ಇಂದ್ರ ಐಭೋಗ ನಾಚಿಸಿದ ಒಡೆಯರ್ ಖಾಸಗಿ ದರ್ಬಾರು
ಕರ್ನಾಟಕದ ಸಾಂಸ್ಕೃತಿಕ ನಗರಿ, ಅರಮನೆ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಚಾಮುಂಡಿ ಬೆಟ್ಟದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮಿಗಳು ಮೈಸೂರು ದಸರಾಕ್ಕೆ ಚಾಲನೆ ನೀಡಿದ್ದಾರೆ. ಇತ್ತ ಅರಮನೆಯಲ್ಲಿ ರಾಜವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಖಾಸಗಿ ದರ್ಬಾರ್ ಕೂಡಾ ಆರಂಭವಾಗಿದೆ.
ಪಾಡ್ಯದಿಂದ ದಶಮಿ ತನಕ 9 ದಿನಗಳ ಕಾಲ ಶ್ರೀಕಂಠದತ್ತ ಒಡೆಯರ್ ಅವರು ಖಾಸಗಿ ದಸರಾ ದರ್ಬಾರ್ ನಡೆಸಲಿದ್ದಾರೆ.
ಬೆಳಗ್ಗೆ 6 ಗಂಟೆಯಿಂದ ಪೂಜಾ ಕಾರ್ಯಗಳು ಸಾಂಗವಾಗಿ ನಡೆದಿದೆ. ಆಸ್ಥಾನ ಪುರೋಹಿತರು ಒಡೆಯರ್ ಅವರಿಗೆ ಕಂಕಣಧಾರಣೆ ಮಾಡಿದರು ನಂತರ ತಾಯಿ ಚಾಮುಂಡೇಶ್ವರಿ ಪೂಜೆ ಸಲ್ಲಿಸಿದ ಒಡೆಯರ್ ಅವರು ರಾಜ ಪೋಷಾಕಿನಲ್ಲಿ ಗಂಭೀರ ನಡೆ ಇಡುತ್ತಾ ಚಿನ್ನದ ಸಿಂಹಾಸನದತ್ತ ಸಾಗಿದರು.
ರತ್ನ ಖಚಿತ ಸಿಂಹಾಸನಕ್ಕೆ ಹೂಗಳನ್ನು ಅರ್ಪಿಸಿ ನಮಿಸಿದ ಒಡೆಯರ್ ಅವರು ಸಿಂಹಾಸನದಲ್ಲಿ ಆಸೀನರಾದರು.ಮಂಗಳವಾರ ಸಂಜೆ ಅಂಬಾವಿಲಾಸ ಅರಮನೆ ಆವರಣದಲ್ಲಿ ಪಟ್ಟದ ಆನೆ, ಕುದುರೆ ಹಾಗೂ ಹಸುಗಳ ಮೆರವಣಿಗೆ ನಡೆಯಲಿದೆ ನಂತರ ಖಾಸಗಿ ದರ್ಬಾರ್ ಮುಂದುವರೆಯಲಿದೆ.
ಒಡೆಯರ್ ಅವರ ಪತ್ನಿ ಪ್ರಮೋದಾ ದೇವಿ ಅವರು ಚಿನ್ನದ ಜರಿಯುಳ್ಳ ರೇಷ್ಮೆ ವಸ್ತ್ರದ ರಾಜಪೋಷಾಕಿನಲ್ಲಿದ್ದ ಶ್ರೀಕಂಠದತ್ತ ಒಡೆಯರ್ ಅವರ ಪಾದಪೂಜೆ ಮಾಡಿ ಹಣೆಗೆ ತಿಲಕ ಇಟ್ಟರು.
ರತ್ನಖಚಿತ ಸಿಂಹಾಸನ: ಅರಮನೆಯ ದರ್ಬಾರ್ ಹಾಲ್‌ನಲ್ಲಿರುವ ರತ್ನ ಖಚಿತ ಸಿಂಹಾಸನವು ಆಕರ್ಷಕವಾಗಿದ್ದು, ಇದನ್ನು ದಸರಾ ಸಂದರ್ಭ ಮಾತ್ರ ಜೋಡಿಸಲಾಗುತ್ತದೆ. ಈ ಕಾರ್ಯಕ್ಕೆ ಮೈಸೂರಿಗೆ ಸಮೀಪದ ಗೆಜ್ಜಗಳ್ಳಿ ಗ್ರಾಮದಿಂದ ಆಯ್ದ ಕೆಲವರನ್ನು ಮಾತ್ರ ಕರೆತರಲಾಗುತ್ತದೆ.
ಇದು ತಲತಲಾಂತರದಿಂದ ನಡೆದು ಬಂದಿದೆ. ನವರಾತ್ರಿಯ ದಿನಗಳಲ್ಲಿ ಶ್ರೀಕಂಠದತ್ತನರಸಿಂಹರಾಜ ಒಡೆಯರ್ ಆರೋಹಣ ಮಾಡಿ ಖಾಸಗಿ ದರ್ಬಾರ್ ನಡೆಸುತ್ತಾರೆ. ಈ ಸಂದರ್ಭ ಹಿಂದಿನ ಕಾಲದ ರಾಜವೈಭವ ಮರುಕಳಿಸಿದ ಅನುಭವವಾಗಿ ಬಿಡುತ್ತದೆ.
ಈ ಸಿಂಹಾಸನವು ಪುರಾತನವಾದದ್ದೆಂದು ಹೇಳಲಾಗಿದೆ. ಇದಕ್ಕೊಂದು ಚರಿತ್ರೆಯೂ ಇದೆ. ಪಾಂಡವರ ಕಾಲದೆನ್ನಲಾಗಿದ್ದು, ಆ ಕಾಲದಲ್ಲಿ ಕಂಪುಲ ರಾಜನು ಇದನ್ನು ತಂದು ಪೆನಗೊಂಡದಲ್ಲಿ ಹೂತಿಟ್ಟಿದ್ದನು ಎನ್ನಲಾಗಿದೆ.
1338ರಲ್ಲಿ ಮಹರ್ಷಿ ವಿದ್ಯಾರಣ್ಯರು ಧ್ಯಾನದೃಷ್ಠಿಯಿಂದ ಇದನ್ನು ಅರಿತು ವಿಜಯನಗರದ ಚಕ್ರಾಧಿಪತ್ಯದ ಸ್ಥಾಪಕ ಹರಿಹರನಿಗೆ ತಿಳಿಸಿದರೆಂದು ಅದರಂತೆ ಹೊರತೆಗೆದು 150 ವರ್ಷಗಳ ಕಾಲ ಆನೆಗೊಂದಿಯಲ್ಲಿ ಅಲಂಕರಿಸಿದರೆಂದೂ ಬಳಿಕ ವಿಜಯನಗರದ ಅವನತಿಯ ವೇಳೆಗೆ ಶ್ರೀರಂಗಪಟ್ಟಣದಲ್ಲಿದ್ದ ವಿಜಯನಗರದ ರಾಯಭಾರಿಯ ಅರಮನೆಗೆ ಸಾಗಿಸಲಾಯಿತೆಂದು ಹೇಳಲಾಗಿದೆ.
ಆ ಬಳಿಕ 1609ರಲ್ಲಿ ಆಗಿನ ಮೈಸೂರು ಅರಸರಾದ ರಾಜಒಡೆಯರ್ ಶ್ರೀರಂಗರಾಜುಲುರನ್ನು ತಲಕಾಡಿಗೆ ಓಡಿಸಿ ಶ್ರೀರಂಗಪಟ್ಟಣವನ್ನು ವಶಪಡಿಸಿಕೊಂಡರು. 1610ರಲ್ಲಿ ತಮ್ಮ ರಾಜಧಾನಿಯನ್ನು ಶ್ರೀರಂಗಪಟ್ಟಣದಿಂದ ಮೈಸೂರಿಗೆ ಬದಲಾಯಿಸಿದಾಗ ಸಿಂಹಾಸನವನ್ನು ಮೈಸೂರಿನ ಅರಮನೆಗೆ ಸಾಗಿಸಲಾಯಿತು.
