ಮಂಗಳೂರು ಗಲಭೆ : ಸಿಓಡಿ ತನಿಖೆಗೆ ಅಸ್ತು
ಬೆಂಗಳೂರು, ಸೆ. 18 : ಮಂಗಳೂರಿನಲ್ಲಿ ನಡೆದ ಚರ್ಚ್ ಮೇಲಿನ ದಾಳಿ ಪ್ರಕರಣವನ್ನು ನಿಷ್ಪಕ್ಷಪಾತವಾದ ತನಿಖೆ ನಡೆಸುವ ಸಲುವಾಗಿ ಸಿಓಡಿಗೆ ಪ್ರಕರಣವನ್ನು ಒಪ್ಪಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಮಂಗಳೂರು ನಡೆದ ಗಲಭೆ ಕುರಿತು ಕರೆಯಲಾಗಿದ್ದ ಸಚಿವ ಸಂಪುಟ ಸಭೆಯ ಮುಕ್ತಾಯದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ತಿಂಗಳೊಳಗೆ ತನಿಖೆಯ ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕೆಂದು ಸೂಚಿಸಲಾಗಿದೆ ಎಂದರು. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನಿಯೇ ಇಲ್ಲ. ವರದಿ ಬಂದ ನಂತರ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ 200 ಹೆಚ್ಚು ಜನರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸುತ್ತಿರುವುದಾಗಿ ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.
ಅಲ್ಪಸಂಖ್ಯಾತರ ರಕ್ಷಣೆಗೆ ಸರ್ಕಾರ ಸೂಕ್ತ ಕ್ರಮ ತೆಗೆದುಕೊಂಡಿದೆ. ಅಲ್ಪಸಂಖ್ಯಾತರಿಗೆ ಸೇರಿದ ಪ್ರಾರ್ಥನಾ ಮಂದಿರಗಳಿಗೆ ಸೂಕ್ತ ರಕ್ಷಣೆ ನೀಡುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ಅಲ್ಲದೇ, ಮಂಗಳೂರು ಗಲಭೆ ನಂತರ ರಾಜ್ಯ ಇತರೆಡೆ ನಡೆದಿರುವ ಚರ್ಚ್ ಮೇಲಿನ ದಾಳಿಯನ್ನು ತಡೆಯುವಂತೆ ಪೊಲೀಸರಿಗೆ ಸೂಚಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರ ವಹಿಸುವಂತೆ ಮುನ್ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಮಂಗಳೂರು ಗಲಭೆ ಪ್ರಕರಣದಲ್ಲಿ ರಾಜಕೀಯ ಕೈವಾಡವಿದೆ ಎಂದು ಆರೋಪಿಸಿದ ಅವರು, ಸರ್ಕಾರಕ್ಕೆ ಮಸಿ ಬಳಿಯುವ ಕೆಲಸಕ್ಕೆ ಕೆಲ ಕಿಡಿಗೇಡಿಗಳು ಕೈಹಾಕಿದ್ದು ಸರ್ಕಾರದ ಗಮನಕ್ಕೆ ಬಂದಿದೆ. ಸಿಓಡಿ ವರದಿ ಬಂದ ನಂತರ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದರು. ಮಂಗಳೂರು ಗಲಭೆಯಲ್ಲಿ ರಾಜಕೀಯ ಲಾಭ ಪಡೆಯಲು ಪ್ರತಿಪಕ್ಷದ ನಾಯಕರ ಮುಂದಾಗಿದ್ದಾರೆ. ವಿರೋಧ ಪಕ್ಷದ ಮುಖಂಡರು ನೀಡುತ್ತಿರುವ ಹೇಳಿಕೆಗೆ ಜನರನ್ನು ಪ್ರಚೋದಿಸುವಂತಿವೆ ಎಂದು ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದರು.
(ದಟ್ಸ್ ಕನ್ನಡ ವಾರ್ತೆ)
ಮಂಗಳೂರು ಗಲಭೆ ರಾಕ್ಷಸೀ ಕೃತ್ಯ : ಮೊಯ್ಲಿ
ಹಿಂದು ಸಂಘಟನೆ ನಿಷೇಧಿಸುವ ಪ್ರಶ್ನೆಯೇ ಇಲ್ಲ












Click it and Unblock the Notifications