ಸಂಡೂರು ಉಪಚುನಾವಣೆ; ಕಟ್ಟುನಿಟ್ಟಾಗಿ ಜಾರಿಗೆ ಬಂತು ಮಾದರಿ ನೀತಿ ಸಂಹಿತೆ
ಬಳ್ಳಾರಿ, ಅಕ್ಟೋಬರ್ 17: ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭೆ ಕ್ಷೇತ್ರದ ಉಪಚುನಾವಣೆ-2024ರ ದಿನಾಂಕ ಘೋಷಣೆ ಮಾಡಿದೆ. ಸಂಡೂರು ವಿಧಾನಸಭಾ ವ್ಯಾಪ್ತಿಯಲ್ಲಿ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ನವೆಂಬರ್ 13ರಂದು ಮತದಾನ ಮತ್ತು ನವೆಂಬರ್ 23ರಂದು ಮತಎಣಿಕೆ ನಡೆಯಲಿದೆ. ಬಳ್ಳಾರಿ ಜಿಲ್ಲಾಡಳಿತ ಉಪ ಚುನಾವಣೆಯ ಕುರಿತು ಮಾಹಿತಿಯನ್ನು ನೀಡಿದೆ.
ಬಳ್ಳಾರಿ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸಂಡೂರು ಉಪ ಚುನಾವಣೆ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭರಾಣಿ, ಜಿಲ್ಲಾ ಸ್ವೀಪ್ ಸಮಿತಿಯ ನೋಡೆಲ್ ಅಧಿಕಾರಿ ಹಾಗೂ ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಸಹಾಯಕ ಆಯುಕ್ತ ಪ್ರಮೋದ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

"ಸಂಡೂರು ವಿಧಾನಸಭೆ ವ್ಯಾಪ್ತಿಯಲ್ಲಿ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ನವೆಂಬರ್ 13ರಂದು ಮತದಾನ ನಡೆಯಲಿದೆ. ನವೆಂಬರ್ 23ರಂದು ಮತಎಣಿಕೆ ನಡೆಯಲಿದೆ. ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ" ಎಂದು ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು.
ಚುನಾವಣೆ ವೇಳಾಪಟ್ಟಿ: ಅಕ್ಟೋಬರ್ 18ರ ಶುಕ್ರವಾರ ಸಂಡೂರು ಉಪ ಚುನಾವಣೆಯ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅಕ್ಟೋಬರ್ 25ರ ಶುಕ್ರವಾರ ಕೊನೆಯ ದಿನ. ಅಕ್ಟೋಬರ್ 28ರ ಸೋಮವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 30 ಬುಧವಾರ ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ನವೆಂಬರ್ 13ರ ಬುಧವಾರ ಮತದಾನ ನಡೆಯಲಿದ್ದು, ನವೆಂಬರ್ 23ರ ಶನಿವಾರ ಮತ ಎಣಿಕೆ ಕಾರ್ಯ ನಡೆಯಲಿದೆ. ನವೆಂಬರ್ 25ರ ಸೋಮವಾರದಂದು ಸಂಪೂರ್ಣ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
ಸಂಡೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 2,36,100 ಮತದಾರರಿದ್ದಾರೆ. ಇವರಲ್ಲಿ 1,17,789 ಪುರುಷ ಮತದಾರರು, 1,18,282 ಮಹಿಳೆ ಮತದಾರರು ಹಾಗೂ 29 ಅಲ್ಪಸಂಖ್ಯಾತ ಲಿಂಗತ್ವ ಮತದಾರರು. ಮತದಾನಕ್ಕಾಗಿ ಒಟ್ಟು 253 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತದೆ.
ಸಂಡೂರು ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಪಾರದರ್ಶಕ, ನ್ಯಾಯಸಮ್ಮತ ಚುನಾವಣೆಗೆ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಚುನಾವಣಾ ಅಕ್ರಮ ತಡೆಗಟ್ಟಲು ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 8 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯೊಳಗೆ 2 ಜಿಂದಾಲ್ (ವಿದ್ಯಾನಗರ ಏರ್‌ಪೋರ್ಟ್), ವೇಣಿ ವೀರಾಪುರ. ಅಂತರ್ ಜಿಲ್ಲಾ 4, ಅಂತರ್ ರಾಜ್ಯ ಗಡಿಭಾಗದಲ್ಲಿ 2 ಚೆಕ್‌ಪೋಸ್ಟ್ ನಿರ್ಮಾಣ ಮಾಡಲಾಗಿದೆ.
ಮಾದರಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ಹಲವು ತಂಡಗಳನ್ನು ರಚಿಸಲಾಗಿದೆ. 20 ಸೆಕ್ಟರ್ ಅಧಿಕಾರಿಗಳು, 9 ಎಫ್‌ಎಸ್‌ಟಿ ತಂಡ, 8 ಎಸ್‌ಎಸ್‌ಟಿ ತಂಡ, 1 ವಿವಿಟಿ ತಂಡ, 3 ವಿಎಸ್‌ಟಿ ತಂಡ, 1 ಸಹಾಯಕ ಚುನಾವಣೆ ವೆಚ್ಚ ವೀಕ್ಷಕರು, 1 ಅಕೌಂಟಿಂಗ್ ತಂಡಗಳನ್ನು ರಚಿಸಲಾಗಿದೆ. ಎಂಸಿಎಂಸಿ ತಂಡಗಳನ್ನು ಸಹ ರಚಿಸಲಾಗಿದೆ.
ಉಪ ಚುನಾವಣೆ ಏಕೆ?: ಕರ್ನಾಟಕದಲ್ಲಿ 2023ರಲ್ಲಿ ವಿಧಾನಸಭೆ ಚುನಾವಣೆ ನಡೆದಿತ್ತು. ಈಗ ಸಂಡೂರು ಕ್ಷೇತ್ರದ ಶಾಸಕರು ರಾಜೀನಾಮೆ ನೀಡಿರುವುದರಿಂದ ಉಪ ಚುನಾವಣೆ ಎದುರಾಗಿದೆ. 2023ರಲ್ಲಿ ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಇ. ತುಕಾರಾಂ 85,223 ಮತಗಳನ್ನು ಪಡೆದು ಜಯಗಳಿಸಿದ್ದರು.
2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಇ. ತುಕಾರಾಂ ಅವರನ್ನು ಬಳ್ಳಾರಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಸೂಚಿತ್ತು. ಚುನಾವಣೆಯಲ್ಲಿ ಗೆಲುವು ಸಾಧಿಸಿ ಸಂಸತ್ ಸದಸ್ಯರಾದ ಬಳಿಕ ಇ. ತುಕಾರಾಂ ಸಂಡೂರು ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದ್ದರಿಂದ ಈಗ ಉಪ ಚುನಾವಣೆ ನಡೆಯುತ್ತಿದೆ.












Click it and Unblock the Notifications