ಲೋಕಸಭೆ ಚುನಾವಣೆಗೆ ಹಳೆ ದೋಸ್ತಿಗಳ ಹೊಸ ಮೈತ್ರಿ
ಬೆಂಗಳೂರು,ಆ.11: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಮಣಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಹೊಂದಾಣಿಕೆ ಮಾಡಿಕೊಳ್ಳುವ ಕಾರ್ಯತಂತ್ರ ರೂಪಿಸುತ್ತಿವೆ.
ತಮ್ಮ ಪಕ್ಷಗಳ ಶಾಸಕರನ್ನು ಖರೀದಿಸಿ ಎರಡು ಪಕ್ಷಗಳ ವರ್ಚಸ್ಸಿಗೆ ಕುಂದುಂಟು ಮಾಡಿರುವ ಬಿಜೆಪಿಗೆ ಸರಿಯಾಗಿ ಬುದ್ಧಿ ಕಲಿಸಬೇಕೆಂಬ ಜಿದ್ದಿನಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಹೊಂದಾಣಿಕೆ ಮಾಡಿಕೊಳ್ಳಲು ಮುಂದಾಗಿವೆ. ಕಾಂಗ್ರೆಸ್‍ನ ಮೂವರು ಹಾಗೂ ಜೆಡಿಎಸ್‌ನ ಇಬ್ಬರು ಶಾಸಕರ ರಾಜೀನಾಮೆಯಿಂದ ತೆರವಾಗಿರುವ ಐದು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿಯ ವಿರುದ್ಧ ಒಮ್ಮತದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಿದ್ಧತೆಯಲ್ಲಿವೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೆಹಲಿಯಲ್ಲಿ ಕಾಂಗ್ರೆಸ್ ಮುಖಂಡರೊಡನೆ ಸಭೆ ಸೇರಿ ಈ ಕುರಿತು ಮಾತುಕತೆ ನಡೆಸಲಿದ್ದಾರೆ. ಸೋನಿಯಾಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹಮದ್ ಪಟೇಲ್ ಅವರನ್ನು ಈಗಾಗಲೇ ಭೇಟಿ ಮಾಡಿ ಮಾತುಕತೆ ನಡೆಸಿರುವುದಾಗಿ ಮೂಲಗಳು ಸ್ಪಷ್ಟಪಡಿಸಿವೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್‌ನ ವರಿಷ್ಠರೊಂ ದಿಗೆ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಿಸುವುದಾಗಿ ಮೂಲಗಳು ತಿಳಿಸಿವೆ. ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ಕಾಂಗ್ರೆಸ್ ಪಕ್ಷ ಸಹ ಒಲವು ತೋರಿಸಿರುವುದಾಗಿ ಹೇಳಲಾಗಿದೆ. ದೊಡ್ಡಬಳ್ಳಾಪುರ, ದೇವದುರ್ಗ,ಕಾರವಾರ ಮತ್ತು ಅರಬಾವಿ ಕ್ಷೇತ್ರಗಳಲ್ಲಿ ಜೆಡಿಎಸ್ ಎರಡು ಸ್ಥಾನಗಳಲ್ಲಿ ಹಾಗೂ ಕಾಂಗ್ರೆಸ್ ಮೂರು ಸ್ಥಾನಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಒಪ್ಪಂದ ಮಾಡಿಕೊಳ್ಳಲಾಗಿದೆ ಎಂಬ ಮಾತು ರಾಜಕೀಯ ವಲಯದಲ್ಲಿ ಗುಟ್ಟಾಗಿ ಉಳಿದಿಲ್ಲ.
(ದಟ್ಸ್‌ಕನ್ನಡ ವಾರ್ತೆ)












Click it and Unblock the Notifications