ರಾಜಾಜಿನಗರ : ಜ್ಯುವೆಲರಿ ಶಾಪ್ ಮಾಲೀಕನ ಹತ್ಯೆ

ರಾಜಾಜಿನಗರದ ಇಎಸ್ಐ ಆಸ್ಪತ್ರೆ ಬಳಿಯ ರಿಷಬ್ ಜ್ಯುವೆಲ್ಲರಿ ಅಂಗಡಿಯ ಮಾಲೀಕ ಶ್ರವಣ್ ಕುಮಾರ್ (45) ಕೊಲೆಯಾದ ವ್ಯಕ್ತಿ. ಶನಿವಾರ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ನಾಲ್ಕು ಗಂಟೆಯ ವೇಳೆಗೆ ಅಂಗಡಿಗೆ ಆಗಮಿಸಿದ ಗ್ರಾಹಕರೊಬ್ಬರು ಕೊಲೆಯಾಗಿದ್ದನ್ನು ಕಂಡು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಗ್ರಾಹಕರಂತೆ ಬಂದ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮಾರಕಾಸ್ತ್ರಗಳಿಂದ ಶ್ರವಣ್ ಕುಮಾರ್ ಅವರ ತಲೆಗೆ ಹೊಡೆದಿದ್ದು, ತೀವ್ರ ರಕ್ತಸ್ತಾವದಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಂಗಡಿಯಲ್ಲಿದ್ದ ಸುಮಾರು ಮುಕ್ಕಾಲು ಕೆ.ಜೆ.ಚಿನ್ನವನ್ನು ದುಷ್ಕರ್ಮಿಗಳು ದೋಚಿ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ರಾಜಾಜಿನಗರ ಪೊಲೀಸರು ಆಗಮಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜ್ಯುವೆಲ್ಲರಿ ಅಂಗಡಿಯ ಸಿಸಿಟಿವಿ ಮತ್ತು ಅಂಗಡಿ ಇರುವ ಪ್ರದೇಶದ ರಸ್ತೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ರಾಡ್ ನಿಂದ ಶ್ರವಣ್ ಅವರ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮೂವರು ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ.
ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಹೇಳಿರುವ ಪೊಲೀಸರು, ಕೊಲೆಯಾದ ಸಂಗತಿ ಅಕ್ಕಪಕ್ಕದ ಅಂಗಡಿಗಳ ಮಾಲೀಕರಿಗೆ ತಿಳಿಯಲಿಲ್ಲವೇ ಎಂದು ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಸುರೇಶ್ ಕುಮಾರ್ ಮತ್ತು ಡಿವೈಎಸ್ಪಿ ಸಿದ್ರಾಮಪ್ಪ ಭೇಟಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications