ದೆಹಲಿಗೆ ಪ್ರಯಾಣ ಬೆಳೆಸಿದ ಮುಖ್ಯಮಂತ್ರಿಗಳು
ಬೆಂಗಳೂರು, ಆ. 11 : ಮಂಗಳವಾರ ನವದೆಹಲಿಯಲ್ಲಿ 11 ನೇ ಹಣಕಾಸು ಯೋಜನೆಯ ಸಭೆ ನಡೆಯುವುರಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ.
ಮಂಗಳವಾರ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹಾಗೂ ಕೇಂದ್ರ ಯೋಜನಾ ಆಯೋಗದ ಉಪಾಧ್ಯಕ್ಷ ಮಾಂಟೆಕ್ ಸಿಂಗ್ ಅಹ್ಲುವಾಲಿಯಾ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಮುಖ್ಯವಾಗಿ ಬೆಂಗಳೂರಿನ ಅಭಿವೃದ್ಧಿಗೆ ಸರ್ಕಾರ ಎಂಟೂವರೆ ಸಾವಿರ ಕೋಟಿ ರು.ಅನುದಾನ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಅನುದಾನ ಪಡೆಯಲು ಮುಂದಾಗಿರುವ ರಾಜ್ಯ ಸರ್ಕಾರ ಮೊದಲ ಕಂತಿನಲ್ಲಿ 1500 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡುವಂತೆ ಸಭೆಯಲ್ಲಿ ಯಡಿಯೂರಪ್ಪ ಒತ್ತಾಯಿಸಲಿದ್ದಾರೆ.
ಇದರ ಜತೆಗೆ ಹೈದರಾಬಾದ್ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಡಿ.ಎಂ. ನಂಜುಂಡಪ್ಪ ವರದಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ವಿಶೇಷ ಅನುದಾನದಲ್ಲಿ ರಾಜ್ಯಕ್ಕೆ ಹಣ ಬಿಡುಗಡೆ ಮಾಡುಬೇಕು ಎನ್ನುವ ಮನವಿಯನ್ನು ಯಡಿಯೂರಪ್ಪ ಅವರು ಸಭೆಯ ಮುಂದಿಡಲಿದ್ದಾರೆ. ಹಾಗೂ ರಾಯಚೂರು ಬಳಿಯ ಕೊಡಿಗೆ ಪ್ರದೇಶದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ವಿದ್ಯುತ್ ಘಟಕದ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದೇ ಸಂದರ್ಭದಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications