ಬಳ್ಳಾರಿ: 82 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ
ಬಳ್ಳಾರಿ, ಏಪ್ರಿಲ್ 24: ಬೇಸಿಗೆಯ ಧಗೆಗೆ ರಾಜ್ಯದ ಹಲವು ಹಳ್ಳಿಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಿದೆ. ಜಿಲ್ಲೆಗಳಲ್ಲಿ ಜನರಿಗೆ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸರ್ಕಾರ ಸೂಚನೆ ನೀಡಿದೆ. ಜನರು ಮಾತ್ರವಲ್ಲ ಜಾನುವಾರುಗಳಿಗೆ ನೀರು, ಮೇವಿನ ಕೊರತೆಯಾಗಬಾರದು. ಈಗಾಗಲೇ ಇರುವ ಮೇವಿನ ಬ್ಯಾಂಕ್‌ಗಳಲ್ಲಿ ಮೇವು ದಾಸ್ತಾನು ಇಟ್ಟುಕೊಳ್ಳಬೇಕು ಎಂದು ನಿರ್ದೇಶನಗಳನ್ನು ಕೊಡಲಾಗಿದೆ.
ಬಳ್ಳಾರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಕೆ. ವಿ. ತ್ರಿಲೋಕ ಚಂದ್ರ ಜಿಲ್ಲಾ ಪಂಚಾಯತಿಯ ಕಛೇರಿಯಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ (20 ಅಂಶ ಸೇರಿದಂತೆ) ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿಗಳನ್ನು ಪಡೆದರು.

ಡಾ. ಕೆ. ವಿ. ತ್ರಿಲೋಕ ಚಂದ್ರ ಮಾತನಾಡಿ, "ಬೇಸಿಗೆಯಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಸಮರ್ಪಕವಾಗಿ ಕ್ಲೋರಿನೇಷನ್‌ನೊಂದಿಗೆ ಶುದ್ಧೀಕರಣಗೊಳಿಸಿದ ನೀರು ಪೂರೈಕೆಗೆ ಆದ್ಯತೆ ನೀಡಬೇಕು" ಎಂದು ಅಧಿಕಾರಿಗಳಿಗೆ ಸೂಚಿಸಿದರು.
"ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ವ್ಯತ್ಯವಾಗಬಾರದು. ಯಾವುದೇ ಕಾರಣಕ್ಕೂ ಕಲುಷಿತ ನೀರು ಪೂರೈಕೆಯಾಗಬಾರದು. ಇದರ ಬಗ್ಗೆ ಎಚ್ಚರ ವಹಿಸಬೇಕು. ನಿರಂತರವಾಗಿ ನೀರಿನ ಮೂಲಗಳನ್ನು ಪರಿಶೀಲನೆ ನಡೆಸುತ್ತಿರಬೇಕು. ನೀರಿನ ಸಂಗ್ರಹಾಗಾರಗಳನ್ನು ಶುಚಿಗೊಳಿಸುತ್ತಿರಬೇಕು. ನೀರಿನ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದ ನಂತರವೇ ಸರಬರಾಜು ಮಾಡಬೇಕು ಮತ್ತು ಓವರ್ ಹೆಡ್ ಟ್ಯಾಂಕ್ ಗಳ ಮುಚ್ಚಳ ಮುಚ್ಚಲಾಗುತ್ತಿದೆಯೇ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕು" ಎಂದರು.
ಸಭೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಬಹುದಾದಂತಹ 82 ಹಳ್ಳಿಗಳನ್ನು ಗುರುತಿಸಿದ್ದು, ಈಗಾಗಲೇ ಕುಡಿಯುವ ನೀರು ಪೂರೈಕೆಗೆ ಟ್ಯಾಂಕರ್‌ಗಳನ್ನು ಸಿದ್ಧತೆಯಲ್ಲಿಟ್ಟುಕೊಳ್ಳಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಇಂದುಧರ್ ಹೇಳಿದರು.
ಜಾನುವಾರುಗಳಿಗೆ ಮೇವಿನ ಕೊರತೆಯಾಗಬಾರದು. ಈಗಾಗಲೇ ಇರುವ ಮೇವಿನ ಬ್ಯಾಂಕ್‌ಗಳಲ್ಲಿ ಮೇವು ದಾಸ್ತಾನು ಇಟ್ಟುಕೊಳ್ಳಬೇಕು ಎಂದು ಸೂಚಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಪಶು ವೈದ್ಯಾಧಿಕಾರಿಗಳಿಂದ ಜಿಲ್ಲೆಯಲ್ಲಿ ಮೇವಿನ ಲಭ್ಯತೆ ಕುರಿತು ಮಾಹಿತಿ ಪಡೆದುಕೊಂಡರು.
ಸಂಡೂರು ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ವಾರ ಅಕಾಲಿಕ ಗಾಳಿ, ಮಳೆಯಿಂದಾಗಿ ಬಾಳೆ ಬೆಳೆಯು ನೆಲಕ್ಕುರುಳಿರುವ ಕುರಿತು ವರದಿಯಾಗಿದೆ. ಈ ಕುರಿತು ತೋಟಗಾರಿಕೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ನಿಯಮಾನುಸಾರ ಬೆಳೆ ಪರಿಹಾರ ಒದಗಿಸಲು ಕ್ರಮ ವಹಿಸುವಂತೆ ತಹಶೀಲ್ದಾರ್‌ಗೆ ನಿರ್ದೇಶನ ನೀಡಲಾಗಿದೆ ಎಂದು ತೋಟಗಾರಿಕೆ ಉಪ ನಿರ್ದೇಶಕರು ತಿಳಿಸಿದರು.
