ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೈಗಾರಿಕಾ ಚಟುವಟಿಕೆಗಳಿಗೆ ಕರ್ನಾಟಕ ಪ್ರಶಸ್ತ ಸ್ಥಳ

By Staff
|
Google Oneindia Kannada News

K'taka is best place for industries: BSY
ಬೆಂಗಳೂರು, ಜೂ.13: ಕರ್ನಾಟಕ ರಾಜ್ಯ ಇಡಿ ದೇಶದಲ್ಲೇ ಪ್ರಗತಿಪರ ರಾಜ್ಯವಾಗಿದ್ದು, ಉತ್ತಮ ಆಡಳಿತ ಮತ್ತು ಕೈಗಾರಿಕಾ ಬೆಳವಣಿಗೆಗೆ ಪೂರಕವಾದ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಯ ವಾತಾವರಣದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಚಟುವಟಿಕೆಗಳು ಯಾವುದೇ ಅಡ್ಡಿ ಇಲ್ಲದೆ ಮುಕ್ತವಾಗಿ ನಡೆಯಲು ಇಲ್ಲಿ ಪ್ರಶಸ್ತ ವಾತಾವರಣವಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಭಿಪ್ರಾಯಪಟ್ಟರು.

ಅವರು ಇಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಏರ್ಪಡಿಸಿದ್ದ ರಾಜ್ಯಮಟ್ಟದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಹಾಗೂ ಇತರ ಸಂಘ ಸಂಸ್ಥೆಗಳ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ವ್ಯವಹಾರಗಳ ಅಭಿವೃದ್ಧಿ ಹಾಗೂ ಬೆಳವಣಿಗೆಗೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ನೀಡುತ್ತಾ ಬಂದಿರುವ ಸಹಕಾರವನ್ನು ಮೊದಲಿಗೆ ಅಭಿನಂದಿಸಿದ ಮುಖ್ಯಮಂತ್ರಿಗಳು ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕೈಗಾರಿಕರಣದ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ವಿಶನ್ ಕರ್ನಾಟಕ 2020 ಕಾರ್ಯನಿರತವಾಗಿವೆ ಎಂದರು.

ಗ್ರಾಮೀಣಾಭಿವೃದ್ಧಿಗೆ ಹೆಚ್ಚು ಒತ್ತು ನೀಡಿ ಗ್ರಾಮೀಣ ಪ್ರದೇಶದ ಜನರಿಗೆ ಆದಾಯ ಹೆಚ್ಚಿಸಲು ಅವರ ಜೀವನ ಮಟ್ಟ ಸುಧಾರಿಸಲು ಕಾರ್ಯಕ್ರಮ ರೂಪಿಸಲಾಗಿದೆ. ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಶಿಕ್ಷಣ ಕ್ರಮದಲ್ಲಿ ಸುಧಾರಣೆಗಳನ್ನು ತರುವ ಕುರಿತು ಯೋಜಿಸಲಾಗುತ್ತಿದೆ.ಸರ್ಕಾರವು ನಗರ ಹಾಗೂ ಕೈಗಾರಿಕೆಗಳನ್ನು ವ್ಯವಸ್ಥಿತವಾಗಿ ಅಭಿವೃದ್ದಿಪಡಿಸಲು ಸಂಪೂರ್ಣ ಗಮನಹರಿಸಿದ್ದು ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ ಹಾಗೂ ಆರೋಗ್ಯ ಸುಧಾರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದೆ ಎಂದರು.

ಕರ್ನಾಟಕದಲ್ಲಿ ವ್ಯಾಪಕ ಮಟ್ಟದಲ್ಲಿ ಕೈಗಾರಿಕಾ ಬೆಳವಣಿಗೆಗೆ ಅನುಕೂಲವಾಗುವಂತೆ ಸರ್ಕಾರವು ಹಲವಾರು ಕೈಗಾರಿಕ ನೀತಿಗಳನ್ನು ರೂಪಿಸಿದೆ. ಕೈಗಾರಿಕಾ ನೀತಿಗೆ ಪೂರಕವಾಗಿ ಕೈಗಾರಿಕಾ ವಲಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಸ್ಥಳೀಯವಾಗಿ ಲಭ್ಯವಾಗುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಮುಖವಾಗಿ ಉಕ್ಕು, ಸಿಮೆಂಟ್, ಜವಳಿ ಉದ್ಯಮ ಆಹಾರ ಸಂಸ್ಕೃರಣ, ಆಟೋಮೊಬೈಲ್, ಜೈವಿಕ ತಂತ್ರಜ್ಞಾನ ಅಭಿವೃದ್ದಿಯಾಗಬೇಕು ಎನ್ನುವ ಆಶಯವನ್ನು ಅವರು ವ್ಯಕ್ತಪಡಿಸಿದರು.

