ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯ 10ರಲ್ಲಿ 8 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆ
ಬಳ್ಳಾರಿ, ಏಪ್ರಿಲ್, 12: ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯ ಹತ್ತು ವಿಧಾನಸಭಾ ಕ್ಷೇತ್ರಗಳ ಪೈಕಿ 8 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾಗಿದೆ. ದೆಹಲಿಯಲ್ಲಿ ಮಂಗಳವಾರ ರಾತ್ರಿ (ಏಪ್ರಿಲ್ 11) ಸುದ್ದಿಗೋಷ್ಟಿ ನಡೆಸಿದ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು, ರಾಜ್ಯದ 189 ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು.
8 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆ
ವಿಜಯನಗರ ಜಿಲ್ಲೆಯ ಹೊಸಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಚಿವ ಆನಂದ್‍ಸಿಂಗ್ ಅವರ ಹೊರತಾಗಿ ಅವರ ಪುತ್ರ ಸಿದ್ಧಾರ್ಥ ಸಿಂಗ್ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನು ಬಳ್ಳಾರಿ ಗ್ರಾಮೀಣ ಕ್ಷೇತ್ರಕ್ಕೆ ಸಚಿವ ಬಿ.ಶ್ರೀರಾಮುಲು ಅವರಿಗೆ ಟಿಕೆಟ್ ನೀಡಲಾಗಿದೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ವಿಧಾನಸಭಾ ಕ್ಷೇತ್ರದಿಂದ ಕೃಷ್ಣಾ ನಾಯ್ಕ್ ಅವರಿಗೆ, ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಿಂದ ಲೋಕೇಶ್ ನಾಯಕ ಅವರಿಗೆ ಟಿಕೆಟ್ ನೀಡಲಾಗಿದೆ.

ಇನ್ನು ಬಳ್ಳಾರಿ ಜಿಲ್ಲೆಯ ಬಳ್ಳಾರಿ ನಗರ ಕ್ಷೇತ್ರಕ್ಕೆ ಹಾಲಿ ಶಾಸಕ ಜಿ.ಸೋಮಶೇಖರರೆಡ್ಡಿ, ಕಂಪ್ಲಿ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕ ಟಿ.ಹೆಚ್.ಸುರೇಶ್‍ಬಾಬು, ಸಿರುಗುಪ್ಪ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ಎಂ.ಎಸ್.ಸೋಮಲಿಂಗಪ್ಪ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರದಿಂದ ಶಿಲ್ಪಾ ರಾಘವೇಂದ್ರ ಅವರಿಗೆ ಟಿಕೆಟ್ ನೀಡಲಾಗಿದೆ.
ಸಂಡೂರು, ಹೂವಿನಹಡಗಲಿ ಹಾಗೂ ಕೂಡ್ಲಿಗಿ ವಿಧಾನಸಭಾ ಕ್ಷೇತ್ರಗದಿಂದ ಹೊಸಬರಿಗೆ ಟಿಕೆಟ್ ನೀಡುವ ಮೂಲಕ ಬಿಜೆಪಿ ಅದೃಷ್ಟ ಪರೀಕ್ಷೆಗೆ ಮುಂದಾಗಿದೆ. ಇನ್ನು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ ಸಚಿವ ಬಿ. ಶ್ರೀರಾಮುಲು ಅವರಿಗೆ ಟಿಕೆಟ್ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಈ ಕ್ಷೇತ್ರದಲ್ಲಿ ಭಾರಿ ಜಿದ್ದಾಜಿದ್ದಿನ ಚುನಾವಣೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.
