Pre Monsoon: ಪೂರ್ವ ಮುಂಗಾರು ಮಳೆ ಆರಂಭ; ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚನೆ
ಬಳ್ಳಾರಿ, ಮೇ. 22: ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಆರಂಭಗೊಂಡಿದೆ. ಇದೇ ರೀತಿ ಬಳ್ಳಾರಿ ಜಿಲ್ಲೆಯಲ್ಲಿಯೂ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಮಳೆ ಹಾನಿಯಿಂದಾಗಿ ಸಂಭವಿಸಬಹುದಾದ ಅವಘಡಗಳನ್ನು ನಿಭಾಯಿಸಲು ಮುನ್ನೆಚ್ಚರಿಕೆಯಾಗಿ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ತಾಲ್ಲೂಕು ತಹಶೀಲ್ದಾರರೊಂದಿಗೆ ಸಭೆ ನಡೆಸಿ, ಅಗತ್ಯ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ. ಆರಂಭಿಕ ಮಳೆಯಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿದ್ದು, ಪೂರಕವಾಗಿ ಆರೋಗ್ಯ ಇಲಾಖೆಯು ಪ್ರತಿ ಗ್ರಾಮಗಳಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು. ಇದಕ್ಕೆ ಸ್ಥಳೀಯ ಸಂಸ್ಥೆಗಳು ಕೈಜೋಡಿಸಬೇಕು ಎಂದು ಹೇಳಿದ್ದಾರೆ.

ಮಳೆ ಹಾನಿ ತಪ್ಪಿಸಲು ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ
ಮಳೆಯಿಂದಾಗುವ ಮನೆ ಹಾನಿ ಮತ್ತು ಗುಡುಗು ಸಿಡಿಲಿನಿಂದ ಜನ ಜಾನುವಾರು ಪ್ರಾಣಹಾನಿ ತಡೆಗಟ್ಟಲು ಜಾಗೃತಿ ಮೂಡಿಸಬೇಕು, ಅದಲ್ಲದೆ ಮಳೆ, ಸಿಡಿಲಿನಿಂದ ಉಂಟಾಗುವ ಯಾವುದೇ ಹಾನಿ ವರದಿಯನ್ನು ತ್ವರಿತವಾಗಿ ಸಲ್ಲಿಸಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಸಂಬಂಧಿಸಿದ ಅಧಿಕಾರಿಗಳು ತಕ್ಷಣವೇ ಆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡು ವರದಿ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಸಮರ್ಪಕವಾಗಿ ಸರಬರಾಜು ಮಾಡಬೇಕು. ಈ ಬಾರಿ ಹೆಚ್ಚಿನ ಮಳೆಯಾಗುವ ಸಂಭವವಿದೆ ಎಂದು ಹವಮಾನ ಇಲಾಖೆಯು ಮುನ್ಸೂಚನೆ ನೀಡಿದ್ದು, ಮಳೆಯಿಂದ ಜಿಲ್ಲೆಯಲ್ಲಿ ಯಾವುದೇ ರೀತಿಯ ಹಾನಿ ಸಂಭವಿಸದಂತೆ ಎಚ್ಚರವಹಿಸಬೇಕು ಎಂದು ಎಲ್ಲಾ ತಾಲ್ಲೂಕು ತಹಶೀಲ್ದಾರರಿಗೆ ನಿರ್ದೇಶನ ನೀಡಿದ್ದಾರೆ.

