ಕೈ' ಹಿಡಿಯಲಿದ್ದಾರೆ ಬೇಳೂರು ಗೋಪಾಲಕೃಷ್ಣ ?

ಬುಧವಾರ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಬಿಜೆಪಿ ತೊರೆದು ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೋಪಾಲಕೃಷ್ಣ ಬಿಜೆಪಿ ಸರ್ಕಾರದಲ್ಲಿ ಹಿಂದುಳಿದ ವರ್ಗದವರನ್ನು ಕಡೆಗಣಿಸಲಾಗುತ್ತಿದೆ.
ಈಡಿಗ ಜನಾಂಗಕ್ಕೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ದೊರಕಿಲ್ಲ. ಆದ್ದರಿಂದ ಅಸಮಾಧಾನಗೊಂಡು ಪಕ್ಷ ತೊರೆಯುವ ಬಗ್ಗೆ ಚಿಂತನೆ ನಡೆಸುತ್ತಿದ್ದೇನೆ. ಎರಡು ಮೂರು ದಿನಗಳಲ್ಲಿ ಈ ಬಗ್ಗೆ ನಿರ್ಧಾರ ಪ್ರಕಟಿಸಲಾಗುವುದು.
ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ನಂತರ ಮುಂದಿನ ನಿರ್ಧಾರ ತಿಳಿಸುವುದಾಗಿ ಅವರು ಹೇಳಿದ್ದಾರೆ. ಆದರೆ, ಬೇಳೂರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಿದಾಡುತ್ತಿದೆ.
ಕಾಗೋಡು ಅಸಮಾಧಾನ : ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಸೇರ್ಪಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ "ಕಾಂಗ್ರೆಸ್ ಸೇರುವಷ್ಟು ಕಾಗೋಡು ಪ್ರಬುದ್ಧರಾಗಿಲ್ಲ" ಎಂದು ವಾಗ್ದಾಳಿ ನಡೆಸಿದ್ದಾರೆ.
ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಸೇರಿದರೆ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಅವರಿಗೆ ದೊಡ್ಡ ಹಿನ್ನಡೆಯಾಗಲಿದೆ. ಕಾಂಗ್ರೆಸ್ ಪಕ್ಷದಿಂದ ಸಾಗರ ಕ್ಷೇತ್ರದಲ್ಲಿ ಕಾಗೋಡು ತಿಮ್ಮಪ್ಪ ಟಿಕೆಟ್ ಪಡೆಯುವುದು ಬಹುತೇಕ ಖಚಿತವಾಗಿದೆ.
ಬೇಳೂರು ಕಾಂಗ್ರೆಸ್ ಸೇರ್ಪಡೆಗೊಂಡರೆ ಯಾರಿಗೆ ಟಿಕೆಟ್ ನೀಡುವುದು ಎಂಬ ಗೊಂದಲ ಉಂಟಾಗಲಿದೆ. ಆದ್ದರಿಂದ ಗೋಪಾಲಕೃಷ್ಣ ಕಾಂಗ್ರೆಸ್ ಸೇರ್ಪಡೆಗೆ ಕಾಗೋಡು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಂಖ್ಯಾಬಲ ಕುಸಿತ : ಶಾಸಕ ಶಂಕರಲಿಂಗೇಗೌಡ ಮತ್ತು ಬೇಳೂರು ಗೋಪಾಲಕೃಷ್ಣ ಬಿಜೆಪಿ ತೊರೆದರೆ ಬಿಜೆಪಿಯ ಸಂಖ್ಯಾಬಲ ಕಡಿಮೆಯಾಗಲಿದೆ. ಬಿಎಸ್ಆರ್ ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿರುವ ಶಾಸಕರು ಮತ್ತು ಕೆಜೆಪಿ ಸೇರುವ ಕೆಲವು ಸಚಿವರು, ಶಾಸಕರು ತಿಂಗಳಾತ್ಯಕ್ಕೆ ಪಕ್ಷ ತೊರೆದರೆ ಮತ್ತೊಮ್ಮೆ ಬಿಜೆಪಿ ಸರ್ಕಾರ ಇಕ್ಕಟ್ಟಿಗೆ ಸಿಲುಕಲಿದೆ.












Click it and Unblock the Notifications