ಉಪಚುನಾವಣೆ : ಮೂರರಲ್ಲಿ ಜೆಡಿಎಸ್ ಸ್ಪರ್ಧೆ

ಪಕ್ಷದ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ನಿವಾಸದಲ್ಲಿ ಇಂದು ನಡೆದ ಮುಖಂಡರ ಸಭೆಯಲ್ಲಿ ಚಿತ್ತಾಪುರ ಮತ್ತು ಗೋವಿಂದರಾಜನಗರ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ ಮೂರು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಅಖಾಡಕ್ಕಿಳಿಸಲು ನಿರ್ಧರಿಸಲಾಗಿದೆ. ಕೊಳ್ಳೇಗಾಲದಿಂದ ಮಾಜಿ ಶಾಸಕ ಬಾಲರಾಜ್ ಅವರಿಗೆ ಟಿಕೆಟ್ ನೀಡಲು ನಿರ್ಧರಿಸಿದ್ದು, ರಾಮನಗರ ಕ್ಷೇತ್ರದಲ್ಲಿ ರಾಜು ಅವರನ್ನು ಪಕ್ಷದ ಅಭ್ಯರ್ಥಿಯಾಗಿಸಲು ನಿರ್ಧರಿಸಲಾಗಿದೆ. ಚನ್ನಪಟ್ಟಣದಲ್ಲಿ ಚುನಾವಣೆಯಲ್ಲಿ ಯೋಗೇಶ್ವರ್ ಅವರ ವಿರುದ್ಧ ಕೆಲವೆ ಮತಗಳ ಅಂತರದಲ್ಲಿ ಪರಾಭವಗೊಂಡಿದ್ದ ಅಶ್ವಥ್ ಅವರನ್ನು ಚುನಾವಣೆ ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ನಾಳೆ ಈ ಬಗ್ಗೆ ಅಧಿಕೃತವಾಗಿ ಅಭ್ಯರ್ಥಿಗಳ ಹೆಸರು ಪ್ರಕಟವಾಗಲಿವೆ.
ಗೋವಿಂದರಾಜನಗರ ಮತ್ತು ಚಿತ್ತಾಪುರ ಕ್ಷೇತ್ರಗಳಲ್ಲಿ ಬಿಜೆಪಿ ಸೋಲಿಸುವ ಏಕೈಕ ಉದ್ದೇಶದಿಂದ ಕಾಂಗ್ರೆಸ್ ಜೊತೆಗೆ ಕೈಜೋಡಿಸಲು ನಿರ್ಧರಿಸಲಾಗಿದೆ. ಅಲ್ಲದೇ ಚಿತ್ತಾಪುರದಲ್ಲಿ ಪಕ್ಷದ ಉತ್ತಮ ನೆಲೆ ಇಲ್ಲದಿರುವುದರಿಂದ ಆ ಕ್ಷೇತ್ರದಲ್ಲಿ ಸ್ಪರ್ಧಿಸದಿರಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications