ಪುನರ್ವಸತಿ ಕಾರ್ಯ ಆರಂಭ : ಶೋಭಾ
ಬೆಂಗಳೂರು, ಅ. 30 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಅವರು ನೆರೆಪೀಡಿತ ಜಿಲ್ಲೆಗಳ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೊಕಾನ್ಫರೆನ್ಸ್ ನಡೆಸಿ, ಇಲಾಖೆಯಿಂದ ಕೈಗೆತ್ತಿಕೊಳ್ಳಲಾಗಿರುವ ಪರಿಹಾರ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದರು.
ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎಲ್ಲ ಜಿಲ್ಲೆಗಳಲ್ಲಿ ಇನ್ನು 15 ದಿನದೊಳಗೆ ಜನಜೀವನ ಸಹಜ ಸ್ಥಿತಿಗೆ ಮರಳುವುದು ಗ್ರಾಮಗಳಲ್ಲಿ ಕುಡಿಯುವ ನೀರಿನ ಸೌಲಭ್ಯ, ರಸ್ತೆ ದುರಸ್ತಿ ಕಾರ್ಯಗಳು ಸಮರೋಪಾದಿಯಲ್ಲಿ ನಡೆಯುತ್ತಿದ್ದು, ಜನ ನೆರೆಯನ್ನು ಮರೆಯುವ ರೀತಿಯಲ್ಲಿ ಪರಿಹಾರ ಕಾರ್ಯಗಳು ನಡೆಯಲಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಪ್ರವಾಹ ಪೀಡಿತ ಹನ್ನೊಂದು ಜಿಲ್ಲೆಗಳಾದ ಬೀದರ್, ಗುಲ್ಬರ್ಗ, ರಾಯಚೂರು, ಬಳ್ಳಾರಿ, ಕೊಪ್ಪಳ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಿಂದ ಪ್ರವಾಹದಿಂದ ಸಂಭವಿಸಿದ ನಷ್ಟ, ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಕೈಗೆತ್ತಿಕೊಳ್ಳಲಾಗಿರುವ ಎಲ್ಲ ಪರಿಹಾರ ಕಾಮಗಾರಿಗಳನ್ನು ನವೆಂಬರ್ 7ರೊಳಗೆ ಪೂರ್ಣಗೊಳಿಸಬೇಕು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆ ಸರಿಪಡಿಸಿದ ನಂತರ ನೀರಿನ ಗುಣಮಟ್ಟವನ್ನು ಕಡ್ಡಾಯವಾಗಿ ಪರೀಕ್ಷೆ ಮಾಡುವಂತೆ ಅವರು ಸೂಚಿಸಿದರು.
ನೆರೆ ನಷ್ಟ ಸಮೀಕ್ಷಾ ಕಾರ್ಯದಲ್ಲಿ ತೊಡಗಿರುವ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಹಾಗೂ ಈ ಬಗ್ಗೆ ಮೇಲ್ವಿಚಾರಣೆ ನಡೆಸುವಂತೆ ಸಿಇಓಗಳಿಗೆ ನಿರ್ದೇಶನ ನೀಡಿದರು. ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳ ಖಾಲಿ ಇರುವ ಹುದ್ದೆಗಳಿಗೆ ಇತರ ಜಿಲ್ಲೆಗಳಿಂದ ನಿಯೋಜನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಭಾರತ ಸರ್ಕಾರವು ರಾಜ್ಯಕ್ಕೆ 2300 ಕೋಟಿ ರೂಪಾಯಿಗಳ ಗುರಿ ನೀಡಿದ್ದು, ಈ ವರೆಗೆ 770 ಕೋಟಿ ರೂಪಾಯಿ ವೆಚ್ಚವಾಗಿದೆ. ನವೆಂಬರ್ ತಿಂಗಳ ಅಂತ್ಯದೊಳಗೆ ಶೇ. 50 ರಷ್ಟರ ಗುರಿ ಸಾಧಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನೆರೆಪೀಡಿತ ಪ್ರದೇಶಗಳಲ್ಲಿ ಗ್ರಾಮಗಳ ಸ್ಥಳಾಂತರಕ್ಕೆ ಸಂಬಂಧಿಸಿದಂತೆ ಬಡಾವಣೆಗಳ ನಿರ್ಮಾಣ ಕಾರ್ಯವನ್ನೂ ಈ ಯೋಜನೆಯಡಿ ಕೈಗೆತ್ತಿಕೊಳ್ಳುವಂತೆ ಅವರು ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications