ಮೈಸೂರು : ಬಿಜೆಪಿ ವಿಜಯ ಸಂಕಲ್ಪ ಯಾತ್ರೆ' ಆರಂಭ

ಶುಕ್ರವಾರ ಬೆಳಗ್ಗೆ ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಚಾಮುಂಡೇಶ್ವರಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಮುಂದಿನ ಚುನಾವಣೆಯಲ್ಲಿಯೂ ಬಿಜೆಪಿ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ಬಿಜೆಪಿ ಸರ್ಕಾರದ ಸಾಧನೆಯನ್ನು ಪ್ರತಿಯೊಂದು ವಿಧಾನಸಭೆ ಕ್ಷೇತ್ರಗಳಿಗೆ ತಲುಪಿಸುವ ಉದ್ದೇಶದಿಂದ ಈ ವಿಜಯ ಸಂಕಲ್ಪ ಯಾತ್ರೆ ಇಂದಿನಿಂದ ಆರಂಭಗೊಂಡಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಿಜಯ ಸಂಕಲ್ಪ ಯಾತ್ರೆ ಹೆಸರಿನಲ್ಲಿ ಸಮಾವೇಶಗಳನ್ನು ನಡೆಸಲಾಗುತ್ತದೆ. ಮಾ.31ರಂದು ಈ ಸಮಾವೇಶ ಬೆಂಗಳೂರಿನಲ್ಲಿ ಕೊನೆಗೊಳ್ಳಲಿದೆ.
ಚುನಾವಣೆಗೆ ನಾವು ಸಿದ್ದ : ವಿಜಯ ಸಂಕಲ್ಪಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಷಿ ಮಾತನಾಡಿ, ಚುನಾವಣೆಗೆ ಬಿಜೆಪಿ ಪಕ್ಷ ಸಿದ್ಧವಾಗಿದೆ. ಶನಿವಾರದಿಂದ ರಾಜ್ಯ ಚುನಾವಣಾ ಸಮಿತಿ ಸಭೆ ನಡೆಸಲಿದ್ದೇವೆ. ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕೇಂದ್ರ ನಾಯಕರಿಗೆ ರವಾನಿಸಲಿದ್ದೇವೆ ಎಂದರು.
ಕಾಂಗ್ರೆಸ್ ಎದುರಾಳಿ : ಪ್ರಾದೇಶಿಕ ಪಕ್ಷಗಳು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಎದುರಾಳಿಯಲ್ಲ. ಕಾಂಗ್ರೆಸ್ ಮಾತ್ರ ನಮಗೆ ಪ್ರತಿಸ್ಪರ್ಧಿಯಾಗಲಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇನ್ನೂರು ಸ್ಥಾನಗಳನ್ನು ಗಳಿಸಲು ಸಾಧ್ಯವಾಗದ ಪ್ರಾದೇಶಿಕ ಪಕ್ಷಗಳು ಮುಂದಿನ ಚುನಾವಣೆಯಲ್ಲಿ ಅಸ್ತಿತ್ವ ಕಳೆದುಕೊಳ್ಳಲಿವೆ ಎಂದು ಭವಿಷ್ಯ ನುಡಿದರು.
ಭಿನ್ನಮತವಿಲ್ಲ : ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ಕುರಿತಂತೆ ಪಕ್ಷದಲ್ಲಿ ಯಾವುದೇ ಭಿನ್ನಮತಗಳು ಉಂಟಾಗಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಪಕ್ಷದ ತತ್ವ ಸಿದ್ಧಾಂತ ತಿಳಿದ ಯುವಕರಾದ ಪ್ರಹ್ಲಾದ್ ಜೋಷಿ ನೇತೃತ್ವದಲ್ಲಿ ಸಮರ್ಥವಾಗಿ ಚುನಾವಣೆ ಎದುರಿಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.
ರಾಜ್ಯಾಧ್ಯಕ್ಷರ ಆಯ್ಕೆ ವಿಚಾರದಲ್ಲಿ ಎರಡು ಬಣಗಳ ನಡುವೆ ಭಿನ್ನಮತ ಉಂಟಾಗಿದೆ ಎಂಬ ಹೇಳಿಕೆಯನ್ನು ತಳ್ಳಿ ಹಾಕಿದ ಅವರು ರಾಜಕೀಯ ಪಕ್ಷಗಳಲ್ಲಿ ಸಣ್ಣಪುಟ್ಟ ಗೊಂದಲಗಳಿರುತ್ತವೆ. ಅವುಗಳನ್ನು ಚರ್ಚಿಸಿ ಬಗೆಹರಿಸಿಕೊಳ್ಳುತ್ತೇವೆ. ಅವು ಭಿನ್ನಮತಗಳು ಎಂಬುದು ಮಾಧ್ಯಮಗಳ ಸೃಷ್ಠಿ ಎಂದು ತಿಳಿಸಿದರು.
ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಸಂಸದ ಅನಂತ ಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ.ರಾಮದಾಸ್ ಮುಂತಾದವರು ಉಪಸ್ಥಿತರಿದ್ದರು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications