ್ವೆ ಕಾರ್ಯನಡೆಸಬೇಕು ಎಂದು ಅವರು ಸೂಚಿಸಿದರು.
ಕೇಂದ್ರ ಸರ್ಕಾರ ಕರ್ನಾಟಕದ ವಿಷಯದಲ್ಲಿ ಪ್ರತಿ ಭಾರಿಯೂ ಮಲತಾಯಿ ಧೋರಣೆ ಅನುಸರಿಸುತ್ತಾ ಬಂದಿದೆ. ರಸಗೊಬ್ಬರ ವಿತರಣೆ ಇರಬಹುದು, ವಿದ್ಯುತ್ ಸರಬರಾಜು ಇರಬಹುದು. ಅಭಿವೃದ್ಧಿ ಯೋಜನೆಗಳಿಗೆ ಅನುದಾನ ನೀಡುವುದು ಹೀಗೆ ಪ್ರತಿ ಹಂತದಲ್ಲಿಯೂ ಕೇಂದ್ರ ಸರ್ಕಾರ ರಾಜ್ಯದ ಅಭಿವೃದ್ಧಿಗೆ ನಿರ್ಲಕ್ಷ್ಯ ಧೋರಣೆ ತಾಳಿದೆ. ಇದರ ಪರಿಣಾಮವಾಗಿ ರಾಜ್ಯದ ಅನೇಕ ನೀರಾವರಿ ಯೋಜನೆಗಳು ಕುಂಠಿತಗೊಂಡಿವೆ. ಈ ಹಿನ್ನೆಡೆಗೆ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ಯಡಿಯೂರಪ್ಪ ಆರೋಪಿಸಿದರು.
ರಾಜ್ಯ ಸೇರಿದಂತೆ ದೇಶದಲ್ಲಿ ಉಗ್ರರ ಹಾವಳಿ ಹೆಚ್ಚಾಗಿದೆ. ಇದನ್ನು ತಡೆಯುವಲ್ಲಿ ಕೇಂದ್ರ ಸರ್ಕಾರ ಹೆಚ್ಚಿನ ಆಸಕ್ತಿ ವಹಿಸಬೇಕು. ಉಗ್ರರ ನಿಗ್ರಹಕ್ಕೆ ಪೋಟಾ ಕಾಯ್ದೆಯನ್ನು ಜಾರಿಗೆ ತರುವ ಕುರಿತಂತೆ ಪ್ರಧಾನಮಂತ್ರಿಯವರೊಂದಿಗೆ ಮಾತುಕತೆ ನಡೆಸುವ ಮೂಲಕ ಮನವಿ ಸಲ್ಲಿಸಲಾಗುವುದು ಅವರು ತಿಳಿಸಿದರು. ಉಗ್ರರ ಹಾವಳಿ ರಾಜ್ಯದಲ್ಲಿ ಹೆಚ್ಚಾಗಿರುವ ಈ ಗಳಿಗೆಯಲ್ಲಿ ಗುಪ್ತಚರ ಇಲಾಖೆ ಹಾಗೂ ಪೊಲೀಸ್ ಇಲಾಖೆಗೆ ಅಗತ್ಯ ಸೌಲಭ್ಯಗಳನ್ನು ಸರ್ಕಾರ ಒದಗಿಸಿದೆ. ಮುಂಜಾಗ್ರತಾ ಕ್ರಮವಾಗಿ ರಾಜ್ಯದ ಎಲ್ಲ ಜಲಾಶಯಗಳಿಗೆ ಭಾರಿ ಬಂದೋಬಸ್ತ್ ನಿಯೋಜಿಸಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)


Click it and Unblock the Notifications
