ಎಂಎಲ್ಸಿ ಚುನಾವಣೆ : ಕಾಂಗ್ರೆಸ್ ಜೆಡಿಎಸ್ ದೋಸ್ತಿ

ಕೇಂದ್ರ ಆರೋಗ್ಯ ಸಚಿವ ಹಾಗೂ ರಾಜ್ಯದ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡಿರುವ ಗುಲಾಮ್ ನಬಿ ಅಜಾದ್ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಬಿಜೆಪಿ ಸರಕಾರದ ದುರಾಡಳಿತದಿಂದ ರಾಜ್ಯದ ಜನತೆ ಬೇಸತ್ತು ಹೋಗಿದ್ದಾರೆ. ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಕೆಟ್ಟ ಸರಕಾರವನ್ನು ಸೋಲಿಸುವ ಏಕೈಕ ಉದ್ದೇಶದಿಂದ ಕಾಂಗ್ರೆಸ್ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ. ವಿಧಾನ ಪರಿಷತ್ ಚುನಾವಣೆಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಉತ್ಸುಕವಾಗಿದೆ. ಆದರೆ, ಸೀಟು ಪ್ರಕ್ರಿಯೆ ಇನ್ನೂ ಅಂತಿಮಗೊಂಡಿಲ್ಲ ಎಂದರು.
ರಾಜ್ಯ ವಿಧಾನ ಪರಿಷತ್ ಚುನಾವಣೆ ಹಾಗೂ ಜೆಡಿಎಸ್ ಜೊತೆಗಿನ ಮೈತ್ರಿ ವಿಷಯ ಚರ್ಚಿಸಲು ಗುಲಾಮ್ ನಬಿ ಅಜಾದ್ ಇಂದು ಸಂಜೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. 25 ಸ್ಥಾನಗಳಲ್ಲಿ 7 ಸ್ಥಾನಗಳನ್ನು ಜೆಡಿಎಸ್ ಗೆ ಬಿಟ್ಟುಕೊಡುವಂತೆ ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ. 7 ಸೀಟುಗಳು ಕೂಡಾ ಜೆಡಿಎಸ್ ಪ್ರಾಬಲ್ಯ ಹೊಂದಿರುವ ದಕ್ಷಿಣ ಕರ್ನಾಟಕ ಪ್ರದೇಶಗಳು ಎನ್ನುವುದು ವಿಶೇಷವಾಗಿದೆ. ಆದರೆ, ಈ ಬಗ್ಗೆ ರಾಜ್ಯ ಕಾಂಗ್ರೆಸ್ ಪಕ್ಷದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎನ್ನಲಾಗಿದೆ.
ಡಿಸೆಂಬರ್ 1 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಗೆಲ್ಲುವು ಕುದುರೆಗಳಿಗಾಗಿ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳಲ್ಲಿ ಹುಡುಕಾಟ ತೀವ್ರಗೊಂಡಿದೆ. ಕಾಂಗ್ರೆಸ್ ನಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಹನುಮಂತನ ಬಾಲದಂತಿದೆ. ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದು, ವರಿಷ್ಠರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸುತ್ತಿದ್ದಾರೆ.
ಇತ್ತ ಬಿಜೆಪಿ ನಾಯಕರು ಚುನಾವಣೆ ರಣತಂತ್ರ ರೂಪಿಸಲಾಗುತ್ತಿದ್ದು, ಶೀಘ್ರವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿಕೊಂಡಿದ್ದರು. ಆದರೆ, ಕಾಂಗ್ರೆಸ್-ಜೆಡಿಎಸ್ ನಡೆ ನೋಡಿಕೊಂಡು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ವಿಳಂಬ ನೀತಿ ಅನುಸರಿಸುತ್ತಿದೆ. ಒಟ್ಟಿನಲ್ಲಿ ಕಾಂಗ್ರೆಸ್ ಜೆಡಿಎಸ್ ಮಧ್ಯೆ ವಿಷಯಾಧಾರಿತ ಮೈತ್ರಿ ಏರ್ಪಟ್ಟಿದ್ದು, ಸಮಯ ಸಾಧಕ ರಾಜಕೀಯಕ್ಕೆ ಮತ್ತೊಂದು ಸಾಕ್ಷಿಯಾಗಿದೆ. ಉಪಚುನಾವಣೆ ಸಮಯದಲ್ಲಿ ಪರೋಕ್ಷ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ಇದೀಗ ಪ್ರತ್ಯಕ್ಷವಾಗಿಯೇ ಮೈತ್ರಿಗೆ 'ಕೈ'ಹಾಕಿದೆ. ಕಾಂಗ್ರೆಸ್ ಕೂಡ ಪಾಣಿಗ್ರಹಣಕ್ಕೆ ಮುಂದಾಗಿರುವುದು ಬಿಜೆಪಿಯನ್ನು ಬೇಸ್ತು ಬೀಳಿಸಿದೆ. ಆದರೆ, ಮೈತ್ರಿಯನ್ನು ತೀವ್ರವಾಗಿ ವಿರೋಧಿಸುತ್ತಿದ್ದ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಯಾವ ಪ್ರತಿಕ್ರಿಯೆ ನೀಡಿಲ್ಲ.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications