ಉಗ್ರರ ವಿರೋಧಿ ಅಭಿಯಾನಕ್ಕೆ ಕೈ ಅಡ್ಡಿ, ಲಾಠಿ ಚಾರ್ಜ್
ಬೆಂಗಳೂರು, ಫೆ. 4 : ಭಯೋತ್ಪಾದನೆ ಹೋಗಲಾಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳ ನೇತೃತ್ವದಲ್ಲಿ ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಭಯೋತ್ಪಾದನಾ ವಿರೋಧಿ ಅಭಿಯಾನಕ್ಕೆ ಸಂಬಂಧಿಸಿದಂತೆ ನಗರದ ಸೆಂಟ್ರಲ್ ಕಾಲೇಜಿನಲ್ಲಿ ನಡೆಯುತ್ತಿದ್ದ ಸಭೆಗೆ ಅಡ್ಡಿಪಡಿಸಿ ಕಪ್ಪು ಬಾವುಟ ಪ್ರದರ್ಶನದ ಮೂಲಕ ಪ್ರತಿಭಟನೆ ನಡೆಸುತ್ತಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ನಡೆಸಿರುವ ಘಟನೆ ಇಂದು ಮಧ್ಯಾಹ್ನ ಸೆಂಟ್ರಲ್ ಕಾಲೇಜ್ ಆವರಣದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 20 ಮಂದಿ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ.
ವಿದ್ಯಾರ್ಥಿಗಳಲ್ಲಿ ಭಯೋತ್ಪಾದನೆ ಕುರಿತು ಅರಿವು ಮೂಡಿಸಲು ರಾಜ್ಯ ಸರ್ಕಾರ ರಾಜ್ಯದ ಎಲ್ಲ ಶಾಲಾ ಕಾಲೇಜುಗಳಲ್ಲಿ ಭಯೋತ್ಪಾದನೆ ವಿರೋಧಿ ಅಭಿಯಾನ ನಡೆಸಬೇಕು ಎಂದು ಆದೇಶಿಸಿತ್ತು. ಈ ಸಂಬಂಧ ಸರ್ಕಾರಿ ಆದೇಶವನ್ನೂ ಹೊರಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನಗರದ ಎಲ್ಲ ಶಾಲಾ ಕಾಲೇಜುಗಳ ಪ್ರಿನ್ಸಿಪಾಲರು ಹಾಗೂ ಮುಖ್ಯಶಿಕ್ಷಕರ ಸಭೆಯನ್ನು ಸೆಂಟ್ರಲ್ ಕಾಲೇಜಿನಲ್ಲಿ ಕರೆಯಲಾಗಿತ್ತು. ಇದನ್ನು ವಿರೋಧಿಸಿ ಯುವ ಕಾಂಗ್ರೆಸ್ಸಿಗರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸತೊಡಗಿದರು. ಪರಿಸ್ಥಿತಿ ಕೈ ಮೀರಿದ್ದರಿಂದ ಲಾಠಿ ಚಾರ್ಜ್ ನಡೆಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 20 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಿಜೆಪಿ ಸರ್ಕಾರ ರಾಜ್ಯಾದ್ಯಂತ ಆಯೋಜಿಸಿರುವ ಭಯೋತ್ಪಾದನಾ ವಿರೋಧಿ ಆಭಿಯಾನದಲ್ಲಿ ಪಕ್ಷದ ಹಿತಾಸಕ್ತಿ ಅಡಗಿದೆ. ಅಮಾಯಕ ಮಕ್ಕಳ ಮನಸ್ಸಿನಲ್ಲಿ ಕೇಸರೀಕರಣ ತುಂಬಲು ಸರ್ಕಾರ ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಲೇ ಬಂದಿದೆ. ಬಿಜೆಪಿ ಹಮ್ಮಿಕೊಂಡಿರುವ ಅಭಿಯಾನಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷ ವಿಜಯ ಸಂಕಲ್ಪ ರ್ಯಾಲಿ ಹಮ್ಮಿಕೊಂಡಿದೆ. ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷದ ನಾಯಕ ವಿ ಎಸ್ ಉಗ್ರಪ್ಪ ಸರ್ಕಾರ ಆಯೋಜಿಸಿರುವ ವಿದ್ಯಾರ್ಥಿ ಅಭಿಯಾನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಈ ಅಭಿಯಾನ ಮುಂದುವರೆಯಲು ಬಿಡುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದ್ದರು.
(ದಟ್ಸ್ ಕನ್ನಡ ವಾರ್ತೆ)
ಆರ್ಎಸ್ಎಸ್. ಎಬಿವಿಪಿ ಉಗ್ರರ ಸಂಘಟನೆ: ಡಿಕೆಶಿ












Click it and Unblock the Notifications