ಇಂದು ಬಿಜೆಪಿ ಅಂತಿಮ ಪಟ್ಟಿ : ಪ್ರಹ್ಲಾದ್ ಜೋಶಿ

ಬೆಂಗಳೂರಿನಲ್ಲಿ ಸೋಮವಾರ ನಡೆದ ಬಿಜೆಪಿ ನಾಯಕರ ಸಭೆಯಲ್ಲಿ 12 ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಕುರಿತು ಚರ್ಚೆ ನಡೆದಿದೆ. ಮಂಗಳವಾರ ಅಂತಿಮ ಪಟ್ಟಿ ಬಿಡುಗಡೆ ಮಾಡುವುದಾಗಿ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಹೆಬ್ಬಾಳ ಕ್ಷೇತ್ರದಲ್ಲಿ ಕಟ್ಟಾ ಸುಬ್ರಮಣ್ಯ ನಾಯ್ಡು ಸಚಿವರಾಗಿದ್ದ ಸಮಯದಲ್ಲಿ ಅವರ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದ ಜಗದೀಶ್ ಕುಮಾರ್ ಅವರಿಗೆ ಟಿಕೆಟ್ ನೀಡಲು ಬಿಜೆಪಿ ಚಿಂತನೆ ನಡೆಸಿದೆ. ಬಿಜೆಪಿ ಮೂಲಗಳ ಮಾಹಿತಿ ಪ್ರಕಾರ ಜಗದೀಶ್ ಅವರಿಗೆ ಟಿಕೆಟ್ ನೀಡಲು ಕಟ್ಟಾ ಸಹ ಒಪ್ಪಿಗೆ ನೀಡಿದ್ದಾರೆ.
ಕೆಜಿಎಫ್ ಕ್ಷೇತ್ರದಲ್ಲಿ ವೈ.ಸಂಪಂಗಿ ಬದಲಾಗಿ ಅವರ ತಾಯಿಗೆ ಟಿಕೆಟ್ ನೀಡಲಾಗಿದೆ. ಅವರು ಸೋಮವಾರವೇ ನಾಮಪತ್ರ ಸಲ್ಲಿಸಿದ್ದಾರೆ. ಬೆಂಗಳೂರಿನ ಯಶವಂತಪುರ ಮತ್ತು ಬಿಟಿಎಂ ಕ್ಷೇತ್ರದಲ್ಲಿ ಟಿಕೆಟ್ ನೀಡುತ್ತೇವೆ ಎಂದರೂ ಸ್ಪರ್ಧಿಸಲು ಪ್ರಬಲ ಅಭ್ಯರ್ಥಿಗಳು ದೊರಕುತ್ತಿಲ್ಲ. (ಆಡಳಿತಾರೂಢ ಪಕ್ಷಕ್ಕೆ ಅಭ್ಯರ್ಥಿಗಳಿಲ್ಲ)
ಆದ್ದರಿಂದ ಬಿಜೆಪಿ ಅಂತಿಮ ಪಟ್ಟಿ ಬಿಡುಗಡೆ ಮಾಡಲು ಹರಸಾಹಸ ಪಡುತ್ತಿದೆ. ಬುಧವಾರ ಏ.17 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಇಂದು ಪಟ್ಟಿ ಅಂತಿಮಗೊಳಿಸುವ ಒತ್ತಡದಲ್ಲಿ ಪಕ್ಷ ಸಿಲುಕಿದೆ. ಕಾಂಗ್ರೆಸ್ ಈಗಾಗಲೇ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ.
ಏ.21ರಿಂದ ಪ್ರಚಾರ : ಬಿಜೆಪಿ ಬಹಿರಂಗ ಚುನಾವಣಾ ಪ್ರಚಾರವನ್ನು ಏ.21ರಿಂದ ಪ್ರಾರಂಭಿಸಲಿದೆ ಎಂದು ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ, ಹಿರಿಯ ನಾಯಕ ಎಲ್.ಕೆ.ಅಡ್ವಾಣಿ, ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್ ಮತ್ತು ಅರುಣ್ ಜೇಟ್ಲಿ ರಾಜ್ಯದಲ್ಲಿ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ ಎಂದರು.
ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಇದೆ. ಐದು ವರ್ವಷಗಳಲ್ಲಿ ಬಿಜೆಪಿ ಸರ್ಕಾರ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಜನರು ಬಿಜೆಪಿಗೆ ಮತ ನೀಡಲಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಮತ್ತೆ ಅಧಿಕಾರದ ಗದ್ದುಗೆ ಏರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಅಭ್ಯರ್ಥಿಗಳ ಆಯ್ಕೆ ಮಾಡಲು ಕಷ್ಟಪಡುತ್ತಿರುವ ಬಿಜೆಪಿ ಪಕ್ಷದಲ್ಲಿ ಚುನಾವಣಾ ಉತ್ಸಾಹವೇ ಕಾಣುತ್ತಿಲ್ಲ. ಮಂಗಳವಾರ 12 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ, ಪ್ರಚಾರ ಕಾರ್ಯದಲ್ಲಿ ತೊಡಗಲು ನಿರ್ಧರಿಸಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications