ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಮುಂದುವರಿಕೆ

ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿಜೆಪಿ ವಕ್ತಾರ ಪ್ರಕಾಶ್ ಜಾವೆಡೆಕರ್ ಅವರು, ಈ ವಿಷಯವನ್ನು ಅಧಿಕೃತವಾಗಿ ಘೋಷಣೆ ಮಾಡಿದರು. ಬುಧವಾರ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹಣೆಬರಹವನ್ನು ಬಿಜೆಪಿ ಹೈಕಮಾಂಡ್ ನಿರ್ಧರಿಸಲಿದೆ ಎಂದು ಮಂಗಳವಾರ ರಾತ್ರಿ ಹೇಳಿದ್ದರಿಂದ ಇಂದು ತೀವ್ರ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿತ್ತು.
ಭ್ರಷ್ಟಾಚಾರ ಆರೋಪ ಹೊತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪದತ್ಯಾಗ ಮಾಡುವುದು ಖಚಿತ ಎಂದು ಹೇಳಲಾಗಿತ್ತು. ಮುಂದಿನ ತಿಂಗಳು ತಾಪಂ, ಜಿಪಂ ಚುನಾವಣೆಗಳು ಇರುವುದರಿಂದ ಪಕ್ಷದ ಹಿತ ಕಾಯಲು ಹೈಕಮಾಂಡ್ ಮನಸ್ಸು ಮಾಡಿದ್ದು, ಯಡಿಯೂರಪ್ಪ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮುಂದುವರೆಸಲು ನಿರ್ಧರಿಸಿದೆ.
ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಮುಂದುವರೆಸಲು ನಿರ್ಧರಿಸಿರುವ ಬಿಜೆಪಿ ಹೈಕಮಾಂಡ್ ಕ್ರಮಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ಮತ್ತು ಆಕ್ರೋಶ ವ್ಯಕ್ತಪಡಿಸಿದೆ. ಭ್ರಷ್ಟಾಚಾರದಲ್ಲಿ ಆರೋಪ ಹೊತ್ತಿರುವ ಮುಖ್ಯಮಂತ್ರಿಯನ್ನು ರಾಜ್ಯದಲ್ಲಿ ಜನರು ಸಹಿಸುವುದಾದರೂ ಹೇಗೆ ? ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಇನ್ನಷ್ಟು ಹೋರಾಟದ ರೂಪುರೇಷೆಗಳನ್ನು ಹಮ್ಮಿಕೊಳ್ಳುವುದಾಗಿ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ ಹೇಳಿದ್ದಾರೆ.












Click it and Unblock the Notifications