ಬಳ್ಳಾರಿ ಸರ್ಕಾರಿ ಆಸ್ಪತ್ರೆಗೆ ಹೊಸ ಸಂಕಷ್ಟ: ಮೂವರು ಬಾಣಂತಿಯರಿಗೆ ಇಲಿ ಜ್ವರ
ಬಳ್ಳಾರಿ, ನವೆಂಬರ್ 30: ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಒಟ್ಟು ಐದು ಬಾಣಂತಿಯರು ಮೃತಪಟ್ಟ ಘಟನೆ ರಾಜ್ಯಾದಂತ್ಯ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಣಂತಿ, ಗರ್ಭಿಣಿಯರು ಹಾಗೂ ಅವರ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯವೇ ಈ ಬಾಣಂತಿಯರ ಸಾಲು ಸಾಲು ಸಾವಿಗೆ ಕಾರಣ ಎನ್ನುವ ಆರೋಪ ಇದೆ.
ಐದು ಬಾಣಂತಿಯರ ಸಾವು ಮಾಸುವ ಮುನ್ನವೇ ಇದೀಗ ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಮತ್ತೊಂದು ಸಮಸ್ಯೆ ಎದುರಾಗಿದೆ. ಅದು ಕೂಡ ಬಾಣಂತಿಯರಲ್ಲೇ ಈ ಸಮಸ್ಯೆ ಎದುರಾಗಿದೆ. ಬಳ್ಳಾರಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಸಿಸೇರಿಯನ್ ಚಿಕಿತ್ಸೆ ಒಳಪಟ್ಟ ಮೂವರು ಬಾಣಂತಿಯರಲ್ಲಿ ಇಲಿ ಜ್ವರ ಇರುವುದು ಪತ್ತೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಆರೋಗ್ಯದಲ್ಲಿನ ಏರುಪೇರು ಸಮಸ್ಯೆ ಗಮನಿಸಿ ಪರೀಕ್ಷೆ ನಡೆಸಿದಾಗ ಮೂವರು ಬಾಣಂತಿಯರಲ್ಲಿ ಜ್ವರ ಇರುವುದು ಕಂಡುಬಂದಿದೆ. ಸದ್ಯ ಇಲಿ ಜ್ವರದಿಂದ ಇಬ್ಬರು ಬಾಣಂತಿಯರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಒಬ್ಬರಿಗೆ ಚಿಕಿತ್ಸೆ ಮುಂದೆವರೆದಿದೆ ಎಂದು ಬಿಮ್ಸ್ ಆಡಳಿತ ಮಂಡಳಿ ತಿಳಿಸಿದೆ. ಬಾಣಂತಿಯರ ಸಾಲು ಸಾಲು ಸಾವಿನ ಆರೋಪ ಹೊತ್ತಿರುವ ಬಳ್ಳಾರಿ ಸರ್ಕಾರಿ ಆಸ್ಪತ್ರೆಗೆ ಈಗ ಹೆರಿಗೆ ಬಳಿಕ ತಾಯಂದಿರಲ್ಲಿ ಇಲಿ ಜ್ವರ ಕಾಣಿಸಿಕೊಳ್ಳುತ್ತಿರುವುದು ಮತ್ತೊಂದು ಸಂಕಷ್ಟವಾಗಿದೆ.
ಬಾಣಂತಿಯರ ಸಾವು: ಸರ್ಕಾರ ವಿರುದ್ಧ ಆರ್.ಅಶೋಕ್ ಆಕ್ರೋಶ
ಬಳ್ಳಾರಿಯ ಜಿಲ್ಲಾಸ್ಪತ್ರೆ ಹಾಗು ಬಿಮ್ಸ್ ಆಸ್ಪತ್ರೆಯಲ್ಲಿ 5 ಬಾಣಂತಿ ಮಹಿಳೆಯರ ಸಾವಾಗಿದ್ದು, ಈ ಬಗ್ಗೆ ತಜ್ಞರ ತಂಡ ತನಿಖೆ ಮಾಡಿ ನೀಡಿರುವ ವರದಿಯನ್ನು ಕಾಂಗ್ರೆಸ್ ಸರ್ಕಾರ ಗೌಪ್ಯವಾಗಿ ಮುಚ್ಚಿಟ್ಟಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಾಂಗ್ರೆಸ್ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.
ಈ ಸರಣಿ ಸಾವಿನ ಬೆನ್ನಲ್ಲೇ, ನವೆಂಬರ್ 16ನೆ ತಾರೀಖಿನಂದು ಖಾಸಗಿ ಕಂಪನಿಯೊಂದು ಸರಬರಾಜು ಮಾಡಿರುವ Ringer Lactate Infusion ಔಷಧಿಯನ್ನ ಬಳಕೆ ಮಾಡದಂತೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಸುತ್ತೋಲೆ ಹೊರಡಿಸಿದೆ. ಬಳ್ಳಾರಿಯಲ್ಲಿ ಸಂಭವಿಸಿರುವ ಬಾಣಂತಿಯರ ಸಾವಿಗೂ ಈ ಸುತ್ತೋಲೆಗೂ ಏನಾದರೂ ಸಂಬಂಧವಿದೆಯೇ? ಈ ಕಳಪೆ ಗುಣಮಟ್ಟದ ಔಷಧಿ ಪೂರೈಕೆಗೆ, ಬಳಕೆಗೆ ಹೊಣೆ ಯಾರು? ಸರ್ಕಾರ ವರದಿಯನ್ನ ಮುಚ್ಚಿಡುವ ಮೂಲಕ ಯಾರನ್ನು ರಕ್ಷಿಸುತ್ತಿದೆ?
ಇಡೀ ಕರ್ನಾಟಕವೇ ಬೆಚ್ಚಿ ಬೀಳುವ ಇಂತಹ ಆಘಾತಕಾರಿ ಘಟನೆ ನಡೆದಿದ್ದರೂ ಸಿಎಂ ಸಿದ್ದರಾಮಯ್ಯ, ಅವರಾಗಲಿ, ಡಿಸಿಎಂ ಡಿ.ಕೆ ಶಿವಕುಮಾರ್ ಆಗಲಿ ಇದರ ಬಗ್ಗೆ ಕ್ರಮ ಕೈಗೊಳ್ಳುವುದಿರಲಿ, ಕನಿಷ್ಠ ಪಕ್ಷ ಸಂತಾಪ ಕೂಡ ಸೂಚಿಸಿಲ್ಲ. ಇನ್ನು ಬಳ್ಳಾರಿ ಉಸ್ತುವಾರಿ ಸಚಿವರಾಗಲಿ, ಈವರೆಗೂ ಜಿಲ್ಲೆಗೆ ಭೇಟಿ ನೀಡುವ ಗೋಜಿಗೂ ಹೋಗಿಲ್ಲ. ಈ ಪ್ರಕರಣದ ನೈತಿಕೆ ಹೊಣೆ ಹೊತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡಲೇ ರಾಜೀನಾಮೆ ನೀಡಬೇಕು. ಈ ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸುತ್ತೇನೆ ಎಂದು ಆಗ್ರಹಿಸಿದ್ದಾರೆ.












Click it and Unblock the Notifications