ಬಿಜೆಪಿ ಚುನಾವಣಾ ಸಮಿತಿ ಸಭೆ : ಟಿಕೆಟ್ ಯಾರಿಗೆ ?

ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ಸರಳ ಸಮಾರಂಭದಲ್ಲಿ ಮೊದಲು ನೂತನ ಅಧ್ಯಕ್ಷ ಪ್ರಹ್ಲಾದ್ ಜೋಪಿ, ಮಾಜಿ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಅವರಿಂದ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಮಧ್ಯಾಹ್ನ ಚುನಾವಣಾ ಸಮತಿ ಸಭೆ ನಡೆಯುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಷಿ, ಉಪ ಮುಖ್ಯಮಂತ್ರಿಗಳಾದ ಈಶ್ವರಪ್ಪ, ಆರ್.ಅಶೋಕ್, ಮಾಜಿ ಮುಖ್ಯಮಂತ್ರಿ ಸದಾನಂದಗೌಡ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ ಕುಮಾರ್ ಮತ್ತು ಆರ್ಎಸ್ಎಸ್ ಪ್ರಮುಖ ಸಂತೋಷ ಜಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಚುನಾವಣಾ ಸಮಿತಿ ಸಭೆಯಲ್ಲಿ ಅನಂತ ಕುಮಾರ್ ಭಾಗವಹಿಸುವ ಕುರಿತು ಈಶ್ವರಪ್ಪ ಆಕ್ಷೇಪ ವ್ಯಕ್ತಪಡಿಸಿರುವುದರಿಂದ, ಈಶ್ವರಪ್ಪ ಅಥವ ಅನಂತ ಕುಮಾರ್ ಸಭೆಯುಂದ ಹೊರಗುಳಿಯುವ ಸಂಭವವಿದೆ. ಹಾಲಿ ಶಾಸಕರಿಗೆ ಟಿಕೆಟ್ ನೀಡಿಕೆ, ಹೊಸ ಅಭ್ಯರ್ಥಿಗಳ ಹುಡುಕಾಟ ಮುಂತಾದ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.
150 ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಬಿಜೆಪಿ ಅಂತಿಮಗೊಳಿಸಿದೆ. ಜೊತೆಗೆ ಹಾಲಿ ಶಾಸಕರಿಗೆ ಟಿಕೆಟ್ ನೀಡುವುದು ಖಚಿತವಾಗಿದೆ. ಇಂದಿನ ಸಭೆಯಲ್ಲಿ 224 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿ ಕೇಂದ್ರ ಚುನಾವಣಾ ಸಮಿತಿಗೆ ತಲುಪಿಸಲು ನಿರ್ಧರಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ವಲಸಿಗರದ್ದೇ ಸಮಸ್ಯೆ : ಬಿಜೆಪಿ ತೊರೆದು ಕೆಜೆಪಿ ಸೇರಿದಂತೆ ವಿವಿಧ ಪಕ್ಷ ತೊರೆಯಲು ತುದಿಗಾಲಲ್ಲಿ ನಿಂತಿರುವ ಶಾಸಕರ ಕ್ಷೇತ್ರಗಳಿಗೆ ನೂತನ ಅಭ್ಯರ್ಥಿಗಳನ್ನು ಹುಡುಕುವುದೇ ಬಿಜೆಪಿಗೆ ಸವಾಲಾಗಿ ಪರಿಣಮಿಸಿದೆ. ಕೆಲವು ಶಾಸಕರು ಪಕ್ಷ ತೊರೆಯುತ್ತಾರೋ? ಇಲ್ಲವೋ ಎಂಬುದು ಇನ್ನು ಖಚಿತವಾಗಿಲ್ಲ.
ಇಂತಹ ಕ್ಷೇತ್ರಗಳಲ್ಲಿ ಇವರ ಬೆಂಬಲಿಗರಿಗೆ ಟಿಕೆಟ್ ನೀಡಿದರೆ ಅವರು ಪಕ್ಷ ತೊರೆಯುವ ಭೀತಿ ಎದುರಾಗಿದೆ. ಆದ್ದರಿಂದ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ, ವಲಸೆ ಹೋಗುವ ಅಭ್ಯರ್ಥಿಗಳ ಅಂತಿಮ ನಿರ್ಧಾರದ ನಂತರ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications