ಉಪಚುನಾವಣೆ ಅಭ್ಯರ್ಥಿಗಳ ಹುಡುಕಾಟದಲ್ಲಿ ಕಾಂಗ್ರೆಸ್

ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಪಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಬುಧವಾರದ ಸಭೆಯಲ್ಲಿ ಎರಡು ಕ್ಷೇತ್ರಗಳ ಜಿಲ್ಲಾಧ್ಯಕ್ಷರ ಜೊತೆ ಚರ್ಚಿಸಿ, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.
ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಬೇಕೆಂಬುದು ಹೈ ಕಮಾಂಡ್ ನಾಯಕರಿಗೆ ಬಿಟ್ಟ ವಿಚಾರ. ಆಕಾಂಕ್ಷಿಗಳ ಪಟ್ಟಿಯನ್ನು ತಯಾರಿಸಿ, ರಾಷ್ಟ್ರೀಯ ನಾಯಕರಿಗೆ ಕಳುಹಿಸಿ ಕೊಡಲಾಗುತ್ತದೆ ಎಂದು ಹೇಳಿದರು.
ಉಪ ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಪಕ್ಷ ಸಿದ್ದವಾಗಿದೆ. ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯ ಗೆಲುವಿಗೆ ಉಪ ಚುನಾವಣೆ ಸಹಕಾರಿಯಾಗಲಿದೆ ಎಂದು ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.
ಯಾರು ಅಭ್ಯರ್ಥಿಗಳು : ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಶ್ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ, ಶ್ರೀಕರಂಠದತ್ತ ನರಸಿಂಹರಾಜ ಒಡೆಯರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆತ್ಮಾನಂದ, ಸರ್ಕಾರಿ ವೈದ್ಯಾದ್ಯಕಾರಿಗಳ ಸಂಘದ ಮಾಜಿ ಅಧ್ಯಕ್ಷ ರವೀಂದ್ರ ಗೌಡ ಅವರುಗಳ ಹೆಸರುಗಳು ಪ್ರಬಲವಾಗಿ ಕೇಳಿ ಬರುತ್ತಿವೆ. (ಚುನಾವಣಾ ವೇಳಾಪಟ್ಟಿ)
ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಮಾಜಿ ಸಂಸದೆ ತೇಜಸ್ವಿನಿ ರಮೇಶ್, ಉದ್ಯಮಿ ಲಕ್ಷ್ಮಣ್ ಅವರುಗಳ ಹೆಸರುಗಳು ಪ್ರಬಲವಾಗಿ ಕೇಳಿಬರುತ್ತಿದ್ದು, ಯಾರಿಗೆ ಟಿಕೆಟ್ ನೀಡಲಾಗುತ್ತದೆ ಎಂಬುದು ಗುಟ್ಟಾಗಿ ಉಳಿದಿದೆ.
ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದವರಿಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವುದು ಖಚಿತವಾಗಿರುವುದರಿಂದ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಬುಧವಾರ ನಡೆಯಲಿರುವ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ತಯಾರಾಗುವ ಸಾಧ್ಯತೆ ಇದೆ.












Click it and Unblock the Notifications