ಮಲೆನಾಡು ಅಭಿವೃದ್ಧಿಗೆ ಹೆಚ್ಚು ಹಣ : ಈಶ್ವರಪ್ಪ
ಶಿವಮೊಗ್ಗ, ಡಿ. 20 :ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯು 65 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯನ್ನು ಹೊಂದಿದೆ. ಈ ವ್ಯಾಪ್ತಿಯಲ್ಲಿನ ಶಾಸಕರಿಗೆ ಮಂಡಳಿಯಿಂದ 33 ಲಕ್ಷ ರೂ.ಗಳ ಅನುದಾನವನ್ನು ಮಾತ್ರ ನಿಗದಿಪಡಿಸಲಾಗಿದೆ. ಅಭಿವೃದ್ಧಿ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ದೃಷ್ಟಿಯಿಂದ ಪ್ರತಿ ಶಾಸಕರಿಗೆ ನಿಗದಿಪಡಿಸಿರುವ ಅನುದಾನವನ್ನು ಹೆಚ್ಚಿಸುವಂತೆ ಮುಖ್ಯಮಂತ್ರಿಯೊಂದಿಗೆ ಚರ್ಚಿಸಲಾಗುವುದೆಂದು ಇಂಧನ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಕಚೇರಿ ಆವರಣದಲ್ಲಿ ಮಂಡಳಿಯ ನೌಕರರಿಗೆ 1.66 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಸತಿ ನಿರ್ಮಾಣ ಕಾರ್ಯಕ್ಕೆ ಶಂಕುಸ್ಥಾಪನೆಯನ್ನು ಗುರುವಾರ ಅವರು ನೆರವೇರಿಸಿ ಮಾತನಾಡುತ್ತಿದ್ದರು.
ಮಲೆನಾಡು ಪ್ರದೇಶ ವ್ಯಾಪ್ತಿಯಲ್ಲಿ ಜನಸಾಮಾನ್ಯರಿಗೆ ಅಗತ್ಯವಾಗಿ ಬೇಕಾಗುವ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಕ್ಕೆ ತರುವ ದೃಷ್ಟಿಯಿಂದ ಹೆಚ್ಚು ಅನುದಾನ ನೀಡಿ ಮಲೆನಾಡು ಪ್ರದೇಶಾಭಿವೃದ್ಧಿಯನ್ನು ಸದೃಢಗೊಳಿಸುವುದು ಅಗತ್ಯವಾಗಿದೆ ಎಂದು ಹೇಳಿದ ಸಚಿವರು ಬಿಡುಗಡೆ ಆದ ಅನುದಾನ ಪೋಲಾಗದಂತೆ ಎಚ್ಚರ ವಹಿಸಬೇಕೆಂದು ಸಲಹೆ ನೀಡಿದರು. ಗೃಹ ನಿರ್ಮಾಣ ಕಾಮಗಾರಿ ಗುತ್ತಿಗೆ ಪಡೆದಿರುವ ಭೂಸೇನಾ ನಿಗಮವು ಗುಣಮಟ್ಟದ ಕೆಲಸ ಮಾಡುವ ಮೂಲಕ ತನ್ನ ಮೇಲಿರುವ ಕಳಂಕವನ್ನು ನಿವಾರಣೆ ಮಾಡಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಪದ್ಮನಾಭ ಭಟ್ ಅವರು ಮಾತನಾಡಿ ಮಂಡಳಿಯ ಅಧಿಕಾರಿಗಳಿಗೆ ಸಿಬ್ಬಂದಿಗಳಿಗಾಗಿ ಒಟ್ಟು 9 ವಸತಿ ಗೃಹಗಳನ್ನು ನಿರ್ಮಾಣ ಮಾಡಲಾಗುತ್ತಿದೆ. 6 ತಿಂಗಳೊಳಗಾಗಿ ಪೂರ್ಣಗೊಳಿಸಲಾಗುವುದೆಂದು ಹೇಳಿದರು.
ಮಂಡಳಿ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಅವರು ಸ್ವಾಗತ ಕೋರಿದರು. ಕಾರ್ಯಕ್ರಮದಲ್ಲಿ ಗಿರೀಶ್ ಪಟೇಲ್, ನಗರಸಭಾ ಅಧ್ಯಕ್ಷ ಎಂ.ಶಂಕರ್, ನಗರಸಭಾ ಸದಸ್ಯರುಗಳಾದ ಚನ್ನಬಸಪ್ಪ, ಪರಂಧಾಮ ರೆಡ್ಡಿ ಮುಂತಾದವರು ಪಾಲ್ಗೊಂಡಿದ್ದರು. ಉಪಕಾರ್ಯದರ್ಶಿ ಎಸ್. ಹೆಚ್. ವಿಜಯ್ ಕುಮಾರ್ ವಂದಿಸಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications