ಮಠಾಧೀಶರೆ ಸರ್ಕಾರದೊಂದಿಗೆ ಕೈಜೋಡಿಸಿ, ಸಿಎಂ
ಕೊಳ್ಳೆಗಾಲ, ಡಿ. 10 : ಭಯೋತ್ಪಾದನೆ ಹತ್ತಿಕ್ಕುವ ನಿಟ್ಟಿನಲ್ಲಿ ಮಠಾಧೀಶರು ಹಾಗೂ ಶೈಕ್ಷಣಿಕ ಸಂಸ್ಥೆಗಳ ಸಹಯೋಗದೊಂದಿಗೆ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಈ ಹಿನ್ನೆಲೆಯಲ್ಲಿ ಸರ್ಕಾರದೊಂದಿಗೆ ನಾಡಿನ ಎಲ್ಲ ಮಠಾಧೀಶರು ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.
ಇಲ್ಲಿನ ಜೆಎಸ್ಎಸ್ ಸಭಾಭವನದ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಭಯೋತ್ಪಾದನೆಯ ಬಗ್ಗೆ ತಿಳುವಳಿಕೆ ಮೂಡಿಸಲು ಸರ್ಕಾರ ವಿವಿಧ ಯೋಜನೆಗಳನ್ನು ಹಾಕಿಕೊಂಡಿದೆ ಎಂದರು. ಭಯೋತ್ಪಾದನೆ ಮೆಟ್ಟಿ ನಿಲ್ಲಲು ಸಾರ್ವಜನಿಕರು ಹಾಗೂ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ದೇಶದಲ್ಲಿ ಮೀತಿಮೀರಿರುವ ಉಗ್ರರ ಅಟ್ಟಹಾಸಕ್ಕೆ ಕಡಿವಾಣ ಹಾಕಲು ನಾಡಿನ ಎಲ್ಲ ಮಠಾಧೀಶರು ಜನಜಾಗೃತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿಕೊಂಡರು.
ಸರ್ಕಾರ ಗ್ರಾಮೀಣ ಪ್ರದೇಶದ ಜನರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಅಧ್ಯತೆ ನೀಡಿದೆ. ಜೊತೆಗೆ ಈ ಭಾಗದ ಮೂಲಭೂತ ಸಮಸ್ಯೆಗಳಿಗೆ ಸಾಕಷ್ಟು ಅನುದಾನ ಒದಗಿಸಲಾಗಿದೆ. ರಸ್ತೆಗಳ ಗುಣಮಟ್ಟ ಹಾಗೂ ಕುಡಿಯುವ ನೀರಿನ ಯೋಜನೆಗಾಗಿ 105 ಕೋಟಿ ರುಪಾಯಿಗಳನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಯಡಿಯೂರಪ್ಪ ಹೇಳಿದರು. ಅಲ್ಲದೇ ಹಳ್ಳಿಗರ ಸಮಸ್ಯೆ ಆಲಿಸಲು ಜನಸ್ಪಂದನ ಕಾರ್ಯಕ್ರಮವನ್ನು ಕೂಡಾ ಶೀಘ್ರ ಕಾರ್ಯರೂಪಕ್ಕೆ ತರಲಾಗುವುದು ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications