Sriramulu: ಶ್ರೀರಾಮುಲು ಮತ್ತು ಪತ್ನಿ ಇಬ್ಬರ ನಾಮಪತ್ರವೂ ಅಂಗೀಕಾರ!
ಬಳ್ಳಾರಿ, ಏಪ್ರಿಲ್. 21: ಎರಡನೇ ಹಂತದಲ್ಲಿ ನಡೆಯಲಿರುವ ಬಳ್ಳಾರಿ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕೊನೆಯಾಗಿದೆ. ಮೊದಲ ದಿನ ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಅಭ್ಯರ್ಥಿಯಾಗಿ ಬಿ. ಶ್ರೀರಾಮುಲು ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ರಾಮುಲು ಪತ್ನಿ ಭಾಗ್ಯಲಕ್ಷ್ಮೀ ನಾಮಪತ್ರ ಸಲ್ಲಿಕೆ ಮಾಡಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು.
ಒಂದು ವೇಳೆ ತಮ್ಮ ನಾಮಪತ್ರ ತಿರಸ್ಕೃತವಾದರೇ ಎಂಬ ಭಯದಲ್ಲಿ ಎಂದು ಶ್ರೀರಾಮುಲು ಪತ್ನಿ ಭಾಗ್ಯಲಕ್ಷ್ಮಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಈಗ ಇಬ್ಬರ ನಾಮಪತ್ರಗಳು ಅಂಗೀಕಾರವಾಗಿವೆ. ಪತಿಯ ನಾಮಪತ್ರ ಅಂಗೀಕಾರಗೊಂಡರೆ ಭಾಗ್ಯಲಕ್ಷ್ಮೀ ತಮ್ಮ ನಾಮಪತ್ರ ವಾಪಸ್ ಪಡೆಯಬಹುದು ಎನ್ನಲಾಗಿತ್ತು. ಮುಂದೆ ಏನು ಮಾಡುತ್ತಾರೆ ಎಂಬುದನ್ನು ನೋಡಬೇಕಿದೆ.

ಇನ್ನು, ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ, ಶನಿವಾರ ನಡೆದ ನಾಮಪತ್ರಗಳ ಪರಿಶೀಲನೆಯಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಸಲ್ಲಿಸಿದ್ದ 11 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಶನಿವಾರ ನಾಮಪತ್ರಗಳ ಪರಿಶೀಲನೆ ನಡೆಸಿದ್ದಾರೆ. ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಾದ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈ.ತುಕಾರಾಮ್, ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿ ವಾಲ್ಮೀಕಿ ಕೃಷ್ಣಪ್ಪ ಮತ್ತು ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಿ.ಶ್ರೀರಾಮುಲು ಈ ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿವೆ.
ನೋಂದಾಯಿತ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಾದ (ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳನ್ನು ಹೊರತುಪಡಿಸಿ) ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಸಿ.ಚನ್ನವೀರ, ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಷ್ಟ್) ಪಕ್ಷದ ಅಭ್ಯರ್ಥಿ ಎ.ದೇವದಾಸ್, ಪ್ರಹರ್ ಜನಶಕ್ತಿ ಪಾರ್ಟಿಯ ಅಭ್ಯರ್ಥಿ ಮಂಜಪ್ಪ, ನವಭಾರತ್ ಸೇನ ಪಕ್ಷದ ಅಭ್ಯರ್ಥಿ ಜಿ.ಸ್ವಾಮಿ ಅವರ ನಾಮಪತ್ರ ಕ್ರಮಬದ್ಧವಾಗಿವೆ.
ಪಕ್ಷೇತರ ಅಭ್ಯರ್ಥಿಗಳಾದ ಅರುಣ್ ಎಸ್ ಹಿರೇಹಾಳ್, ವೈ.ಪಂಪಾಪತಿ, ಬಿ.ಭಾಗ್ಯಲಕ್ಷ್ಮಿ, ವೀರೇಶ ಅವರ ನಾಮಪತ್ರ ಕ್ರಮಬದ್ಧವಾಗಿವೆ. ಏ.22 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದ್ದು, ಮೇ 7 ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.












Click it and Unblock the Notifications