ಚಾಮಲಾಪುರದಲ್ಲಿ ವಿದ್ಯುತ್ ಸ್ಥಾವರ ಇಲ್ಲ
ಮೈಸೂರು, ಡಿ, 12 : ಚಾಮಲಾಪುರದಲ್ಲಿ ಉಷ್ಣ ವಿದ್ಯುತ್ ಸ್ಥಾವರ ಸ್ಥಾಪಿಸುವ ಆಸಕ್ತಿ ಸರ್ಕಾರಕ್ಕೆ ಇಲ್ಲ. ಹಾಗೆಂದು ಅಧಿಕೃತವಾಗಿ ಯೋಜನೆಯನ್ನು ತಿರಸ್ಕರಿಸಿಲ್ಲ ಎಂದು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಇಂದಿಲ್ಲಿ ಸ್ಪಷ್ಟಪಡಿಸಿದರು.
ನಗರದ ಇಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ನಲ್ಲಿ ಪ್ರಜ್ಞಾವಂತ ನಾಗರಿಕರು ಏರ್ಪಡಿಸಿದ್ದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸುತ್ತೂರು ಮಠದ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿಗಳು ಚಾಮಲಾಪುರ ಉಷ್ಣ ವಿದ್ಯುತ್ ಸ್ಥಾವರ ಬೇಡ. ಇದರಿಂದ ಸುತ್ತಮುತ್ತಲಿನ ಪರಿಸರಕ್ಕೆ ತೀವ್ರ ತೊಂದರೆ ಉಂಟಾಗುತ್ತದೆ. ಆದ್ದರಿಂದ ಈ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ ಎಂದರು.
ಚಾಮಲಾಪುರ ಜನರ ವಿರೋಧದ ನಡುವೆ ಉಷ್ಣ ವಿದ್ಯುತ್ ನಿರ್ಮಾಣ ಮಾಡಬೇಕೆಂಬ ಆಸಕ್ತಿ ಸರ್ಕಾರಕ್ಕೆ ಇಲ್ಲ. ಆದರೆ ಯೋಜನೆಯನ್ನು ಅಧಿಕೃತವಾಗಿ ನಿರಾಕರಿಸಿಲ್ಲ. ಈ ಬಗ್ಗೆ ಮುಂದಿನ ದಿನಗಳಲ್ಲಿ ಸೂಕ್ತ ಚರ್ಚೆ ನಡೆಸಿದ ಬಳಿಕ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವರು ವಿವರಿಸಿದರು.
ಬಿಜಾಪುರದಲ್ಲಿ 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಕೇಂದ್ರ ತೆರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಇದನ್ನು 4 ಸಾವಿರ ಮೆಗಾ ವ್ಯಾಟ್ ಗೆ ಏರಿಸುವಂತೆ ಕೇಂದ್ರಕ್ಕೆ ಒತ್ತಾಯಿಸಿ ಅನುಮೋದನೆ ಪಡೆಯಲಾಗುವುದು ಎಂದರು. ಒಟ್ಟಾರೆ ರಾಜ್ಯದಲ್ಲಿ 1700 ಮೆಗಾವ್ಯಾಟ್ ವಿದ್ಯುತ್ ಕೊರತೆ ಉಂಟಾಗಿದೆ. ಇದನ್ನು ಮುಂದಿನ ದಿನಗಳಲ್ಲಿ ಒಂದೂವರೆ ವರ್ಷದ ಅವಧಿಯಲ್ಲಿ ಸರಿದೂಗಿಸಿಕೊಳ್ಳಲಾಗುವುದು ಎಂದು ಈಶ್ವರಪ್ಪ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)


Click it and Unblock the Notifications