ಜಿಲ್ಲೆಯಲ್ಲಿ ಹೈನುಗಾರಿಕೆಗೆ ಉತ್ತೇಜನ ನೀಡಬೇಕು. ಸಾಮಾಜಿಕ ಅರಣ್ಯ ಬೆಳವಣಿಗೆಗೆ ಆದ್ಯತೆ ನೀಡಬೇಕು. ಜಿಲ್ಲೆಯಲ್ಲಿ ರಸ್ತೆಗಳು ನಿರ್ಮಾಣ ಕಾಮಗಾರಿಗಳು ಗುಣಮಟ್ಟದ್ದಾಗಿರಬೇಕು. ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿಗಳಿಗೆ ಚುರುಕು ನೀಡಿ, ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಶುದ್ಧ ಕುಡಿಯುವ ನೀರು ಸೇವನೆ ಕುರಿತು ಸಾರ್ವಜನಿಕರಿಗೆ ಜನಸಂದಣಿ ಇರುವ ಸ್ಥಳ, ಜಾತ್ರಾ ಸಂದರ್ಭಗಳಲ್ಲಿ ಅರಿವು ಮೂಡಿಸುವ ಕಾರ್ಯ ಕೈಗೊಳ್ಳಬೇಕು. ಗ್ರಾಮಗಳಲ್ಲಿ ತುರ್ತು ಆರೋಗ್ಯ ಸೇವೆಗಳಿಗಾಗಿ ಬರುವ ರೋಗಿಗಳನ್ನು ಪ್ರತಿ ಬಾರಿಯೂ ಜಿಲ್ಲಾ ಕೇಂದ್ರಗಳಿಗೆ ತೆರಳುವಂತೆ ಶಿಫಾರಸ್ಸು ಮಾಡುವುದು ಸಮಂಜಸವಲ್ಲ. ತಪಾಸಣೆ ಕೈಗೊಳ್ಳಬೇಕು. ಸಾರ್ವಜನಿಕರಿಗೆ ತಾವಿರುವಲ್ಲಿಯೇ ಆರೋಗ್ಯ ಸೇವೆ ನೀಡಬೇಕು. ಇದಕ್ಕೆ ಸಾಕಷ್ಟು ಮಾನವ ಸಂಪನ್ಮೂಲಗಳನ್ನು ಒದಗಿಸಲಾಗುತ್ತಿದೆ ಎಂದು ಸಭೆಯಲ್ಲಿ ಚರ್ಚೆ ನಡೆಯಿತು.
ಜಿಲ್ಲೆಯಲ್ಲಿ ಗರ್ಭಿಣಿ ಮಹಿಳೆಯರಲ್ಲಿ ಅಧಿಕ ರಕ್ತದೊತ್ತಡ, ಅನೀಮಿಯಾ ತಡೆಗಟ್ಟಲು ಸೂಕ್ತ ಕಾರ್ಯಯೋಜನೆ ರೂಪಿಸಬೇಕು. ಗರ್ಭಿಣಿ ಮಹಿಳೆಯರಿಗೆ ಸೇವಿಸಲು ಆರೋಗ್ಯ ಇಲಾಖೆಯಿಂದ ನೀಡಲಾಗುವ ಕಬ್ಬಿಣಾಂಶ ಮಾತ್ರೆಗಳ ಸೇವನೆ ಕುರಿತು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನೆ ಭೇಟಿ ನಡೆಸಿ ಖಚಿತಪಡಿಸಿಕೊಳ್ಳಬೇಕು. ಇದರಿಂದ ಸುಲಭ ಮತ್ತು ಸಾಮಾನ್ಯ ಹೆರಿಗೆಗೆ ಸಹಾಯಕವಾಗಲಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕಳಪೆ ಗುಣಮಟ್ಟದ ಬಿತ್ತನೆ ಬೀಜ ವಿತರಣೆಯಾಗಿರುವ ಬಗ್ಗೆ ಹಾಗೂ ರೈತರ ಫಸಲಿನಲ್ಲಿ ಇಳುವರಿ ಬಾರದೇ ಇರುವ ಬಗ್ಗೆ ದೂರುಗಳು ಕೇಳಿಬರುತ್ತಿದೆ. ಈ ಕುರಿತು ಕೃಷಿ ಅಧಿಕಾರಿಗಳು ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳ ಪೂರೈಕೆ ಮಾಡುತ್ತಿರುವ ಅನಧಿಕೃತ ರಸಗೊಬ್ಬರದ ಅಂಗಡಿಗಳ ಮೇಲೆ ದಾಳಿ ನಡೆಸಿ ಕಾನೂನಿನ್ವಯ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಕುರಿತು ರೈತರಿಗೆ ಗುಣಮಟ್ಟದ ಬೀಜ ಮತ್ತು ರಸಗೊಬ್ಬರಗಳ ಕುರಿತು ಅರಿವು ಮೂಡಿಸಬೇಕು ಎಂದರು.












Click it and Unblock the Notifications