BPL Card: ಬಿಪಿಎಲ್ ಕಾರ್ಡ್ ರದ್ದು, ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ
ಬಾಗಲಕೋಟೆ, ನವೆಂಬರ್ 17: ಕರ್ನಾಟಕದಲ್ಲಿ ಬಿಪಿಎಲ್ ಕಾರ್ಡ್ ರದ್ದು ವಿಚಾರ ಗೊಂದಲಕ್ಕೆ ಕಾರಣವಾಗಿದೆ. ಇದರಿಂದಾಗಿ ಬಿಪಿಎಲ್ ಕಾರ್ಡ್ ಹೊಂದಿರುವ ಅರ್ಹ ಕಾರ್ಡುದಾರರು ಸಹ ಆತಂಕಗೊಂಡಿದ್ದಾರೆ. ಬಿಪಿಎಲ್ ಫಲಾನುಭವಿಗಳ ಕಾರ್ಡ್‌ಗಳನ್ನು ರದ್ದುಗೊಳಿಸಿ ಎಪಿಎಲ್ ಕಾರ್ಡ್ ಆಗಿ ಪರಿವರ್ತನೆ ಮಾಡಲಾಗುತ್ತಿದೆ ಎಂದು ಆರೋಪಿಸಲಾಗುತ್ತಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಭಾನುವಾರ ಬಾಲಕೋಟೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, "ಅನರ್ಹರ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ವಾಪಾಸ್ ಪಡೆಯಬಹುದು. ಅರ್ಹರ ಕಾರ್ಡ್‌ಗಳಿಗೆ ಯಾವುದೇ ತೊಂದರೆ ಇಲ್ಲ" ಎಂದು ಸ್ಪಷ್ಟಪಡಿಸಿದರು.

"ಬಿಪಿಎಲ್ ಕಾರ್ಡ್‌ಗಳು ರದ್ದಾಗುತ್ತಿವೆಯೇ? ಎನ್ನುವ ಪ್ರಶ್ನೆಯೇ ಪೂರ್ತಿ ತಪ್ಪು. ಅನರ್ಹರ ಕಾರ್ಡ್‌ಗಳನ್ನು ವಾಪಾಸ್ ಪಡೆಯಬಹುದು ಎನ್ನುವ ಆಲೋಚನೆ ಮಾತ್ರ ನಮ್ಮದಾಗಿದೆ. ಈ ಬಗ್ಗೆ ಇನ್ನೂ ಆಹಾರ ಇಲಾಖೆ ಪರಿಶೀಲಿಸುತ್ತಿದೆ. ಅಂತಿಮ ತೀರ್ಮಾನ ಆಗಿಲ್ಲ. ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ" ಎಂದು ಸಿದ್ದರಾಮಯ್ಯ ಹೇಳಿದರು.
"ಆದಾಯ ತೆರಿಗೆ ಪಾವತಿಸುವವರ ಬಳಿ, ಸರ್ಕಾರಿ ನೌಕರರ ಬಳಿಯೂ ಬಿಪಿಎಲ್ ಕಾರ್ಡ್ ಇರಬೇಕೆ?, ಅರ್ಹರ ಯಾವ ಕಾರ್ಡ್‌ಗಳೂ ರದ್ದಾಗುವುದಿಲ್ಲ. ಅನರ್ಹರಿಂದ ವಾಪಾಸ್ ಪಡೆಯಬಹುದು. ಅರ್ಹರು ವಂಚಿತರಾಗಬಾರದು" ಎಂದು ಸಿದ್ದರಾಮಯ್ಯ ತಿಳಿಸಿದರು.
ಸರ್ಕಾರದ ಸ್ಪಷ್ಟೀಕರಣ: ಶನಿವಾರ ಸಹ ಕರ್ನಾಟಕ ಸರ್ಕಾರ ಎಪಿಎಲ್, ಬಿಪಿಎಲ್ ಕಾರ್ಡ್ ರದ್ದಾಗುವ ವಿಚಾರದ ಕುರಿತು ಸ್ಪಷ್ಟೀಕರಣವನ್ನು ನೀಡಿತ್ತು. ಎಪಿಎಲ್ ಕಾರ್ಡುಗಳ ರದ್ಧತಿಗೆ ಆಹಾರ ಇಲಾಖೆಯು ನಿರ್ದೇಶನ ನೀಡಿಲ್ಲ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಎಪಿಎಲ್ ಕಾರ್ಡುಗಳ ರದ್ದತಿಗೆ ಯಾವುದೇ ಸೂಚನೆ ನೀಡಿಲ್ಲ ಮತ್ತು ಈವರೆಗೆ ಯಾವುದೇ ಎಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಿಲ್ಲ ಎಂದು ತಿಳಿಸಿತ್ತು.
