ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಖಾತ್ರಿ?

By Staff
|
Google Oneindia Kannada News

Vidhana Parishath election
ಬೆಂಗಳೂರು, ನ. 28 : ಡಿಸೆಂಬರ್ 8ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿರುವ ಗುಲಾಂ ನಬಿ ಆಜಾದ್ ಅವರು ಇಂದು ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಆಗುತ್ತಿರುವುದು ಸಾಕಷ್ಟು ಕುತೂಹಲಗಳಿಗೆ ಕಾರಣವಾಗಿದೆ.

ರಾಜ್ಯದಲ್ಲಿ ಬಿಜೆಪಿಯನ್ನು ಬಗ್ಗುಬಡಿಯುವ ನಿಟ್ಟಿನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮರುಮೈತ್ರಿಗೆ ಸೋನಿಯಾ ತಾತ್ವಿಕವಾಗಿ ಒಪ್ಪಿಗೆ ನೀಡುವ ಸೂಚನೆ ದಟ್ಟವಾಗಿದೆ. ಇದು ಬಿಜೆಪಿಯಲ್ಲಿ ಮಾತ್ರವಲ್ಲ ಕಾಂಗ್ರೆಸ್ ಪಾಳಯದಲ್ಲಿಯೂ ಆತಂಕಗಳಿಗೆ ದಾರಿಮಾಡಿಕೊಟ್ಟಿದೆ.

ಪರಿಷತ್ ಚುನಾವಣೆಯಲ್ಲಿ 25 ಸ್ಥಾನಗಳಿಗೆ ಪಟ್ಟಿಯನ್ನು ಸಿದ್ಧಗೊಳಿಸಲು ಸೇರಿದ್ದ ಬಿಜೆಪಿ ನಾಯಕರು ಅಂತಿಮ ಪಟ್ಟಿ ಸಿದ್ಧಪಡಿಸುವುದನ್ನು ಒಂದು ದಿನ ಮುಂದೂಡಿದ್ದಾರೆ. ರಾಜಕೀಯ ಬದಲಾವಣೆಗಳನ್ನು ಗಮನಿಸಿ ಪಟ್ಟಿ ಅಂತಿಮಗೊಳಿಸಲು ಮತ್ತು ಕಾದು ನೋಡುವ ತಂತ್ರ ಅನುಸರಿಸಲು ಬಿಜೆಪಿ ನಾಯಕರು ತೀರ್ಮಾನಿಸಿದ್ದಾರೆ.

ಮತ್ತೊಂದೆಡೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾಂಗ್ರೆಸ್ ಪಾಳಯದಲ್ಲಿಯೇ ಅಸಮಾಧಾನದ ಹೊಗೆ ಎಬ್ಬಿಸಿದೆ. ಹಾಸನದ ಕಾಂಗ್ರೆಸ್ ನಾಯಕ ಬಿ ಶಿವರಾಂ ಅವರು, ದೂರದೃಷ್ಟಿಯಿಂದ ನೋಡಿದರೆ ಈ ಮರುಮೈತ್ರಿ ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯದಲ್ಲ ಎಂದು ಅಸಮಾಧಾನವನ್ನು ಹೊರಗೆಡಹಿದ್ದಾರೆ. ಆದರೆ, ಜೆಡಿಎಸ್ ರಾಜ್ಯಾಧ್ಯಕ್ಷ ಸಂಸದ ಎಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಮಾತುಕತೆ ನಡೆಸುತ್ತಿದ್ದಾರೆ.

ಬಿಜೆಪಿ ಪಟ್ಟಿ ನಾಳೆ : ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ಸೆಡ್ಡುಹೊಡೆಯಲು ಬಿಜೆಪಿ ಕೂಡ ಕಾರ್ಯತಂತ್ರ ರೂಪಿಸುತ್ತಿದೆ. ಬಿಜೆಪಿಯ ಮೂಲ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪಗಳ ಬಂದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಅತ್ಯಂತ ಎಚ್ಚರಿಕೆಯಿಂದ ಪಟ್ಟಿಯನ್ನು ಸಿದ್ಧಪಡಿಸುತ್ತಿದ್ದಾರೆ. ಈಗಾಗಲೆ ಸಂಭವನೀಯರ ಪಟ್ಟಿ ಸಿದ್ಧಪಡಿಸಿದ್ದರೂ ಅಂತಿಮ ಪಟ್ಟಿಯನ್ನು ವರಿಷ್ಠರೊಡನೆ ಭಾನುವಾರ ಚರ್ಚಿಸಿ ಪ್ರಕಟಿಸಲಾಗುವುದು ಎಂದು ರಾಜ್ಯಾಧ್ಯಕ್ಷ ಸದಾನಂದ ಗೌಡ ತಿಳಿಸಿದ್ದಾರೆ.

ಪಕ್ಷಕ್ಕಾಗಿ ದುಡಿದಿರುವ ಪ್ರಾಮಾಣಿಕ ಕಾರ್ಯಕರ್ತರಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುವುದು. ಇದಕ್ಕಾಗಿ ಅಷ್ಟಸೂತ್ರಗಳನ್ನು ಸಿದ್ಧಪಡಿಸಲಾಗಿದೆ. ಈ ಸೂತ್ರದಂತೆಯೇ ಅಭ್ಯರ್ಥಿಗಳ ಆಯ್ಕೆಯ ಪ್ರಕ್ರಿಯೆ ನಡೆಯಲಿದೆ. ಎಲ್ಲ 25 ಸ್ಥಾನಗಳಿಗೂ ಬಿಜೆಪಿ ಸ್ಪರ್ಧಿಸಲಿದೆ ಮತ್ತು ಕನಿಷ್ಠ 20 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸದಾನಂದ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೇಲ್ಮನೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಡಿಸೆಂಬರ್ 1, ಮಂಗಳವಾರ ಅಂತಿಮ ದಿನವಾಗಿದೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X