ರಾಜ್ಯದ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸುವ ಯೋಜನೆಯಡಿಯಲ್ಲಿ 66,000 ಕಿ.ಮಿ.ಗಳ ಯೋಜನೆಯನ್ನು ಕೆ.ಆರ್.ಡಿ.ಸಿ.ಎಲ್ ಮೂಲಕ ಕೈಗೆತ್ತಿಕೊಳ್ಳಲಾಗಿದೆ. ಇದರ ಅಡಿಯಲ್ಲಿ 10,000 ಕಿ.ಮಿ. ರಾಜ್ಯ ಹೆದ್ದಾರಿ ಹಾಗೂ 12,600 ಕಿ.ಮಿ. ಗ್ರಾಮೀಣ ರಸ್ತೆಗಳ ಅಭಿವೃದ್ಧಿಪಡಿಸಲಾಗುವುದು. ಡಾ.ಡಿ.ಎಂ. ನಂಜುಂಡಪ್ಪ ವರದಿಯ ಆಧಾರದ ಮೇಲೆ 114 ಹಿಂದುಳಿದ ತಾಲ್ಲೂಕುಗಳಲ್ಲಿ ವಿಶೇಷ ಅಭಿವೃದ್ದಿ ಕಾರ್ಯಕ್ರಮಗಳನ್ನು ಕೈಗೊಳ್ಳಲು ಬಜೆಟ್‌ನಲ್ಲಿ ಅನುದಾನ ಒದಗಿಸಲಾಗಿದ್ದು ಪ್ರಾದೇಶಿಕ ಅಭಿವೃದ್ದಿ ಮಂಡಳಿಗಳಿಗೆ ಪ್ರಾಶಸ್ತ್ಯ ನೀಡಲಾಗಿದೆ ಎಂದರು.

ರಾಜ್ಯವನ್ನು ಪ್ರಗತಿಪಥದತ್ತ ಕೊಂಡ್ಯೊಯ್ಯುವ ಈ ಎಲ್ಲಾ ಪ್ರಯತ್ನಗಳಿಗೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳ ಸಕ್ರಿಯ ಪಾತ್ರವೂ ಅಗತ್ಯ. ಈ ನಿಟ್ಟಿನಲ್ಲಿ ತಮ್ಮ ಸಹಕಾರ ಬಯಸುತ್ತೇನೆ ಎಂದ ಮುಖ್ಯಮಂತ್ರಿಗಳು ರಾಜ್ಯಮಟ್ಟದ ಈ ಸಮ್ಮೇಳನದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೈಗೊಳ್ಳುವ ನಿರ್ಣಯಗಳನ್ನು ಅನುಷ್ಠಾನಕ್ಕೆ ತರಲು ರಾಜ್ಯಸರ್ಕಾರ ಮುಕ್ತ ಮನಸ್ಸಿನಿಂದಿದೆ ಎಂದರು. ಕಾರ್ಯಕ್ರಮದಲ್ಲಿ ರಾಜ್ಯ ಯೋಜನಾ ಮಂಡಳಿಯ ಡೆಪ್ಯುಟಿ ಛೇರ್‌ಮನ್ ಡಿ.ಹೆಚ್. ಶಂಕರಮೂರ್ತಿ, ಅಸೋಚಮ್ ಅಧ್ಯಕ್ಷ ಸಜ್ಜನ್ ಜಿಂದಾಲ್, ಎಫ್ ಕೆ ಸಿ ಸಿ ಐ ಅಧ್ಯಕ್ಷ ಬಿ. ಮುರುಳೀಧರ್ ಹಾಗೂ ಎಲ್ಲಾ ಜಿಲ್ಲೆಗಳಿಂದ ಬಂದ ಪ್ರತಿನಿಧಿಗಳು ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X