ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೂತನ ಯೋಜನೆ ಅನುಷ್ಠಾನಕ್ಕೆ ಶೀಘ್ರ ಅನುಮೋದನೆ

By * ರೋಹಿಣಿ, ಬಳ್ಳಾರಿ
|
Google Oneindia Kannada News

BS Yeddyurappa
ಬಳ್ಳಾರಿ, ಮಾ. 28 : ಬಜೆಟ್ ನಲ್ಲಿ ಅನುಮೋದಿಸಿದ ನೂತನ ಯೋಜನೆ, ಕಾರ್ಯಕ್ರಮಗಳನ್ನು ಜಾರಿಗೆ ತರಲು ಅನುಕೂಲವಾಗುವಂತೆ ಶೀಘ್ರವಾಗಿ ಆದೇಶ ಹೊರಡಿಸಲು ಏಪ್ರಿಲ್ 5ರಂದು ಎಲ್ಲಾ ಸಚಿವರು ಹಾಗೂ ಇಲಾಖೆಗಳ ಕಾರ್ಯದರ್ಶಿಗಳ ಸಭೆಯನ್ನು ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ಜಿಂದಾಲ್‌ನಲ್ಲಿ ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ಬಜೆಟ್ ನಲ್ಲಿ ಅನುಮೋದಿಸಿದ ನೂತನ ಯೋಜನೆಗಳನ್ನು ಸರ್ಕಾರಿ ಆದೇಶದ ಮೂಲಕ ಏಪ್ರಿಲ್ ಒಳಗಾಗಿ ಪ್ರಕಟಿಸಿ, ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಏಪ್ರಿಲ್ 5ರ ಸಭೆ ಮಹತ್ವ ಪಡೆಯಲಿದೆ ಎಂದರು.

ರಾಜ್ಯದಲ್ಲಿ ಹೆಚ್ಚು ಕಾರ್ಖಾನೆಗಳನ್ನು ಸ್ಥಾಪಿಸಲು ಅನುಕೂಲವಾಗುವಂತೆ ಕೈಗಾರಿಕೋದ್ಯಮಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತದೆ. ಈ ನಿಟ್ಟಿನಲ್ಲಿ ಏಪ್ರಿಲ್ 1ರಂದು ಮುಂಬೈನಲ್ಲಿ ಕೈಗಾರಿಕೋದ್ಯಮಿಗಳ ಸಭೆ ಏರ್ಪಡಿಸಲಾಗಿದೆ. ಬಂಡವಾಳ ಹೂಡಿಕೆಗೆ ಉದ್ಯಮಿಗಳನ್ನು ಆಹ್ವಾನಿಸಲಾಗುತ್ತದೆ ಎಂದರು.

ಬೆಂಗಳೂರಿನಲ್ಲಿ ಜನಸಂದಣಿ ಹೆಚ್ಚಾಗಿರುವುದರಿಂದ ವರ್ತುಲ ರಸ್ತೆ, ಮೊನೊ ಮಾದರಿಯ ರೈಲು ಮಾರ್ಗ, ಬೆಂಗಳೂರು ರೈಲ್ವೆ ನಿಲ್ದಾಣದಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ ಹೈಸ್ಪೀಡ್ ರೈಲು ಮಾರ್ಗಗಳ ಅಗತ್ಯ ಇದೆ. ಈ ಕುರಿತು ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ ಚರ್ಚಿಸಲಾಗುವುದು. ಈ ಯೋಜನೆಗಳನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರದ ಪಾಲಿನ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದರು.

ರೈತರ ಕ್ಷೇಮಾಭಿವೃದ್ಧಿಗಾಗಿ ಒಂದು ಸಾವಿರ ಕೋಟಿ ರು. ಮೊತ್ತದ ಪ್ರತ್ಯೇಕ ನಿಧಿಯನ್ನು ಸ್ಥಾಪನೆ ಮಾಡಲಾಗುತ್ತದೆ. ಹೊಸ ರೀತಿ ಅಲ್ಪ ಪ್ರಮಾಣದಲ್ಲಿ ತೆರಿಗೆ ಸಂಗ್ರಹಮಾಡಿ, ಈ ನಿಧಿಗೆ ವಿನಿಯೋಗ ಮಾಡಲಾಗುತ್ತದೆ. ನೆರೆ ಪೀಡಿತರಿಗೆ ನವಗ್ರಾಮಗಳ ನಿರ್ಮಾಣದ ಮೂಲಕ ಶಾಶ್ವತವಾಗಿ ಪುನರ್ವಸತಿ ಕಲ್ಪಿಸಲಾಗುತ್ತಿದೆ. 50 ಸಾವಿರ ಮನೆಗಳು ನಿರ್ಮಾಣ ಆಗುತ್ತಿವೆ ಎಂದರು.

ಇನ್ನುಳಿದ 20 ಸಾವಿರ ಮನೆಗಳ ನಿರ್ಮಾಣಕ್ಕೆ ಶೀಘ್ರವಾಗಿ ಕ್ರಮ ಕೈಗೊಳ್ಳಲಾಗುವುದು. ಈ ನವಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಕೆಪಿಟಿಸಿಎಲ್‌ಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಸಚಿವ ಜಿ. ಜನಾರ್ಧನ ರೆಡ್ಡಿ, ಜಿಲ್ಲಾಧಿಕಾರಿ ಜಿ. ಶಿವಪ್ಪ, ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿ ಸೀಮಂತ ಕುಮಾರ ಸಿಂಗ್ ಅವರು ಉಪಸ್ಥಿತರಿದ್ದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X