ಕಾಂಗ್ರೆಸ್‍ನ ಹಾಲಿ ಶಾಸಕ ಬಿ.ನಾಗೇಂದ್ರ ಅವರು ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಗಿದ್ದು, ಶ್ರೀರಾಮುಲು ಹಾಗೂ ನಾಗೇಂದ್ರ ಅವರ ನಡುವೆ ಭಾರಿ ಪೈಪೋಟಿ ಏರ್ಪಡುವ ಸಾಧ್ಯತೆಗಳಿವೆ. ಮತ್ತೊಂದೆಡೆ ಹರಪನಹಳ್ಳಿ ಹಾಗೂ ಹಗರಿಬೊಮ್ಮನಹಳ್ಳಿಗೆ ಟಿಕೆಟ್ ಘೋಷಿಸುವುದು ಬಾಕಿ ಉಳಿದಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಭಿನ್ನಮತ ಸ್ಫೋಟ
ಮತ್ತೊಂದೆಡೆ ಬಿಜೆಪಿ ಪ್ರಥಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಬಳ್ಳಾರಿ ಜಿಲ್ಲೆಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ರಾಜ್ಯದ ಇನ್ನುಳಿದ ಎರಡು ಪ್ರಮುಖ ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಂಡ ಹಲವು ದಿನಗಳ ಬಳಿಕ ಅಳೆದು ತೂಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿಗೆ ಈಗ ಭಿನ್ನಮತದ ಕಾವು ತಟ್ಟುತ್ತಿದೆ.
ಗಣಿ ನಾಡು, ಬಳ್ಳಾರಿಯಲ್ಲಿ ಬಿಜೆಪಿಯಲ್ಲಿ ಬಂಡಾಯದ ಬಿಸಿ ಭುಗಿಲೆದಿದ್ದೆ. ಸಂಡೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆ.ಎಸ್ ದಿವಾಕರ್‌ಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿಲ್ಲ. ಬದಲಿಗೆ ಶಿಲ್ಪಾ ರಾಘವೇಂದ್ರ ಅವರಿಗೆ ಟಿಕೆಟ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಕೆ.ಎಸ್ ದಿವಾಕರ್ ತೀವ್ರ ಅಸಮಧಾನಗೊಂಡಿದ್ದಾರೆ.
ಬಳ್ಳಾರಿ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅರು, ಪಕ್ಷಕ್ಕೆ ಹಲವು ವರ್ಷಗಳಿಂದ ದುಡಿಯುತ್ತಿರುವವರಿಗೆ ಟಿಕೆಟ್ ದೊರೆಯುತ್ತಿಲ್ಲ. ಬದಲಿಗೆ ಬಿಜೆಪಿ ಟಿಕೆಟ್ ಮಾರಾಟವಾಗಿದೆ ಎಂದು ಸಂಡೂರು ಬಿಜೆಪಿ ಟಿಕೆಟ್ ವಂಚಿತ ಕೆ.ಎಸ್ ದಿವಾಕರ್ ಗಂಭೀರ ಆರೋಪ ಮಾಡಿದ್ದಾರೆ.
ಬಿಜೆಪಿ ಪಕ್ಷದಲ್ಲಿ ತತ್ವ ಸಿದ್ಧಾಂತಗಳಿಗೆ ಬೆಲೆ ಇಲ್ಲದಂತಾಗಿದೆ. ಸಂಡೂರಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದೆ. ಹೀಗಾಗಿ ಪಕ್ಷಕ್ಕೆ ದುಡಿದವರಿಗೆ ಟಿಕೆಟ್ ಸಿಗದಂತಾಗಿದೆ. ಪಕ್ಷದ ಪ್ರಾಥಮಿಕ ಸದಸ್ಯತ್ವವಿಲ್ಲದವರಿಗೆ ಟಿಕೆಟ್ ದೊರೆತಿದೆ. ಕಳೆದ ಮೂರು ವಿಧಾನಸಭಾ ಚುನಾವಣೆಗಳಿಂದ ಆಕಾಂಕ್ಷಿಯಾಗಿದ್ದ ನನಗೆ, ಬಿಜೆಪಿ ಸತತ ಮೂರು ಸಾರಿ ನನಗೆ ಮೋಸ ಮಾಡಿದೆ ಎಂದು ತಮ್ಮ ಅಸಮಾಧಾನವನ್ನು ಹೊರಹಾಕಿದರು.












Click it and Unblock the Notifications