ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಾಲ್ಕನೆ ದಿನಕ್ಕೆ ಕಾಲಿರಿಸಿದ ವೈದ್ಯರ ಮುಷ್ಕರ

By Staff
|
Google Oneindia Kannada News

ಬೆಂಗಳೂರು, ನ. 12 : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಗುತ್ತಿಗೆ ವೈದ್ಯರ ಪ್ರತಿಭಟನೆಯಿಂದ ವೈದ್ಯಕೀಯ ಸೇವೆ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯಾದ್ಯಂತ ಸುಮಾರು ನಾಲ್ಕು ಸಾವಿರ ಗುತ್ತಿಗೆ ವೈದ್ಯರು ಪ್ರತಿಭಟನೆಯಲ್ಲಿ ನಿರತರಾಗಿದ್ದರಿಂದ ಬಡ ರೋಗಿಗಳ ಸ್ಥಿತಿ ದೇವರಿಗೆ ಪ್ರೀತಿ ಎನ್ನುವಂತಾಗಿದೆ.

ಆಯಾ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿರುವ ವೈದ್ಯರು ಸರ್ಕಾರದ ವಿರುದ್ದ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೇಡಿಕೆಗಳನ್ನು ಈಡೇರಿಸುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪ್ರತಿಭಟನಾನಿರತ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಮೂರು ದಿನ ಕಳೆದು ನಡೆಯುತ್ತಿರುವ ಪ್ರತಿಭಟನೆ ದಿನದಿಂದ ದಿನಕ್ಕೆ ಹೆಚ್ಚು ಕಾವು ಪಡೆಯತೊಡಗಿದೆ. ಈ ಮಧ್ಯೆ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ವೈದ್ಯರು ನಡೆಸಿದ ಮಾತುಕತೆ ವಿಫಲವಾಗಿದ್ದು, ಪ್ರತಿಭಟನೆ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

ಕಳೆದ ಅನೇಕ ವರ್ಷಗಳಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಗುತ್ತಿಗೆ ವೈದ್ಯರ ಸೇವೆಯನ್ನು ಖಾಯಂಗೊಳಿಸುವುದು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಕಿದ್ವಾಯಿ, ಬೌರಿಂಗ್, ವಿಕ್ಟೋರಿಯಾ, ವಾಣಿ ವಿಲಾಸ್, ಕೆ ಸಿ ಜನರಲ್ ಆಸ್ಪತ್ರೆ, ಜಯನಗರ ಜನರಲ್ ಆಸ್ಪತ್ರೆಗಳಲ್ಲಿ ವೈದ್ಯರು ಕೆಲಸಕ್ಕೆ ಹಾಜರಾಗಿಲ್ಲ. ರೋಗಿಗಳು ಆಸ್ಪತ್ರೆಗೆ ಬಂದು ಹಿಡಿ ಶಾಪ ಹಾಕಿ ಹಿಂದಿರುಗುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು.

ರಾಜ್ಯದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರಿಂದ ವೈದ್ಯಕೀಯ ಸೇವೆ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ರೋಗಿಗಳ ಪರದಾಟ ಹೇಳತೀರದಾಗಿದೆ . ತುರ್ತು ಸೇವಾ ಕೇಂದ್ರದ ಸಿಬ್ಬಂದಿಗಳೂ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರಿಂದ ಸಾರ್ವಜನಿಕರು ಪರಿತಪಿಸುವಂತಾಗಿದೆ. ಒಟ್ಟಿನಲ್ಲಿ ಇಬ್ಪರ ನಡುವಿನ ಜಗಳದಲ್ಲಿ ಬಡ ರೋಗಿ ಬಲಿಪಶು ಆಗುತ್ತಿರುವುದು ಸುಳ್ಳಲ್ಲ ಎನ್ನುವ ಮಾತು ಕೇಳಿ ಬರತೊಡಗಿದೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X