ವಿದ್ಯುತ್ ಅವಘಡ ಉಂಟಾಗದಂತೆ ನಿಗಾವಹಿಸಿ
ಜಿಲ್ಲೆಯ ವಿವಿಧ ಭಾಗಗಳಲ್ಲಿ ಅತಿಹೆಚ್ಚು ಮಳೆಯಾಗುತ್ತಿರುವುದು ವರದಿಯಾಗುತ್ತಿದ್ದು, ವಿದ್ಯುತ್ ಅವಘಡ ಉಂಟಾಗದಂತೆ ನಿಗಾವಹಿಸಬೇಕು. ಸಾರ್ವಜನಿಕರು ವಿದ್ಯುತ್ ಸಮಸ್ಯೆಗಳಿಗೆ ಸಂಬಂಧಿಸಿದಂತೆ ದೂರುಗಳಿಗೆ ಕರೆ ಮಾಡಿದಲ್ಲಿ ತಕ್ಷಣವೇ ಸ್ಪಂದಿಸಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬಳ್ಳಾರಿ ನಗರದಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ರಾಜಕಾಲುವೆ ಹಾಗೂ ಇತರೆ ಚರಂಡಿ ಮಾರ್ಗಗಳನ್ನು ಸ್ವಚ್ಛಗೊಳಿಸಲು ಕೂಡಲೆ ಕ್ರಮವಹಿಸಬೇಕು. ವಿವಿಧ ಇಲಾಖೆಗಳು ಪರಸ್ಪರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳನ್ನು ಬೇಗ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ವಾಂತಿಭೇದಿ ಪ್ರಕರಣಗಳ ನಿಯಂತ್ರಣಕ್ಕೆ ಕ್ರಮ
ಇನ್ನು, ಮಳೆಗಾಲ ಆರಂಭವಾದ ಹಿನ್ನಲೆಯಲ್ಲಿ ಕುಡಿಯುವ ನೀರು ಕಲುಷಿತಗೊಳ್ಳುವ ಸಂಭವವಿದ್ದು, ಇದರಿಂದ ಉಂಟಾಗಬಹುದಾದ ವಾಂತಿಭೇದಿ ಪ್ರಕರಣಗಳ ನಿಯಂತ್ರಣಕ್ಕಾಗಿ ಎಲ್ಲಾ ನೀರಿನ ಮೂಲಗಳನ್ನು ನಿರಂತರವಾಗಿ ಪರೀಕ್ಷೆಗೊಳಪಡಿಸಬೇಕು ಎಂದು ಅಧಿಕಾರಿಗಳು ಮಾಹಿತಿ ನಿಡಿದ್ದಾರೆ.
ರಾಜ್ಯದ ವಿವಿಧೆಡೆ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನೀರಿನ ಎಲ್ಲ ಮೂಲಗಳನ್ನು ಸಕಾಲದಲ್ಲಿ ಗ್ರಾಮ ಪಂಚಾಯತ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ಸಕಾಲದಲ್ಲಿ ನಿಯಮಾನುಸಾರ ಕ್ಲೋರಿನೇಷನ್ ಮಾಡಿಸಿ ನಿರಂತರವಾಗಿ ಪರೀಕ್ಷೆ ಮಾಡಿಸಬೇಕು. ಯಾವುದೇ ವಾಂತಿಭೇದಿ ಪ್ರಕರಣಗಳು ಉಂಟಾಗದಂತೆ ಗ್ರಾಮ ಪಂಚಾಯತ್ ಒಳಗೊಂಡಂತೆ ಎಲ್ಲ ಸ್ಥಳೀಯ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಸೂಚಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಪ್ರಮುಖ ಜಾತ್ರೆಗಳು, ಉತ್ಸವಗಳಲ್ಲಿ ಜಿಲ್ಲಾ ಕಾಲರಾ ನಿಯಂತ್ರಣ ತಂಡವು ಸಕಾಲದಲ್ಲಿ ಉಪಸ್ಥಿತರಿದ್ದು, ನೀರಿನ ಮೂಲಗಳು, ಆಹಾರದ ತಯಾರಿಕೆಯ ಸ್ಥಳ ಮುಂತಾದವುಗಳನ್ನು ಪರಿಶೀಲಿಸಿ ನಿಗಾ ವಹಿಸುವ ಮೂಲಕ ವಾಂತಿ-ಭೇದಿ ಪ್ರಕರಣಗಳು ಉಂಟಾಗದಂತೆ ಕ್ರಮವಹಿಸಿಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ.ರಮೇಶ್ ಬಾಬು ಮಾಹಿತಿ ನೀಡಿದ್ದಾರೆ.












Click it and Unblock the Notifications