ರಾಜೀನಾಮೆ ಸಲ್ಲಿಸುವ ಪ್ರಶ್ನೆಯೇ ಇಲ್ಲ: ಶೋಭಾ
ಬೆಂಗಳೂರು, ಅ.31: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರನ್ನು ಸಂಪುಟದಿಂದ ಕೈಬಿಡಲು ತೀರ್ಮಾನಿಸಿದ್ದಾರೆ ಎಂಬ ಸುದ್ದಿಯನ್ನು ಶೋಭಾ ಕರಂದ್ಲಾಜೆ ಅವರು ನಿರಾಕರಿಸಿದರು. ಇದು ಕೇವಲ ವದಂತಿ ಅಷ್ಟೇ.ಈ ರೀತಿಯ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿಯಲ್ಲಿನ ಬಿಕ್ಕಟ್ಟು ಶಮನಗೊಳಿಸುವ ಸಲುವಾಗಿ ಕರೆದಿದ್ದ ಸಭೆಯಲ್ಲಿ ಅನೇಕ ಮುಖಂಡರು ಶೋಭಾ ಮತ್ತು ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ವಿ.ಪಿ ಬಳಿಗಾರ್ ವಿರುದ್ಧ ಅರುಣ್ ಜೇಟ್ಲಿಗೆ ದೂರು ನೀಡಿದ್ದಾರೆ. ಹೀಗಾಗಿ ಈ ನಿರ್ಧಾರ ತೆಗೆದುಕೋಳ್ಳಲು ಅವರು ತೀರ್ಮಾನಿಸಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು.
ಈ ಬಗ್ಗೆ ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ ಅವರು, ಇದೆಲ್ಲಾ ಸತ್ಯಕ್ಕೆ ದೂರವಾದ ಮಾತು. ತಾವು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸಿಲ್ಲ. ಮಾಧ್ಯಮಗಳು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ. ತಾವು ಆರ್ ಎಸ್ ಎಸ್ ಕಾರ್ಯಕರ್ತೆಯಾಗಿ, ಬಿಜೆಪಿಯ ಕಾರ್ಯದರ್ಶಿಯಾಗಿ ಇದೀಗ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದೇವೆ. ಸಚಿವ ಸ್ಥಾನದಲ್ಲಿ ಮುಂದುವರಿದು ಉತ್ತಮ ಕಾರ್ಯಗಳನ್ನು ನಿರ್ವಹಿಸುವುದಾಗಿ ಅವರು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications