ತೇಜಸ್ವಿನಿ: ಬೆಂ.ದಕ್ಷಿಣ ಕ್ಷೇತ್ರದ ಸ್ವಘೋಷಿತ ಅಭ್ಯರ್ಥಿ

ಕಾಂಗ್ರೆಸ್ ನ ಫೈರ್ ಬ್ರಾಂಡ್ ನಾಯಕಿ ಎಂದೇ ಪ್ರಸಿದ್ಧಿ ಪಡೆದಿರುವ ತೇಜಸ್ವಿನಿ ಬೆಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಪಕ್ಷದ ನಾಯಕರೊಂದಿಗೂ ಈ ಕುರಿತು ಚರ್ಚಿಸಿದ್ದೇನೆ ಎಂದು ತಿಳಿಸಿದ್ದಾರೆ.
2009ರ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿದ್ದ ತೇಜಸ್ವಿನಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾಸ್ವಾಮಿ ವಿರುದ್ಧ ಸೋಲು ಅನುಭವಿಸಿದ್ದರು. ನಂತರ ಪಕ್ಷದ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಜೊತೆಗಿನ ಗುದ್ದಾಟಗಳಿಂದಾಗಿ ಮಾತ್ರ ತೇಜಸ್ವಿನಿ ಸುದ್ದಿಯಾಗುತ್ತಿದ್ದರು.
ಪ್ರಸ್ತುತ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿರುವ ಅವರು ವಿಧಾನಸಭೆ ಚುನಾವಣೆಗೆ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಟಿಕೆಟ್ ನೀಡಿ ಎಂದು ಮನವಿ ಮಾಡಿದ್ದಾರೆ. ಕಾಂಗ್ರೆಸ್ ನಾಯಕರು ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.
ಬೆಂಗಳೂರು ದಕ್ಷಿಣ ಕ್ಷೇತ್ರ ಸದ್ಯ ಬಿಜೆಪಿಯ ಹಿಡಿತದಲ್ಲಿದೆ. ರಾಜರಾಜೇಶ್ವರಿ ಕ್ಷೇತ್ರದ ಶಾಸಕ ಎಂ.ಶ್ರೀನಿವಾಸ್ ಅವರ ಸೋದರ ಎಂ.ಕೃಷ್ಣಪ್ಪ ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕರು. ಅಪಾರ ರಾಜಕೀಯ ಅನುಭವವೇನೂ ಇಲ್ಲದ ಕೃಷ್ಣಪ್ಪ, ಮೊದಲ ಬಾರಿ ಚುನಾವಣೆಗೆ ಸ್ಪರ್ಧಿಸಿ ದಕ್ಷಿಣ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.
ಇಂತಹ ಎಂ.ಕೃಷ್ಣಪ್ಪ ವಿರುದ್ಧ ತೇಜಸ್ವಿನಿ ಶ್ರೀ ರಮೇಶ್ ಸ್ಪರ್ಧಿಸಲು ಮುಂದಾಗಿದ್ದಾರೆ. ಮಾ.16 ಮತ್ತು 17ರಂದು ನಡೆಯುವ ರಾಜ್ಯ ಚುನಾವಣಾ ಸಮಿತಿಯ ಸಭೆಯಲ್ಲಿ ತೇಜಸ್ವಿನಿ ಅವರಿಗೆ ಟಿಕೆಟ್ ನೀಡುವ ಕುರಿತು ಚರ್ಚೆ ನಡೆಯಬಹುದು.
ಈ ಬಾರಿ ವಿಧಾನಸಭೆ ಚುನಾವಣೆ ಗೆದ್ದು ಅಧಿಕಾರ ಪಡೆಯುವ ಉತ್ಸಾಹದಲ್ಲಿರುವ ಕಾಂಗ್ರೆಸ್ ನಾಯಕರಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದೇ ದೊಡ್ಡ ಸವಾಲಾಗಿದೆ. ಈಗಾಗಲೇ ಪಕ್ಷದ ನಾಯಕರು ಟಿಕೆಟ್ ಗಾಗಿ ಒತ್ತಡ ಹೇರುತ್ತಿದ್ದಾರೆ, ಇನ್ನೊಂದೆಡೆ ವಲಸಿಗರು ಕಾಂಗ್ರೆಸ್ ಕದ ತಟ್ಟುತ್ತಿದ್ದಾರೆ.
ಸುಮಾರು ಐದು ಜನರ ಸಂಸದರು ಟಿಕೆಟ್ ಆಂಕ್ಷಾಕ್ಷಿಗಳ ಪಟ್ಟಿಯಲ್ಲಿದ್ದಾರೆ. ರಾಷ್ಟ ನಾಯಕರು ರಾಜ್ಯ ರಾಜಕೀಯಕ್ಕೆ ಮರಳುವುದಿಲ್ಲ ಎಂದು ಹೈಕಮಾಂಡ್ ಸ್ಪಷ್ಟ ಪಡಿಸಿದ್ದರು. ಕೊನೆಯ ಹಂತದಲ್ಲಿ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದು ನಿಗೂಢವಾಗಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications