ಬಿಜೆಪಿ 50 ಸ್ಥಾನ ಗೆದ್ದರೆ ರಾಜಕೀಯ ನಿವೃತ್ತಿ : ಬಿಎಸ್ ವೈ

ಮಂಗಳವಾರ ದಾವಣಗೆರೆಯ ಆನಗೋಡಿನಲ್ಲಿ ಕೆಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಯಡಿಯೂರಪ್ಪ, ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮುಖಭಂಗ ಉಂಟಾಗುತ್ತದೆ ಎಂದು ಅರಿತು ಈಶ್ವರಪ್ಪ ತಮ್ಮ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ಅಂತಹವರನ್ನೆ ಮತ್ತೆ ಬಿಜೆಪಿ ಮತ್ತೆ ರಾಜ್ಯಧ್ಯಕ್ಷರನ್ನಾಗಿ ಮಾಡಲು ಹೊರಟಿದೆ ಎಂದು ಲೇವಡಿ ಮಾಡಿದರು. ಈಶ್ವರಪ್ಪ ಅವರ ನೇತೃತ್ವದಲ್ಲಿ ವಿಧಾನಸಭೆ ಚುನಾವಣೆ ಎದುರಿಸಿದರೆ ಬಿಜೆಪಿ ಐವತ್ತು ಸ್ಥಾನಗಳನ್ನು ಪಡೆಯುವುದಿಲ್ಲ ಎಂದು ಭವಿಷ್ಯ ನುಡಿದರು.
ಕೆ.ಎಸ್.ಈಶ್ವರಪ್ಪ ರಾಜ್ಯಾಧ್ಯಕ್ಷರಾಗಲಿ ಅವರ ನೇತೃತ್ವದಲ್ಲಿ ಬಿಜೆಪಿ ಚುನಾವಣೆ ಎದುರಿಸಿ, ಐವತ್ತು ಶಾಸಕರು ಗೆದ್ದು ಬಂದರೆ ನಾನು ರಾಜಕೀಯ ನಿವೃತ್ತಿ ಘೋಷಣೆ ಮಾಡುತ್ತೇನೆ. ಪಕ್ಷ ಸಂಘಟನೆ, ಕಾರ್ಯಕರ್ತರ ಒಡನಾಟವಿಲ್ಲದ ಈಶ್ವರಪ್ಪ ಮುಂದಿನ ಚುನಾವಣೆಯಲ್ಲಿ ಗೆದ್ದು ತೋರಿಸಲಿ ಎಂದು ಹೇಳಿದರು.
ನಮ್ಮ ಪಕ್ಷದಲ್ಲಿದ್ದ ಭ್ರಷ್ಟರು ತೊಲಗಿದ್ದಾರೆ ಎಂದು ಹೇಳಿಕೆ ನೀಡುವ ಈಶ್ವರಪ್ಪ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ ಅವರು, ಮುಂದಿನ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಈಶ್ವರಪ್ಪ ಮೇಲೂ ಲೋಕಾಯುಕ್ತ ತನಿಖೆ ನಡೆಯುತ್ತಿದೆ ಅವರು ಭ್ರಷ್ಟರಲ್ಲವೇ ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಈಶ್ವರಪ್ಪ ನಮ್ಮದು ಸ್ವಚ್ಚ ಪಕ್ಷ ಎಂದು ಹೇಳಿಕೆ ನೀಡುತ್ತಿದ್ದಾರೆ. ಚುನಾವಣೆಗಳಲ್ಲಿ ಸ್ವಚ್ಚ ಪಕ್ಷದ ಸ್ಥಿತಿ ಏನೆಂದು ಗೊತ್ತಾಗುತ್ತದೆ. ಚುನಾವಣೆ ನಂತರ ಬಿಜೆಪಿ ರಾಜ್ಯದಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದರು.
ಶೆಟ್ಟರ ಅಂಗಡಿಗೆ ಲಾಭದ ಚಿಂತೆ : ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆಡಳಿತ ನಡೆಸುತ್ತಿಲ್ಲ. ಮುಂದಿನ ವಿಧಾನಸಭೆ ಚುನಾವಣೆಗೆ ಹಣ ಸಂಗ್ರಹಿಸಲು ಅಂಗಡಿ ತೆರೆದುಕೊಂಡು ಕೂತಿದ್ದಾರೆ. ಟೆಂಡರ್, ನೇಮಕಾತಿ ಮುಂತಾದವುಗಳಲ್ಲಿ ಹಣ ಪಡೆಯುತ್ತಾ, ಚುನಾವಣಾ ನಿಧಿ ಸಂಗ್ರಹಿಸುತ್ತಿದ್ದಾರೆ. ಶೆಟ್ಟರ್ ಅಂಗಡಿಗೆ ಲಾಭದ ಚಿಂತೆ ಮಾತ್ರ, ಜನರ ಸಂಕಷ್ಟ ತಿಳಿಯುತ್ತಿಲ್ಲ ಎಂದು ಆರೋಪಿಸಿದರು.
ಬಿಜೆಪಿ ಸೇರೋಲ್ಲ : ಯಡಿಯೂರಪ್ಪ ಮತ್ತೆ ಬಿಜೆಪಿ ಸೇರುತ್ತಾರೆ ಎಂಬ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಅವರು ಬಿಜೆಪಿ ತೊರೆದು ಬಹಳ ದೂರ ಬಂದಾಗಿದೆ. ಇನ್ನೆಂದೂ ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications