ಬಳ್ಳಾರಿಯಲ್ಲಿ ವಿವಿಧೆಡೆ ದಾಳಿ: ಐವರು ಬಾಲ ಕಾರ್ಮಿಕರ ರಕ್ಷಣೆ
ಬಳ್ಳಾರಿ, ಅಕ್ಟೋಬರ್ 14: ಇತ್ತೀಚಿಗೆ ರಾಜ್ಯದಲ್ಲಿ ಬಾಲ ಕಾರ್ಮಿಕತೆ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಹೋಟೆಲ್, ಗ್ಯಾರೇಜ್, ಅಂಗಡಿಗಳು ಸೇರಿದಂತೆ ಇತರ ಕಡೆಗಳಲ್ಲಿ ಕೆಲಸ ಮಾಡುತ್ತಿರುವ ಮಕ್ಕಳ ರಕ್ಷಣೆ ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ.
ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನೆ, ಕಂದಾಯ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಬಿಡಿಡಿಎಸ್ ಚೈಲ್ಡ್‍ಲೈನ್ ಸಹಯೋಗದೊಂದಿಗೆ ಅಧಿಕಾರಿಗಳು ಬಳ್ಳಾರಿಯಲ್ಲಿ ವಿವಿಧೆಡೆ ದಾಳಿ ನಡೆಸಿ ಐವರು ಬಾಲ ಕಾರ್ಮಿಕರನ್ನು ರಕ್ಷಿಸಲಾಗಿದೆ.
ಬಳ್ಳಾರಿ ನಗರದ ಕೌಲ್ ಬಜಾರ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿವಿಧ ಸ್ಥಳಗಳಲ್ಲಿ ಗ್ಯಾರೇಜ್, ಬೇಕರಿ, ಹೋಟೆಲ್, ಮೆಕ್ಯಾನಿಕ್ ಶಾಪ್, ಕಿರಾಣಿ ಅಂಗಡಿಗಳಲ್ಲಿ ಬಾಲ ಕಾರ್ಮಿಕರು ಕೆಲಸ ಮಾಡುತ್ತಿದ್ದ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರಡಿಯಲ್ಲಿ ನೇಮಕವಾದ ನಿರೀಕ್ಷಕರ ಟಾಸ್ಕ್ ಪೋರ್ಸ್ ಸಮಿತಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದು, 5 ಬಾಲ ಕಾರ್ಮಿಕರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಪೋಷಕರ ವಶಕ್ಕೆ ಒಪ್ಪಿಸಿದ್ದಾರೆ.

ಮಕ್ಕಳ ವಯಸ್ಸಿನ ದಾಖಲೆಗಳನ್ನು ಪಡೆದ ಅಧಿಕಾರಿಗಳು ಗ್ಯಾರೇಜ್, ಬೇಕರಿ, ಹೋಟೆಲ್, ಮೆಕ್ಯಾನಿಕ್ ಶಾಪ್ ಮಾಲೀಕರ ವಿರುದ್ಧ ಬಾಲ ಕಾರ್ಮಿಕ ಕಾಯ್ದೆ ಹಾಗೂ ಬಾಲನ್ಯಾಯ ಕಾಯ್ದೆ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ. ಇನ್ನು ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ ತಿಳಿಸಿದ್ದಾರೆ.
ಬಳಿಕ ಬಾಲ ಕಾರ್ಮಿಕ ಕಾಯ್ದೆ ಕುರಿತು ಬಳ್ಳಾರಿ ನಗರದ ಅಂಗಡಿ ಮಾಲೀಕರಿಗೆ ಜಾಗೃತಿ ಮೂಡಿಸಿದ ಅಧಿಕಾರಿಗಳು ಕರಪತ್ರಗಳನ್ನು ನೀಡಿ ಹಾಗೂ ಪೋಸ್ಟರ್‌ಗಳನ್ನು ವಿತರಿಸಿದ್ದಾರೆ.
ಐವರು ಮಕ್ಕಳ ರಕ್ಷಣಾ ಕಾರ್ಯಾಚರಣೆಯಲ್ಲಿ ಕಾರ್ಮಿಕ ಅಧಿಕಾರಿ ಕಮಲ್ ಅಲ್ತಾಪ್ ಅಹಮದ್, ಕಾರ್ಮಿಕ ನಿರೀಕ್ಷಕ ರವಿದಾಸ್, ಶಿಶು ಅಭಿವೃದ್ಧಿ ಇಲಾಖೆಯ ಶಿವಕುಮಾರ ಸ್ವಾಮಿ, ಎ.ಎಸ್.ಐ ಬೋಜರಾಜ, ಟಿ.ಎ.ಕುಬೇರ, ಗ್ರಾಮ ಲೆಕ್ಕಿಗ ಉಮೇಶ್, ಸಿ.ಆರ್.ಪಿ ವಿಜಯಕುಮಾರ, ರಾಷ್ಟ್ರೀಯ ಬಾಲ ಕಾರ್ಮಿಕರ ಯೋಜನೆಯ ಕ್ಷೇತ್ರಾಧಿಕಾರಿ ಪಿ.ಎಂ.ಈಶ್ವರಯ್ಯ ಹಾಗೂ ಚೈಲ್ಡ್‍ಲೈನ್ ಸಿಬ್ಬಂದಿ ಚಂದ್ರಕಲಾ, ಕಾರ್ತಿಕ್ ಭಾಗಿಯಾಗಿದ್ದರು.












Click it and Unblock the Notifications