ಸಿಂಹಾಸನವು ಚಿನ್ನದ ಬಾಳೆಯ ಕಂಬ ಮತ್ತು ಚಿನ್ನದ ಮಾವಿನ ಎಲೆಗಳಿಂದ ಅಲಂಕರಿಸಲ್ಪಟ್ಟಿದೆ. ಛತ್ರಿಯ ತುದಿಯಲ್ಲಿ ಒಡವೆಗಳಿಂದ ಅಲಂಕರಿಸಿದ ಪಕ್ಷಿಯನ್ನು ಕೂರಿಸಲಾಗಿದೆ. ಸಿಂಹಾಸನವನ್ನು ಹತ್ತುವ ಎರಡು ಕಡೆಗಳಲ್ಲೂ ಸ್ತ್ರೀಪುತ್ಥಳಿಯನ್ನು ನಿರ್ಮಿಸಲಾಗಿದೆ.
ಜೊತೆಗೆ ಛತ್ರಿಯ ಸುತ್ತಲೂ ಮುತ್ತಿನ ಕುಚ್ಚುಗಳನ್ನು ಕಟ್ಟಲಾಗಿದೆ. ಅಲ್ಲದೆ ಸಿಂಹಾಸನಕ್ಕೆ ಕೂರ್ಮರೂಪದ ಆಸನವನ್ನು ಒದಗಿಸಲಾಗಿದೆ. ಉಭಯ ಪಾಶ್ವಗಳಲ್ಲಿ ಯಾಳಿಗಳನ್ನು ಮತ್ತು ನಾಲ್ಕು ಕಡೆಗಳಲ್ಲಿ ಬಳ್ಳಿ ಲತೆಗಳನ್ನು ಕೆತ್ತಲಾಗಿದೆ.
ಸಿಂಹಾಸನದ ದಕ್ಷಿಣದಲ್ಲಿ ಬ್ರಹ್ಮ, ಉತ್ತರದಲ್ಲಿ ಶಿವ, ಮಧ್ಯದಲ್ಲಿ ವಿಷ್ಣುವನ್ನು ನಿಲ್ಲಿಸಲಾಗಿದೆ. ವಿಜಯ ಸೂಚಕ ನಾಲ್ಕು ಸಿಂಹಗಳನ್ನು ಇಡಲಾಗಿದೆ. ಮೂರು ಕೋನಗಳಲ್ಲೂ ರಾಕ್ಷಸ ಶರೀರ, ಎರಡು ಕುದುರೆಗಳು ಮತ್ತು ನಾಲ್ಕು ಹಂಸಪಕ್ಷಿಗಳನ್ನಿಡಲಾಗಿದೆ.
ನಾಗದೇವತೆಗಳ ಚಿತ್ರಗಳು, ಸ್ವಾಸ್ತಿಕ ಆಕೃತಿ ಮತ್ತು ಮುತ್ತಿನ ಹಡಗು ಮೇಲಿನ ಗುಡಾರಗಳ ಚಿತ್ರಣಗಳಿವೆ. ಸಿಂಹಾಸನವನ್ನು ನಾಲ್ಕು ದಿಕ್ಕುಗಳಲ್ಲಿ ತೆರೆಯಲಾಗಿದೆ. ಸಿಂಹಾಸನದ ಛತ್ರಿಯ ಮೇಲೆ ಸಂಸ್ಕೃತದ 96 ಸಾಲುಗಳ ಶ್ಲೋಕಗಳಿವೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ













Click it and Unblock the Notifications