ಚಾಂಪಿಯನ್ ಟ್ರೋಫಿ ರದ್ದು ಮಾಡಿದ ಐಸಿಸಿ
ದುಬೈ, ಆ. 25 : ಭದ್ರತೆಯ ಕೊರತೆಯ ಹಿನ್ನೆಲೆಯಲ್ಲಿ ಆಟಗಾರರ ಸುರಕ್ಷತೆಯ ದೃಷ್ಟಿಯಿಂದ ಪಾಕಿಸ್ತಾನದಲ್ಲಿ ಸೆಪ್ಟಂಬರ್12 ರಿಂದ 28ರ ವರೆಗೆ ನಡೆಯಬೇಕಿದ್ದ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯನ್ನು ಮುಂದೂಡಲಾಗಿದೆ. ಮುಂದಿನ ವರ್ಷ 2009ರ ಸೆಪ್ಟಂಬರ್ ತಿಂಗಳಿನಲ್ಲಿ ಚಾಂಪಿಯನ್ ಟ್ರೋಫಿ ಪಂದ್ಯಾವಳಿಯನ್ನು ನಡೆಸಲಾಗುವುದು ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ತಿಳಿಸಿದೆ.
ಸೆ.12 ರಿಂದ ಪಾಕಿಸ್ತಾನದಲ್ಲಿ 8 ರಾಷ್ಟ್ರಗಳ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿತ್ತು. ಪಂದ್ಯಾವಳಿಯಲ್ಲಿ ಭಾರತ, ಪಾಕಿಸ್ತಾನ, ದಕ್ಷಿಣ ಆಫ್ರೀಕ, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ವೆಸ್ಟ್ ಇಂಡೀಸ್, ಶ್ರೀಲಂಕಾ ಹಾಗೂ ಇಂಗ್ಲೆಂಡ್ ತಂಡಗಳು ಭಾಗವಹಿಸಬೇಕಿತ್ತು. ಆದರೆ ಪಾಕಿಸ್ತಾನದ ರಾಜಕೀಯದಲ್ಲಿ ಉಂಟಾಗಿರುವ ಕೋಲಾಹಲ ಮತ್ತು ತಾಲೀಬಾನ್ ಉಗ್ರರ ನಡೆಸುತ್ತಿರುವ ವಿಧ್ವಂಸಕ ಕೃತ್ಯಗಳಿಂದ ಆಟಗಾರರು ಪಂದ್ಯಾವಳಿಯಲ್ಲಿ ಭಾಗವಹಿಸಲು ಹಿಂದೇಟು ಹಾಕುತ್ತಿದ್ದಾರೆ. ಪರಿಣಾಮವಾಗಿ ದಕ್ಷಿಣ ಆಫ್ರೀಕ, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ ಹಾಗೂ ಇಂಗ್ಲೆಂಡ್ ತಂಡಗಳು ಈಗಾಗಲೇ ಪಂದ್ಯಾವಳಿಯಿಂದ ಹಿಂದೆ ಸರಿದಿವೆ.
ಉಳಿದ ದೇಶಗಳ ಕ್ರಿಕೆಟ್ ಸಮಿತಿಯೂ ಅದೇ ಹಾದಿ ಹಿಡಿದಿವೆ. ಎಲ್ಲ ಬೆಳವಣಿಗಳನ್ನು ಕೂಲಂಕಷವಾಗಿ ಚರ್ಚೆ ನಡೆಸಲಾಗಿದ್ದು, ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ಚಾಂಪಿಯನ್ ಟ್ರೋಫಿಯನ್ನು ರದ್ದು ಮಾಡುವುದು ಉತ್ತಮ ಎನ್ನುವ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಐಸಿಸಿ ಸ್ಪಷ್ಟಪಡಿಸಿದೆ. ಕಳೆದ ಅನೇಕ ದಿನಗಳಿಂದ ಪಾಕಿಸ್ತಾನದಲ್ಲಿ ಆತ್ಮಹತ್ಯಾ ಬಾಂಬ್ ದಾಳಿ ಮೀತಿಮೀರಿದೆ.
(ದಟ್ಸ್ ಕನ್ನಡ ವಾರ್ತೆ)


Click it and Unblock the Notifications
