ಅಭ್ಯರ್ಥಿಗಳ ಪಟ್ಟಿ ತಯಾರಿಸಲು ಕೈ' ಪಾಳಯ ಸಜ್ಜು

ನಗರದ ಖಾಸಗಿ ರೆಸಾರ್ಟ್ ನಲ್ಲಿ ನಡೆಯಲಿರುವ ಸಭೆಯಲ್ಲಿ 224 ಅಭ್ಯರ್ಥಿಗಳ ಸಾಂಭವ್ಯ ಪಟ್ಟಿ ಸಿದ್ಧಪಡಿಸಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ರಾಜ್ಯ ಚುನಾವಣಾ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಿ ಕೇಂದ್ರ ಸಮಿತಿಗೆ ಶಿಫಾರಸ್ಸು ಮಾಡಲು ನಿರ್ಧರಿಸಲಾಗಿದೆ. ಕೇಂದ್ರ ಸಮಿತಿಯ ಒಪ್ಪಿಗೆಯ ನಂತರ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳಲಿದೆ.
ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಸೇರಿದಂತೆ, ಕೇಂದ್ರ ಸಚಿವರು ಸೇರಿದಂತೆ, ರಾಜ್ಯದ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ. ಪಕ್ಷಕ್ಕೆ ಹೊಸದಾಗಿ ಸೇಪರ್ಡೆಯಾಗಿರುವ ವಲಸಿಗರಿಗೆ ಟಿಕೆಟ್ ನೀಡುವ ಕುರಿತು ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಪಕ್ಷದ ಪ್ರಮುಖರು ಹೇಳಿದ್ದಾರೆ.
ಅನ್ಯ ಪಕ್ಷೀಯರ ಸೇರ್ಪಡೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಇನ್ನು ತನ್ನ ನಿರ್ಧಾರ ಪ್ರಕಟಿಸಿಲ್ಲ. ಮಾ.11ರಂದು ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದ್ದು ನಂತರ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ದೆಹಲಿಗೆ ತೆರಲಿ ವಲಸಿಗರ ಸೇರ್ಪಡೆ ಮತ್ತು ಅವರಿಗೆ ಟಿಕೆಟ್ ನೀಡುವ ಕುರಿತು ನಾಯಕರ ಜೊತೆ ಮಾತುಕತೆ ನಡೆಸಲಿದ್ದಾರೆ.
ಪರಮೇಶ್ವರ್ ದೆಹಲಿಯಿಂದ ವಾಪಾಸ್ಸಾದ ನಂತರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಹಾಲಿ ಕಾಂಗ್ರೆಸ್ ಶಾಸಕರು ಜಯಗಳಿಸಿರುವ ಕ್ಷೇತ್ರಗಳಲ್ಲಿ ಅವರಿಗೆ ಟಿಕೆಟ್ ನೀಡುವುದು ಬಹುತೇಕ ಖಚಿತವಾಗಿದೆ. ಕೆಲವು ಸಂಸದರು ವಿಧಾನಸಭೆ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳಾಗಿದ್ದು, ದೆಹಲಿಯ ಭೇಟಿಯ ವೇಳೆ ವರಿಷ್ಠರು ಪರಮೇಶ್ವರ್ ಗೆ ಸಂಸದರ ಸ್ಪರ್ಧೆ ಬಗ್ಗೆ ಅಂತಿಮ ಸೂಚನೆ ನೀಡುವ ಸಾಧ್ಯತೆ ಇದೆ.
ಜೂನ್.3ರೊಳಗೆ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಬೇಕು ಎಂದು ಕೇಂದ್ರ ಚುಣಾವಣಾ ಆಯೋಗ ಈಗಾಗಲೇ ಹೇಳಿದೆ. ಆದ್ದರಿಂದ ಮೇ ತಿಂಗಳಿನಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯುವುದು ಖಚಿತವಾಗಿದೆ. ಆದ್ದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಂತರ ವಿಧಾನಸಭೆ ಚುನಾವಣೆ ತಯಾರಿ ಆರಂಭಿಸುವ ಅನಿವಾರ್ಯತೆಗೆ ಎಲ್ಲಾ ಪಕ್ಷಗಳು ಸಿಲುಕಿವೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ


Click it and Unblock the Notifications
