ಮಿನಿಮತ ಸಮರ - ಬಹಿರಂಗ ಪ್ರಚಾರಕ್ಕೆ ಇಂದು ತೆರೆ

ಚುನಾವಣೆಗೂ 48 ಗಂಟೆಗಳ ಮೊದಲು ಬಹಿರಂಗ ಪ್ರಚಾರ ಕಾರ್ಯ ಕೊನೆಗೊಳ್ಳಲಿದ್ದು, ಅದರಂತೆ ಮಂಗಳವಾರ ಬೆಳಗ್ಗೆ 7 ಗಂಟೆ ಬಹಿರಂಗ ಪ್ರಚಾರಕ್ಕೆ ಅಂತಿಮ ಗಡುವಾಗಿದೆ. ಆದ್ದರಿಂದ ಇಂದು ಸಂಜೆಯೇ ಬಹಿರಂಗ ಪ್ರಚಾರ ಕಾರ್ಯ ಮುಕ್ತಾಯವಾಗಲಿದೆ.
ರಾಜ್ಯದ 208 ಸ್ಥಳೀಯ ಸಂಸ್ಥೆಗಳ ಮತ್ತು 7 ಮಹಾನಗರ ಪಾಲಿಕೆಗಳ ಚುನಾವಣೆ ಮಾ.7ರಂದು ನಡೆಯಲಿದ್ದು, ಒಟ್ಟು ಒಟ್ಟು 21,974 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇವರಲ್ಲಿ 5900 ಪಕ್ಷೇತರ ಅಭ್ಯರ್ಥಿಗಳಿದ್ದಾರೆ. ತಮ್ಮ ಪಕ್ಷದ ಅಭ್ಯರ್ಥಿಯ ಪರ ಮತಯಾಚಿಸಲು ಬಂದಿರುವ ನಾಯಕರು ಮಂಗಳವಾರ ಬೆಳಗ್ಗೆಯೇ ಕ್ಷೇತ್ರಗಳನ್ನು ತೊರೆಯುವಂತೆ ಚುನಾವಣಾ ಆಯೋಗ ಈಗಾಗಲೇ ಸೂಚನೆ ನೀಡಿದೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಎಲ್ಲಾ ರಾಜಕೀಯ ಪಕ್ಷಗಳು ಪ್ರತಿಷ್ಠೆಯ ಪ್ರಶ್ನೆಯಾಗಿ ತೆಗೆದುಕೊಂಡಿವೆ. ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಮ್ಮ ತವರು ಕ್ಷೇತ್ರ ಹುಬ್ಬಳ್ಳಿ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ. ಸಚಿವರುಗಳಿಗೆ ಅವರ ಕ್ಷೇತ್ರಗಳ ಉಸ್ತುವಾರಿ ವಹಿಸಲಾಗಿದೆ. ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಬಿಜೆಪಿ ಮತದಾರರನ್ನು ಸೆಳೆಯಲು ಕಸರತ್ತು ನಡೆಸುತ್ತಿದೆ.
ಕಾಂಗ್ರೆಸ್ ಸಹ ಪ್ರಚಾರದಲ್ಲಿ ಹಿಂದೆ ಬಿದ್ದಿಲ್ಲ. ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ, ಕೇಂದ್ರ ಸಚಿವರಾದ ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ ಮುಂತಾದವರು ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ಭರವಸೆಯಲ್ಲ ಬದ್ಧತೆ ಎಂಬ ಪ್ರಣಾಳಿಕೆಯನ್ನು ಹೊರತಂದಿದ್ದಾರೆ.
ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಚಾರ ನಡೆಸುತ್ತಿದ್ದಾರೆ. ಮೊದಲ ಬಾರಿ ಚುನಾವಣೆ ಎದುರಿಸುತ್ತಿರುವ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಕರ್ನಾಟಕ ಜನತಾ ಪಕ್ಷ (ಕೆಜೆಪಿ)ಯಲ್ಲಿಯೂ ಪ್ರಚಾರದ ಭರಾಟೆ ಜೋರಾಗಿದೆ. ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಸಿ.ಎಂ.ಉದಾಸಿ ಸೇರಿದಂತೆ ಪ್ರಮುಖ ನಾಯಕರು ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡುತ್ತಿದ್ದಾರೆ.
ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಪ್ರಚಾರಕ್ಕೆ ತಾರಾ ಮೆರಗು ದೊರಕಿದೆ. ನಟಿ ರಕ್ಷಿತಾ, ಪೂಜಾಗಾಂಧಿ, ಶುಭಾಪೂಂಜಾ, ನಟ ನವೀನ್ ಕೃಷ್ಣ ಸೇರಿದಂತೆ ಅನೇಕರು ಅಭ್ಯರ್ಥಿಗಳ ಪರ ಮತ ಯಾಚಿಸುತ್ತಿದ್ದಾರೆ. ಪಕ್ಷದ ಅಧ್ಯಕ್ಷ ಬಿ.ಶ್ರೀರಾಮುಲು ಏಕಾಂಗಿಯಾಗಿ ಪ್ರಚಾರ ಕಾರ್ಯನಡೆಸುತ್ತಿದ್ದು, ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಉತ್ಸಾಹದಲ್ಲಿದ್ದಾರೆ.
ರಾಜಕೀಯ ಪಕ್ಷಗಳು ಮತದಾರರ ಓಲೈಕೆಗೆ ಅಗತ್ಯ ಪ್ರಯತ್ನ ನಡೆಸಿವೆ. ಆದರೆ, ಮತದಾರರು ಯಾರಿಗೆ ಮತನೀಡಿದ್ದಾರೆ ಎಂದು ತಿಳಿಯಲು ಮಾ.11ರವರೆಗೆ ಕಾಯಬೇಕಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಮುಂಬರುವ ವಿಧಾನಸಭಾ ಚುನಾವಣೆಮೇಲೆ ಪ್ರಭಾವಬೀರುವ ಸಾಧ್ಯತೆ ಇದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ


Click it and Unblock the Notifications
