ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗ್ರಾಮೀಣ ಪ್ರದೇಶದ ಮಕ್ಕಳು ಪ್ರತಿಭಾವಂತರು : ರಾವ್

By Staff
|
Google Oneindia Kannada News

 Science should reach rural students ; UR Rao
ಗುಲಬರ್ಗಾ, ಸೆ. 24 : ಗ್ರಾಮೀಣ ಪ್ರದೇಶದ ಮಕ್ಕಳು ವಿಜ್ಞಾನದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದು, ಸಂಚಾರಿ ವಾಹನಗಳ ವಿಜ್ಞಾನ ಪ್ರಯೋಗಾಲಯಗಳನ್ನು ಹಳ್ಳಿ ಹಳ್ಳಿಗೂ ತಲುಪಿಸಬೇಕಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಅಧ್ಯಕ್ಷ ಪ್ರೊ. ಯು.ಆರ್.ರಾವ್ ಅವರು ಹೇಳಿದರು.

ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಬುಧವಾರ ಆಯೋಜಿಸಿದ್ದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ದ್ವಿತೀಯ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅವರು, ಸ್ವಾತಂತ್ರ್ಯ ಬಂದು 63 ವರ್ಷಗಳಲ್ಲಿ ಭಾರತ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ತುಂಬಾ ಮುಂದುವರಿದಿದೆ. ಸ್ವಾತಂತ್ರ್ಯ ಪೂರ್ವದಲ್ಲಿ 30 ಕೋಟಿ ಇದ್ದ ದೇಶದ ಜನಸಂಖ್ಯೆ ಈಗ 100 ಕೋಟಿ ದಾಟಿದೆ. ಜನಸಂಖ್ಯೆಗೆ ಅನುಗುಣವಾಗಿ ಆಹಾರ ಬೇಡಿಕೆ ಹೆಚ್ಚಾಗಿದ್ದು, ತಂತ್ರಜ್ಞಾನದ ನೆರವಿನೊಂದಿಗೆ ಹೆಚ್ಚಿನ ಆಹಾರ ಸಾಮಗ್ರಿಗಳನ್ನು ಉತ್ಪಾದಿಸಬಹುದಾಗಿದೆ ಎಂದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಕೃಷಿ, ಆರೋಗ್ಯ, ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಹೇಗೆ ಕೆಲಸ ಮಾಡುತ್ತದೆ ಎಂಬುದರ ಬಗ್ಗೆ ಅರಿವು ಮೂಡಿಸಬೇಕಾಗಿದೆ. ಅಂತರ್ಜಾಲದ ಈ ಯುಗದಲ್ಲಿ ವಿಜ್ಞಾನ, ತಂತ್ರಜ್ಞಾನವು ಸಮಾಜದ ಎಲ್ಲಾ ಆಯಾಮಗಳನ್ನು ನೇರವಾಗಿ ನಿಯಂತ್ರಿಸುತ್ತಿದೆ ಎಂದು ಹೇಳಿದರು.

ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ 2 ಎಕರೆ ಭೂಮಿಯನ್ನು ಕೊಡಲಾಗುವುದು. ಕಟ್ಟಡ ನಿರ್ಮಾಣಕ್ಕೆ 5 ಕೋಟಿ ರೂ. ಮಂಜೂರು ಮಾಡಲಾಗುವುದು. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಅಭಿವೃದ್ಧಿಗೆ ಬೇಕಾದ ಆರ್ಥಿಕ ನೆರವನ್ನು ನೀಡಲು ಸರ್ಕಾರ ಸಿದ್ಧವಿದೆ ಎಂದು ಹೇಳಿದರು.
ಅಮೆರಿಕಾ ಸೇರಿದಂತೆ ಪಾಶ್ಚಾತ್ಯ ರಾಷ್ಟ್ರಗಳ ಪ್ರಗತಿಯಲ್ಲಿ ಭಾರತೀಯರ ಪಾತ್ರ ಬಹಳ ದೊಡ್ಡದಿದೆ. ಇಂಥ ಪ್ರತಿಭಾವಂತರನ್ನು ಈ ನಾಡಿನ ಅಭಿವೃದ್ಧಿಯಲ್ಲಿ ಉಪಯೋಗಿಸಿಕೊಳ್ಳಲು ಹಿಂದೇಟು ಹಾಕುವುದು ಸರಿಯಲ್ಲ. ಈ ಬಗ್ಗೆ ಚಿಂತನೆಯಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಮೀನುಗಾರಿಕೆ ಸಚಿವ ಆನಂದ ವಸಂತ ಅಸ್ನೋಟಿಕರ್ ಅವರು, ಕಳೆದ ಒಂದು ದಶಕದಲ್ಲಿ ಕರ್ನಾಟಕ ಹಲವಾರು ಸುಧಾರಣೆಗಳನ್ನು ಕಂಡಿದೆ. ವಿಶ್ವವಿದ್ಯಾಲಯಗಳಿಂದ ಬರುತ್ತಿರುವ ಮಾನವ ಸಂಪನ್ಮೂಲಕ್ಕೆ ಬೇಡಿಕೆ ಹೆಚ್ಚಿದೆ ಎಂದರು. ನಮ್ಮಲ್ಲಿ ಕೇವಲ ಶೇಕಡ 12.4 ರಷ್ಟು ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುದಿದ್ದರೆ ಮುಂದುವರಿದ ದೇಶಗಳಲ್ಲಿ ಈ ಪ್ರಮಾಣ ಶೇ. 25ಕ್ಕೂ ಹೆಚ್ಚಿದೆ. ಉನ್ನತ ಶಿಕ್ಷಣ ಪ್ರವೇಶದ ಪ್ರಮಾಣವನ್ನು ನಾವು ಶೇ.25 ಕ್ಕೆ ಹೆಚ್ಚಿಸಬೇಕಾಗಿದೆ. ಅದೇ ರೀತಿ ವಿಜ್ಞಾನದಲ್ಲಿ ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ಈಗ ಕೇವಲ ಶೇ 5ರಷ್ಟು ಕನಿಷ್ಠ ಶೇ.10ಕ್ಕೆ ಈ ಪ್ರಮಾಣವನ್ನು ಹೆಚ್ಚಿಸಬೇಕಾಗಿದೆ ಎಂದು ಅವರು ಹೇಳಿದರು.

ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಜಿ.ಮೂಲಿಮನಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಪ್ರತಾಪ್‌ಸಿಂಗ್ ತಿವಾರಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಪ್ರಾದೇಶಿಕ ಸಂಯೋಜಕ ಹಾಗೂ ಸದಸ್ಯ ಕಾರ್ಯದರ್ಶಿ ಪ್ರೊ.ಪಿ.ಎಸ್.ಶಂಕರ್, ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ ಎ.ಎಂ.ಪಠಾಣ್, ಭಾರತೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಪ್ರೊ ಪಿ. ಬಲರಾಮ್, ಕರ್ನಾಟಕ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಎಂ.ಐ. ಸವದತ್ತಿ, ಸಚಿವ ರೇವುನಾಯಕ್ ಬೆಳಮಗಿ, ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಮರನಾಥ್ ಪಾಟೀಲ್, ಎಂ.ಎಸ್.ಐ.ಎಲ್. ಅಧ್ಯಕ್ಷ ಡಾ ವಿಕ್ರಮ ಪಾಟೀಲ್, ಶಾಸಕರಾದ ಸುನೀಲ್ ವಲ್ಲ್ಯಾಪುರೆ, ಚಂದ್ರಶೇಖರ ಪಾಟೀಲ್ ರೇವೂರ, ವಾಲ್ಕೀಕಿ ನಾಯಕ್, ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಸಮಾರಂಭದ ಅಂಗವಾಗಿ ಪದ್ಮಭೂಷಣ ಪುರಸ್ಕೃತ ಪ್ರೊ ರೊದ್ದಮ್ ನರಸಿಂಹ ಅವರಿಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ 2009ನೇ ಸಾಲಿನ ಪ್ರತಿಷ್ಠಿತ ವೈಜ್ಞಾನಿಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಭಾರತೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಪ್ರೊ ಪಿ. ಬಲರಾಮ ಅವರಿಗೆ ಗುಲಬರ್ಗಾ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X