ಕರ್ನಾಟಕದ ರಾಜಕೀಯ ದೆಹಲಿಗೆ ಶಿಫ್ಟ್!
ಬೆಂಗಳೂರು, ಆ.26 : ಎರಡು ಲೋಕಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ ಬೆನ್ನಲ್ಲೇ ರಾಜ್ಯ ರಾಜಕೀಯ ನವದೆಹಲಿಗೆ ಶಿಫ್ಟ್ ಆಗಿದೆ. ಸಂಪುಟ ರಚನೆ, ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕ ಮುಂತಾದ ವಿಚಾರಗಳ ಕುರಿತು ಚರ್ಚಿಸಲು ಕಾಂಗ್ರೆಸ್ ನಾಯಕರು ದೆಹಲಿ ವಿಮಾನವೇರಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಭಾನುವಾರ ಸಂಜೆಯೇ ದೆಹಲಿ ತಲುಪಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈ ಕಮಾಂಡ್ ನಾಯಕರ ಜೊತೆ, ರಾಜ್ಯದ ನಾಯಕರು ಚರ್ಚೆ ನಡೆಸಲಿದ್ದು, ಡಿ.ಕೆ.ಶಿವಕುಮಾರ್, ರೋಷನ್ ಬೇಗ್ ಸಿದ್ದರಾಮಯ್ಯ ಸಂಪುಟ ಸೇರುವುದು ಬಹುತೇಕ ಖಚಿತವಾಗಿದೆ.
ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಉಪ ಮುಖ್ಯಮಂತ್ರಿ ಹುದ್ದೆ ವಹಿಸಿಕೊಳ್ಳಲಿದ್ದಾರೆ. ಸಿಎಂ ಬಳಿ ಇರುವ ಕೈಗಾರಿಕೆ ಮತ್ತು ಇಂಧನ ಖಾತೆಯನ್ನು ಸಂಪುಟ ಸೇರುವ ಇಬ್ಬರು ನಾಯಕರಿಗೆ ನೀಡಲಾಗುತ್ತದೆ ಎಂಬ ಮಾತು ಕಾಂಗ್ರೆಸ್ ವಲಯದಲ್ಲಿ ದಟ್ಟವಾಗಿ ಹಬ್ಬಿದೆ.
ಸೋನಿಯಾ ಗಾಂಧಿ ಭೇಟಿ : ಸಿಎಂ ಸಿದ್ದರಾಮಯ್ಯ, ಜಿ.ಪರಮೇಶ್ವರ್, ಡಿ.ಕೆ. ಶಿವಕುಮಾರ್, ಲೋಕಸಭೆಗೆ ಹೊಸದಾಗಿ ಆಯ್ಕೆಯಾದ ರಮ್ಯಾ ಮತ್ತು ಡಿ.ಕೆ.ಸುರೇಶ್ ಮಂಗಳವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸೋಮವಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿಯಾಗಿ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮುಂತಾದ ವಿಚಾರಗಳ ಕುರಿತು ಒಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ.
ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ, ಪರಮೇಶ್ವರ್ ಹಾಗೂ ಡಿ.ಕೆ. ಶಿವಕುಮಾರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಹೈ ಕಮಾಂಡ್ ನಾಯಕರು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭೆ ಉಪ ಚುನಾವಣೆ ಜಯ ಕಾಂಗ್ರೆಸ್ ಪಾಳಯದಲ್ಲಿ ಹೊಸ ಹುಮ್ಮಸ್ಸು ತುಂಬಿದೆ. ಸಚಿವ ಸಂಪುಟ ವಿಸ್ತರಣೆ ನಡೆಯುವುದು ಖಚಿತವಾಗಿದ್ದು, ಸಹೋದರನನ್ನು ಚುನಾವಣೆಯಲ್ಲಿ ಗೆಲ್ಲಿಸಿದ ಡಿ.ಕೆ.ಶಿವಕುಮಾರ್ ಗೆ ಈ ಬಾರಿ ಸಚಿವ ಸ್ಥಾನ ಒಲಿದು ಬರಲಿದೆಯೇ ಕಾದು ನೋಡಬೇಕು.
ಶಾಸಕರು ದೆಹಲಿಗೆ : ಸಚಿವ ಸಂಪುಟ ವಿಸ್ತರಣೆ ಕಸರತ್ತು ಪ್ರಾರಂಭವಾದ ತಕ್ಷಣ ಸಚಿವ ಸ್ಥಾನದ ಆಕಾಂಕ್ಷಿಗಳಾಗಿರುವ ಶಾಸಕರು ದೆಹಲಿಗೆ ತೆರಳಿದ್ದಾರೆ. ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ, ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್, ಮಾಯಕೊಂಡ ಶಾಸಕ ಶಿವಮೂರ್ತಿ ನಾಯಕ್ ಮುಂತಾದವರು ಸೋಮವಾರ ಬೆಳಗ್ಗೆ ದೆಹಲಿಗೆ ತೆರಳಿದ್ದು, ಸಚಿವ ಸ್ಥಾನದ ಲಾಬಿ ಪ್ರಾರಂಭಸಿದ್ದಾರೆ.
ಸೋಮವಾರ ಪ್ರಮಾಣ ವಚನ : ಮಂಡ್ಯ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದ ನಟಿ ರಮ್ಯಾ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಆಯ್ಕೆಯಾದ ಡಿ.ಕೆ.ಸುರೇಶ್ ಸೋಮವಾರ ಬೆಳಗ್ಗೆ 11 ಗಂಟೆಗೆ ಲೋಕಸಭೆ ಅಧಿವೇಶನ ಪ್ರಾರಂಭವಾದ ತಕ್ಷಣ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.












Click it and Unblock the Notifications