ಬಳ್ಳಾರಿ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರಿಗೆ ಪರಿಹಾರದ ಮೊತ್ತ ₹5 ಲಕ್ಷಕ್ಕೆ ಏರಿಕೆ
ಇತ್ತೀಚೆಗೆ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ನೀಡುವ ಪರಿಹಾರದ ಮೊತ್ತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಹಿಂದೆ ಪರಿಹಾರ ಮೊತ್ತವನ್ನು 2 ಲಕ್ಷ ರೂಪಾಯಿ ಎಂದು ಸರ್ಕಾರ ಘೋಷಣೆ ಮಾಡಿತ್ತು.
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯಲೋಪಕ್ಕಾಗಿ ಡ್ರಗ್ ಕಂಟ್ರೋಲರ್ ಉಮೇಶ್ ಎಂಬುವವರನ್ನು ಸಸ್ಪೆಂಡ್ ಮಾಡಲಾಗಿತ್ತು. ರಿಂಗರ್ ಲ್ಯಾಕ್ಟೇಟ್ ದ್ರಾವಣ ಪೂರೈಸಿರುವ ಪಶ್ಚಿಮ ಬಂಗಾಳದ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕಂಪನಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಆದೇಶಿಸಿತ್ತು.

ಬಾಣಂತಿಯರ ಸಾವಿನ ಕೇಸ್ ಸಂಬಂಧಪಟ್ಟಂತೆ ಸರ್ಕಾರದಿಂದ ಮೊದಲಿಗೆ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿತ್ತು. ಡ್ರಗ್ ಪೂರೈಸಿದ ಕಂಪೆನಿಯಿಂದಲೂ ಪರಿಹಾರವನ್ನು ವಸೂಲು ಮಾಡಿ, ಮೃತರ ಕುಟುಂಬಕ್ಕೆ ನೀಡಲು ಸಿಎಂ ಸೂಚನೆ ನೀಡಿದ್ದರು. ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿರುವ ಈ ರೀತಿಯ ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲು ಸೂಚಿಸಿದ್ದರು.
ಬಾಣಂತಿಯರ ಸಾವಿನ ಕುರಿತು ತಜ್ಞರ ಸಮಿತಿ ರಚಿಸಿ ಘಟನಾವಳಿಗಳ ಬಗ್ಗೆ ಪ್ರಾಥಮಿಕ ವರದಿ ಪಡೆಯಲಾಗಿದೆ. ಬಾಣಂತಿಯರಿಗೆ ನೀಡಲಾಗಿರುವ ರಿಂಗರ್ ಲ್ಯಾಕ್ಟೇಟ್ ದ್ರಾವಣದ ಎಲ್ಲ ಬ್ಯಾಚ್‌ಗಳ ಬಳಕೆಯನ್ನು ವಾಪಸ್ ಪಡೆಯಲಾಗಿದ್ದು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಳಸಿದ ದ್ರಾವಣ ಪರೀಕ್ಷಿಸಲು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.

ತಮಿಳುನಾಡು ಮಾದರಿಯಲ್ಲಿ ಔಷಧಿಗಳ ಖರೀದಿ ಪ್ರಕ್ರಿಯೆ ಹಾಗೂ ಔಷಧ ನಿಯಂತ್ರಣ ಇಲಾಖೆಯನ್ನು ಪುನರ್‌ರಚನೆ ಮಾಡುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದ್ದರು. ಇನ್ನು ಮುಂದೆ ಈ ರೀತಿಯ ದುರ್ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದ್ದರು.
ಪ್ರಯೋಗಾಲಯದ ವರದಿ ಬಂದ ಬಳಿಕ ಘಟನೆಗೆ ಜವಾಬ್ದಾರರಾದ ಪ್ರತಿಯೊಬ್ಬರನ್ನು ಗುರುತಿಸಿ ಕ್ರಮ ಕೈಗೊಳ್ಳುವುದಾಗಿ, ಡ್ರಗ್ ಕಂಟ್ರೋಲರ್ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲು ಆದೇಶ ನೀಡಿದ್ದರು. ಔಷಧ ನಿಯಂತ್ರಣ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು ನಿರ್ಧರಿಸಿರುವುದಾಗಿ ಸಿದ್ದರಾಮಯ್ಯ ಹೇಳಿದ್ದರು.
ಇನ್ನು ಈ ಘಟನೆ ಬೆನ್ನಲ್ಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಳ್ಳಾರಿ ಜಿಲ್ಲಾಸ್ಪತ್ರೆಗೆ ಹೋಗಿ ಆಸ್ಪತ್ರೆಯಲ್ಲಿರುವ ಬಾಣಂತಿಯರನ್ನು ಭೇಟಿ ಮಾಡಿ ಚಿಕಿತ್ಸೆ ಮತ್ತು ಆರೋಗ್ಯ ಸೇವೆ ಕುರಿತು ಮಾಹಿತಿ ಪಡೆದುಕೊಂಡಿದ್ದರು. ಬಾಣಂತಿಯರ ಸಾವಿನ ಪ್ರಕರಣದ ಹಿನ್ನೆಲೆ, ನಂತರ ನಡೆದ ಎಲ್ಲ ಸಿಸೇರಿಯನ್ ಹಾಗೂ ಸಹಜ ಹೆರಿಗೆಗಳ ಕುರಿತು ವೈದ್ಯಕೀಯ ಸಿಬ್ಬಂದಿ ಬಳಿ ಮಾಹಿತಿ ಪಡೆದಿದ್ದರು.
ಬಳ್ಳಾರಿ ಜಿಲ್ಲಾಸ್ಪತ್ರೆಯ ಮುಂಭಾಗ ಮಾಜಿ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಅವರ ಬೇಡಿಕೆಗಳನ್ನು ಆಲಿಸಿದ್ದರು. ಬಾಣಂತಿಯರ ಸಾವು ಪ್ರಕರಣದಲ್ಲಿ ನಿಷ್ಪಕ್ಷವಾದ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲಾದೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಹೀಗಾಗಿ ಕೂಡಲೇ ಉಪವಾಸ ಸತ್ಯಾಗ್ರಹ ಕೈಬಿಡುವಂತೆ ಬಿಜೆಪಿ ನಾಯಕರಿಗೆ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದರು.












Click it and Unblock the Notifications