ರೆಡ್ಡಿಗಳ ವಜಾ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಇಂದು ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಆರ್ ವಿ ದೇಶಪಾಂಡೆ, ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ, ವಿ ಎಸ್ ಉಗ್ರಪ್ಪ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಸರಕಾರದ ಧೋರಣೆಯನ್ನು ತೀವ್ರವಾಗಿ ಖಂಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗಳನ್ನು ಕೂಡಲೇ ರದ್ದುಗೊಳಿಸಬೇಕು. ಪ್ರಕರಣವನ್ನು ಸಿಬಿಐ ತನಿಖೆಗ ವಹಿಸಬೇಕು. ಹಾಗೂ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವ ರೆಡ್ಡಿ ಸಹೋದರರು ಮತ್ತು ಶ್ರೀರಾಮುಲು ಅವರನ್ನು ಕೂಡಲೇ ಸಂಪುಟದಿಂದ ಕೈಬಿಡಬೇಕು ಎಂದು ಅವರು ಆಗ್ರಹಿಸಿದರು.
ಸರಕಾರ ನವೆಂಬರ್ 30ರೊಳಗೆ ಈ ಬಗ್ಗೆ ಸೂಕ್ತ ಕ್ರಮಕೊಳ್ಳದಿದ್ದರೆ ಡಿಸೆಂಬರ್ 7 ರಿಂದ 9ರ ವರೆಗೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಇದಕ್ಕೂ ಮೊದಲು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ, ವಿದ್ಯುತ್ ಕಡಿತವನ್ನು ಮಾಡಿ ರಾಜ್ಯವನ್ನು ಕತ್ತಲೆಗೆ ದೂಡಿರುವ ಸರಕಾರ ಕ್ರಮ ಖಂಡನೀಯ. ಪಡಿತರ ಚೀಟಿ ವಿತರಿಸದೇ ಬಡವರಿಗೆ ಅನ್ಯಾಯ ಮಾಡಿರುವ ಬೇಜಾವ್ದಾರಿ ಸರಕಾರ ಉಡಾಫೆಯಿಂದ ವರ್ತಿಸುತ್ತಿದೆ ಎಂದಿ ಅವರು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಇಲ್ಲದೇ ಜನ ಸಂಕಷ್ಟಕ್ಕೀಡಾಗಿದ್ದಾರೆ. ರಾಜ್ಯವನ್ನು ಅಂಧಕಾರದಲ್ಲಿ ಮುಳುಗಿಸಿರುವ ಬಿಜೆಪಿ ಸರಕಾರವೂ ಕೂಡ ಕುರುಡಾಗಿದೆ ಎಂದು ಟೀಕಿಸಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications