ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಬಿಜೆಪಿ
ಬೆಂಗಳೂರು, ಆ.7 : ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಲೋಕಸಭೆ ಉಪ ಚುನಾವಣಾ ಕಣದಿಂದ ಬಿಜೆಪಿ ಹಿಂದೆ ಸರಿದಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ನಾಮಪತ್ರವನ್ನು ವಾಪಸ್ ಪಡೆಯಲಾಗಿದೆ. ಆದರೆ, ಇದು ಜೆಡಿಎಸ್ ಜೊತೆಗಿನ ಮೈತ್ರಿಯಿಂದಲ್ಲ ಎಂದು ಬಿಜೆಪಿ ಸ್ಪಷ್ಟನೆ ನೀಡಿದೆ.
ಉಪ ಚುನಾವಣೆಯ ನಾಮಪತ್ರ ವಾಪಸ್ ಪಡೆಯಲು ಬುಧವಾರ ಕೊನೆಯ ದಿನವಾಗಿತ್ತು. ಇಂದು ನಿರ್ಧಾರ ಪ್ರಕಟಿಸಿರುವ ಬಿಜೆಪಿ ಉಭಯ ಕ್ಷೇತ್ರಗಳ ಸ್ಪರ್ಧೆಯಿಂದ ಹಿಂದೆ ಸರಿದಿದೆ. ವಿಧಾನಪರಿಷತ್ ಚುನಾವಣೆ ಮೇಲೆ ಗಮನ ಹರಿಸುವ ದೃಷ್ಟಿಯಿಂದ ಸ್ಪರ್ಧೆಯಿಂದ ಹಿಂದೆ ಸರಿದಿರುವುದಾಗಿ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಹೇಳಿದ್ದಾರೆ.

ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ದೊರೆಸ್ವಾಮಿ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಎಂ.ಕೃಷ್ಣಪ್ಪ ಬುಧವಾರ ಮಧ್ಯಾಹ್ನ ತಮ್ಮ ನಾಮತ್ರ ವಾಪಸ್ ಪಡೆದಿದ್ದಾರೆ. ಮತಗಳು ವಿಭಜನೆಯಾಗಿ ಕಾಂಗ್ರೆಸ್ ಪಕ್ಷಕ್ಕೆ ಲಾಭವಾಗಬಾರದು ಎಂದು ಪಕ್ಷದ ನಾಯಕರ ನಿರ್ದೇಶನದಂತೆ ನಾಮಪತ್ರ ವಾಪಸ್ ಪಡೆದಿರುವುದಾಗಿ ಉಭಯ ನಾಯಕರು ಹೇಳಿಕೆ ನೀಡಿದ್ದಾರೆ.
ಬಿಜೆಪಿ ಸ್ಪಷ್ಟನೆಗಳು : ಪಕ್ಷದ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯಲಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಹೇಳಿದ್ದಾರೆ. ಬಿಜೆಪಿ ವಿಧಾನಪರಿಷತ್ ಉಪ ಚುನಾವಣೆಯ ಮೇಲೆ ಗಮನ ಕೇಂದ್ರೀಕರಿಸಿದೆ. ಲೋಕಸಭೆ ಉಪ ಚುನಾವಣೆಯ ಅವಧಿ ಕೇವಲ 6 ತಿಂಗಳು ಮಾತ್ರವಿದೆ. ಆದ್ದರಿಂದ ಅಭ್ಯರ್ಥಿಗಳ ನಾಮಪತ್ರ ವಾಪಸ್ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.
ಜೆಡಿಎಸ್ ಪಕ್ಷದೊಂದಿಗೆ ಮೈತ್ರಿಯ ಮಾತುಕತೆ ನಡೆಸಿದ್ದು ಸತ್ಯ ಆದರೆ, ಪಕ್ಷದ ವರಿಷ್ಠ ನಾಯಕರು ಮೈತ್ರಿಗೆ ಒಪ್ಪಿಗೆ ನೀಡಿರಲಿಲ್ಲ. ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ವಾಪಸ್ ಪಡೆಯುವ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರಿಗೆ ಮಾಹಿತಿ ನೀಡಲಾಗಿದೆ ಎಂದು ಅಶೋಕ್ ಹೇಳಿದರು.
ನಾವು ಚುನಾವಣಾ ಕಣದಿಂದ ಹಿಂದೆ ಸರಿದಿರುವುದರಿಂದ ಯಾವ ಪಕ್ಷಕ್ಕೆ ಅನುಕೂಲವಾಗಲಿದೆ ಎಂಬುದು ನಮಗೆ ಸಂಬಂಧಿಸಿದ ವಿಷಯವಲ್ಲ. ಜೆಡಿಎಸ್ ಜೊತೆಗಿನ ಮೈತ್ರಿಯಿಂದಾಗಿ ನಾವು ಹಿಂದೆ ಸರಿದಿಲ್ಲ ಎಂದು ಅಶೋಕ್ ಸ್ಪಷ್ಟನೆ ನೀಡಿದ್ದಾರೆ.












Click it and Unblock the Notifications