ಸಾರಿಗೆ ಸಚಿವರನ್ನು ಹುಚ್ಚಾಸ್ಪತ್ರೆಗೆ ಸೇರಿಸಿ : ದೇಶಪಾಂಡೆ
ಬೆಳಗಾವಿ, ಅ. 20 : ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಬಗ್ಗೆ ಅವಹೇಳನಕಾರಿಯಾಗಿ ಮಾತುಗಳನ್ನಾಡುತ್ತಿರುವ ಸಾರಿಗೆ ಸಚಿವ ಆರ್. ಅಶೋಕ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಆದ್ದರಿಂದ ಅವರನ್ನು ಕೂಡಲೇ ಹುಚ್ಚಾಸ್ಪತ್ರೆಗೆ ಸೇರಿಸಬೇಕಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಖಾರವಾಗಿ ಪ್ರತಿಕ್ರಿಯಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಕಾಂಗ್ರೆಸ್ ಪಕ್ಷದ ಬಗ್ಗೆ ಬಿಜೆಪಿ ನಾಯಕರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಕಳೆದ ಕೆಲ ದಿನಗಳ ಹಿಂದೆ ಸಾರಿಗೆ ಸಚಿವ ಆರ್.ಅಶೋಕ್ ಕೆಪಿಸಿಸಿ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷ ನೇಮಕ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದರು. ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಸಿಸಿ ಸ್ಥಾನದಿಂದ ವಂಚಿತರಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಲ್ಲಿ ಇಷ್ಟರಲ್ಲಿಯೇ ತೀವ್ರವಾದ ಭಿನ್ನಾಭಿಪ್ರಾಯ ಸ್ಫೋಟಗೊಳ್ಳಲಿದೆ ಎಂದು ಹೇಳಿಕೆ ನೀಡಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ದೇಶಪಾಂಡೆ ಬಿಜೆಪಿ ನಾಯಕರು ಮನಬಂದಂತೆ ಮಾತನಾಡುತ್ತಿರುವುದು ಸರಿಯಲ್ಲ. ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವುದು, ಬಿಡುವುದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರವಾಗಿದೆ. ಅದರಲ್ಲಿ ಅನ್ಯ ಪಕ್ಷದವರು ತಲೆಹಾಕುವುದು ಉಚಿತವಲ್ಲ ಎಂದು ಸಲಹೆ ನೀಡಿದರು. ಘಟನೆಗೆ ತಕ್ಕಂತೆ ವರ್ತಿಸುವುದನ್ನು ಸಚಿವರು ಕಲಿಯಬೇಕಿದೆ ಎಂದು ಕಿವಿಮಾತು ಹೇಳಿದರು.
ರಾಜ್ಯದಲ್ಲಿ ಉಪಚುನಾವಣೆಗಳು ಸಮೀಪಿಸುತ್ತಿವೆ. ಈ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆಯುವ ಕ್ಷೇತ್ರಗಳಿಗೆ ಸರ್ಕಾರ ಬೇಕಾಬಿಟ್ಟಿ ಅನುದಾನ ನೀಡುವ ಮೂಲಕ ಚುನಾವಣಾ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದೆ ಎಂದು ಅವರು ಆರೋಪಿಸಿದರು. ಇತ್ತೀಚೆಗೆ ಸರ್ಕಾರಿ ಯೋಜನೆಗಳಲ್ಲಿ ಭಾರಿ ಅವ್ಯವಹಾರ ನಡೆದಿದೆ. ಆದ್ದರಿಂದ ಸರ್ಕಾರ ಕೂಡಲೇ ಶ್ವೇತಪತ್ರ ಹೊರಡಿಸಬೇಕು ಎಂದು ದೇಶಪಾಂಡೆ ಆಗ್ರಹಿಸಿದರು.
(ದಟ್ಸ್ ಕನ್ನಡ ವಾರ್ತೆ)
ಜೆಡಿಎಸ್ ಜೊತೆ ಮತ್ತೆ ಕೈಜೋಡಿಸಿದ ಕಾಂಗ್ರೆಸ್
ಸಿದ್ದು ಬಣಕ್ಕೆ ಸೊಪ್ಪು ಹಾಕದಿರಲು 'ಕೈ' ನಿರ್ಧಾರ ?
ಉಪಚುನಾವಣೆ ಮೈತ್ರಿಗೆ ತೀರ್ಮಾನಿಸಿಲ್ಲ ದೇಶಪಾಂಡೆ












Click it and Unblock the Notifications