ಕೆಲವು ದಿನಪತ್ರಿಕೆಗಳಲ್ಲಿ ಇ-ಕೆವೈಸಿ ನೋಂದಣಿ ಮಾಡಿಕೊಳ್ಳದ ಎಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಲಾಗುತ್ತಿದೆ ಎಂದು ವರದಿಯಾಗಿರುವುದು ಸತ್ಯಕ್ಕೆ ದೂರವಾಗಿದೆ ಎಂದು ಹೇಳಿತ್ತು.
ರಾಜ್ಯದಲ್ಲಿ 2024ರ ಸೆಪ್ಟೆಂಬರ್ 2ರ ವರೆಗೆ 25,13,798 ಎಪಿಎಲ್ ಕಾರ್ಡುಗಳಿದ್ದವು. ನವೆಂಬರ್ 16 ರಂದು 25,62,566 ಕಾರ್ಡುಗಳಿವೆ. ಅನರ್ಹ ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸುವ ಕಾರ್ಯ ಕೈಗೊಂಡ ಪರಿಣಾಮ ಕೆಲವು ಬಿಪಿಎಲ್ ಕಾರ್ಡುಗಳನ್ನು ಎಪಿಎಲ್ ಕಾರ್ಡುಗಳಾಗಿ ಪರಿವರ್ತಿಸಿರುವುದರಿಂದ 48,768 ಕಾರ್ಡುಗಳು ಹೆಚ್ಚಳವಾಗಿವೆ ಎಂದು ಸ್ಪಷ್ಟಪಡಿಸಿತ್ತು.
ರಾಜ್ಯದಲ್ಲಿ 22 ಲಕ್ಷ ಬಿಪಿಎಲ್ ಕಾರ್ಡುಗಳು ರದ್ದಾಗಿವೆ ಎಂದು ಸುದ್ದಿ ಪ್ರಕಟವಾಗಿರುವುದು ಸತ್ಯಕ್ಕೆ ದೂರವಾಗಿದ್ದು, ಈ ರೀತಿಯ ಕ್ರಮವನ್ನು ಈವರೆಗೆ ಕೈಗೊಂಡಿರುವುದಿಲ್ಲ ಎಂದು ಸ್ಪಷ್ಟೀಕರಿಸುತ್ತಿದ್ದೇವೆ ಎಂದು ಸರ್ಕಾರ ಹೇಳಿತ್ತು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗೃಹಲಕ್ಷ್ಮಿ, ಅನ್ನಭಾಗ್ಯ ಸೇರಿದಂತೆ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಆದ್ದರಿಂದ ರಾಜ್ಯದಲ್ಲಿ ಅನರ್ಹರು ಸಹ ಬಿಪಿಎಲ್ ಕಾರ್ಡ್ ಮಾಡಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪವಿದೆ. ಇಂತಹ ಹೊತ್ತಿನಲ್ಲಿಯೇ ಬಿಪಿಎಲ್ ಕಾರ್ಡ್ ರದ್ದುಗೊಳ್ಳುವ ಆತಂಕ ಎದುರಾಗಿತ್ತು. ಅರ್ಹರ ಕಾರ್ಡ್ ಸಹ ರದ್ದಾದರೆ ಏನು ಮಾಡಬೇಕು? ಎಂದು ಜನರು ಪ್ರಶ್ನೆ ಎತ್ತಿದ್ದರು.
ಎಪಿಲ್ ಕಾರ್ಡ್ ರದ್ದು ಮಾಡಲಾಗುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಸಹ ಆರೋಪ ಮಾಡಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಆಹಾರ ಸಚಿವ ಕೆ. ಎಚ್. ಮುನಿಯಪ್ಪ, "ಪರಿಷ್ಕರಣೆ ಮಾಡಿದಾಗ ಬಿಪಿಎಲ್ ಅಲ್ಲದೇ ಇರುವ ಕಾರ್ಡ್‌ಗಳನ್ನು ಎಪಿಎಲ್ ಮಾಡಲಾಗಿದೆ. ಆದರೆ ಯಾವುದೇ ಎಪಿಲ್ ಕಾರ್ಡ್ ರದ್ದುಗೊಳಿಸಿಲ್ಲ" ಎಂದು ಸ್ಪಷ್ಟಪಡಿಸಿದ್ದರು.












Click it and Unblock the Notifications