ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಮ್ಯಾಗಿ ರಾಜೀನಾಮೆ
ನವದೆಹಲಿ, ನ. 11 : ವಿವಾದಿತ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕಿ ಮಾರ್ಗರೆಟ್ ಆಳ್ವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆ ಹಾಗೂ ಕಾರ್ಯಕಾರಿ ಸಮಿತಿಗೆ ರಾಜೀನಾಮೆ ನೀಡಿದ್ದಾರೆ ಎಂದು ಎಐಸಿಸಿ ಕಚೇರಿ ಮೂಲಗಳು ತಿಳಿಸಿವೆ.
ಕಳೆದ ವಿಧಾನಸಭೆ ಚುನಾವಣೆ ವೇಳೆ ಕರ್ನಾಟಕದಲ್ಲಿ ಕಾಂಗ್ರೆಸ್ ಟಿಕೆಟ್ ಗಳನ್ನು ಮಾರಾಟವಾಗಿವೆ ಎಂದು ಅಳ್ವ ಗಂಭೀರ ಆರೋಪ ಮಾಡಿದ್ದರು. ಇದು ಕಾಂಗ್ರೆಸ್ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಪಕ್ಷದ ಆಸ್ತಿತ್ವಕ್ಕೆ ದಕ್ಕೆ ಬರುವಂತ ಹೇಳಿಕೆ ನೀಡಿರುವ ಅಳ್ವ ವಿರುದ್ಧ ಹೈಕಮಾಂಡ್ ಕೂಡಾ ಅವರ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಆರೋಪಗಳ ಸತ್ಯಾಸತ್ಯತೆಗಳನ್ನು ತಿಳಿದುಕೊಳ್ಳಲು ಕೇಂದ್ರ ಸಚಿವ ಸುಶೀಲ್ ಕುಮಾರ್ ಸಿಂಧೆ ನೇತೃತ್ವದ ಶಿಸ್ತು ಸಮಿತಿ ರಚಿಸಿ ಮೂರು ದಿನಗಳೊಳಗೆ ವರದಿ ನೀಡುವಂತೆ ಹೈಕಮಾಂಡ್ ಆದೇಶ ನೀಡಿತ್ತು.
ಈ ಹಿನ್ನೆಲೆಯಲ್ಲಿ ಸೋಮವಾರ ಶಿಸ್ತು ಸಮಿತಿ ಎದುರು ಹಾಜರಾದ ಅಳ್ವ ತಮ್ಮ ಹೇಳಿಕೆ ನೀಡಿದ್ದರು. ನಂತರ ಮಾತನಾಡಿದ ಕಾಂಗ್ರೆಸ್ ವಕ್ತಾರೆ ಜಯಂತಿ ನಟರಾಜನ್, ಅಳ್ವ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಹೀಗಾಗಿ ತನಿಖೆ ಮಾಡುವ ಅಗತ್ಯವಿಲ್ಲ ಎಂದು ಹೇಳಿದ್ದರು. ಹೈಕಮಾಂಡ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಅಳ್ವ ಮಂಗಳಾವರ ಬೆಳಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆ ಹಾಗೂ ಕಾರ್ಯಕಾರಿ ಸಮಿತಿಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿರುವ ವಿಷಯವನ್ನು ಎಐಸಿಸಿ ಸ್ಪಷ್ಟಪಡಿಸಿದೆ.
(ದಟ್ಸ್ ಕನ್ನಡ ವಾರ್ತೆ)


Click it and Unblock the Notifications
