PM Modi Kalaburagi Visit : ಕಲಬುರಗಿಗೆ ಮೋದಿ, ಬಳ್ಳಾರಿಯಲ್ಲಿ ಬಸ್ ಸಂಚಾರ ವ್ಯತ್ಯಯ
ಬಳ್ಳಾರಿ, ಜನವರಿ 18; ಪ್ರಧಾನಿ ನರೇಂದ್ರ ಮೋದಿ ಜನವರಿ 19ರ ಗುರುವಾರ ಕಲಬುರಗಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನಲೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.
ಕಲಬುರಗಿಯ ಸೇಡಂ ತಾಲೂಕಿನ ಮಳಖೇಡ ಗ್ರಾಮದಲ್ಲಿ ಗುರುವಾರ ನಡೆಯುವ ಸರ್ಕಾರದ ಹಕ್ಕು ಪತ್ರ ವಿತರಣಾ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆದುಕೊಂಡು ಹೋಗಲು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಳ್ಳಾರಿ ವಿಭಾಗದಿಂದ 75 ಬಸ್‍ಗಳನ್ನು ಒದಗಿಸಲಾಗಿದೆ.
ಆದ್ದರಿಂದ ಜನವರಿ 20ರವರೆಗೆ ಬಳ್ಳಾರಿ, ಸಿರುಗುಪ್ಪ, ತೆಕ್ಕಲಕೋಟೆ, ಕುರುಗೋಡು, ಕುಡಿತಿನಿ, ಕಂಪ್ಲಿ, ಸಂಡೂರು ತಾಲೂಕುಗಳಿಗೆ ತೆರಳುವ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಯಾಣಿಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಸಹಕರಿಸಬೇಕು ಎಂದು ಎಂದು ಬಳ್ಳಾರಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ದೇವರಾಜು ತಿಳಿಸಿದ್ದಾರೆ.
ಕಲಬುರಗಿಯಲ್ಲೂ ಬಸ್ ವ್ಯತ್ಯಯ; ಕಲಬುರಗಿಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗ-1ರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಸ್‍ಗಳನ್ನು ಕರಾರು ಒಪ್ಪಂದದ ಮೇಲೆ ನೀಡಲಾಗುತ್ತಿದೆ.
ಸಮಾವೇಶಕ್ಕೆ ಫಲಾನುಭವಿಗಳನ್ನು ಕರೆತರಲು 2,382 ಬಸ್ ವ್ಯವಸ್ಥೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕಲಬುರಗಿ ವಿಭಾಗ-1ರ ವಿಭಾಗೀಯ ನಿಯಂತ್ರಣಾಧಿಕಾರಿಗಳು ಹೇಳಿದ್ದಾರೆ.
ಕಲಬುರಗಿಯಲ್ಲಿ ಜನವರಿ 19ರ ಸಂಜೆಯ ತನಕ ವೇಗದೂತ, ಗ್ರಾಮೀಣ ಮತ್ತು ನಗರ ಸಾರಿಗೆ ಸಂಚಾರದಲ್ಲಿ ಅಡಚಣೆ ಉಂಟಾಗಲಿದೆ. ಜನರು ಸಹಕರಿಸಬೇಕೆಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರಗಿ ವಿಭಾಗ-1ರ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಹಕ್ಕುಪತ್ರ ವಿತರಣೆ ಕಾರ್ಯಕ್ರಮ; ಗುರುವಾರ ಪ್ರಧಾನಿ ನರೇಂದ್ರ ಮೋದಿ ಕಲಬುರಗಿ ಸೇರಿ 5 ಜಿಲ್ಲೆಗಳ 51,900 ತಾಂಡಾ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು, ಜಿಲ್ಲೆಯ ಶಾಸಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.












Click it and Unblock the Notifications