ಕೂಡ್ಲಿಗಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು, 7 ಮಂದಿಗೆ ಗಂಭೀರ ಗಾಯ
Accident News: ಅಪಘಾತ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಹಾಗೆಯೇ ಇದೀಗ ಹಂಪಿಯಿಂದ ಬೆಂಗಳೂರಿಗೆ ಹೊರಟಿದ್ದ ಕಾರೊಂದು ಸೇತುವೆ ತಡೆಗೋಡೆಗೆ ಡಿಕ್ಕಿಯಾಗಿದೆ. ಈ ಅಪಘಾತದ ರಭಸಕ್ಕೆ ಇಬ್ಬರು ಸಾವು, 7 ಮಂದಿ ಗಾಯಗೊಂಡಿರುವ ಘಟನೆ ಕೂಡ್ಲಿಗಿ ತಾಲ್ಲೂಕಿನ ಬಣವಿಕಲ್ಲು ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಮೃತರನ್ನು ಬೆಂಗಳೂರು ಮೂಲದ ಪ್ರೀತಿ (35) ಮತ್ತು ಅವರ ಅವರ ಪುತ್ರ ಯಶ್ಚಿತ್ (1 ವರ್ಷ10 ತಿಂಗಳು) ಎಂದು ಗುರುತಿಸಲಾಗಿದೆ. ಇನ್ನು ಘಟನೆಯಲ್ಲಿ 7 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬೆಂಗಳೂರು ನಿವಾಸಿ ಮೋಹನ್ ಕುಮಾರ್ ಅವರು ತಮ್ಮ ಕುಟುಂಬ ಹಾಗೂ ಸಂಬಂಧಿಕರೊಂದಿಗೆ ಮಂತ್ರಾಲಯಕ್ಕೆ ತೆರಳಿ ವಾಪಸ್ ಬರುವಾಗ ಈ ಅಪಘಾತ ಸಂಭವಿಸಿದೆ. ಹಂಪಿ ವೀಕ್ಷಣೆ ಮಾಡಿಕೊಂಡು ಊರಿಗೆ ಮರಳುವ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಕಾನಹೊಸಹಳ್ಳಿ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಇನ್ನು ಮೋಹನ್ ಕುಮಾರ್ ಕಾರು ಚಾಲನೆ ಮಾಡುತ್ತಿದ್ದರು. ಅಪಘಾತದಲ್ಲಿ ಅವರ ಪುತ್ರ ಯಶ್ಚಿತ್ ಸ್ಥಳದಲ್ಲೇ ಮೃತಪಟ್ಟರು. ಅವರ ಪತ್ನಿ ಪ್ರೀತಿ ಅವರನ್ನು ಕೂಡ್ಲಿಗಿ ಆಸ್ಪತ್ರೆಗೆ ಕರೆತಂದು, ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗಕ್ಕೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯದಲ್ಲಿ ಮೃತಪಟ್ಟವರು.
ಗಾಯಗೊಂಡಿರುವ ಮೋಹನ್ ಕುಮಾರ್, ರಾಧಾ, ಮರಿರಂಗಯ್ಯ, ರೂಪಾ, ಲಕ್ಷ್ಮಿದೇವಿ, ಚರಿತ್ ಹಾಗೂ ಮಿಥುನ್ ಅವರನ್ನು ಚಿತ್ರದುರ್ಗ ಮತ್ತು ದಾವಣಗೆರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಈ ಪ್ರಕರಣ ಕಾನಹೊಸಹಳ್ಳಿ ಠಾಣೆಯಲ್ಲಿ ದಾಖಲಾಗಿದೆ ಎಂದು ತಿಳಿದುಬಂದಿದೆ.
ಭೀಕರ ಅಪಘಾತದಲ್ಲಿ ಇಬ್ಬರು ಸಾವು: ಇನ್ನೋವಾ ಕಾರು ಹಾಗೂ ಟೆಂಪೋ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ಇನ್ನೋವಾ ಕಾರು ಹಾಗೂ ಟಂಟಂ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಅನಗವಾಡಿ ಬ್ರಿಡ್ಜ್ ಬಳಿ ನಡೆದಿದೆ. ಇನ್ನೋವಾ ಕಾರು ಹಾಗೂ ಟಂಟಂ ವಾಹನಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡಿವೆ. ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮಹೇಶ್ ನಾಯ್ಕರ್ (27) ಮತ್ತು ಮೆಹಬೂಬ್ ಶೇಖ್ (30) ಎಂಬುವವರು ಅಪಘಾತದಲ್ಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇನ್ನು ವಿಶಾಲ್ ವರತಿಲ್ಲೆ, ವಿಜಯಕುಮಾರ್ ಭೋವಿ, ಗುರುಪ್ರಸಾದ್ ಸುಂಕದ ಎಂಬುವರು ಗಾಯಾಳುಗಳಾಗಿದ್ದು, ಇವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರು ಮತ್ತು ಗಾಯಾಳುಗಳು ನವನಗರದ 45ನೇ ಸೆಕ್ಟರ್ ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಘಟನೆ ಸ್ಥಳಕ್ಕೆ ಆಮಿಸಿದ ಕಲಾದಗಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಊಟಕ್ಕೆಂದು ಹತ್ತಿರದ ವಿಜಯಪುರ ಜಿಲ್ಲೆಯ ಕೊಲ್ಹಾರಕ್ಕೆ ಹೋಗಿದ್ದ ಐವರಿದ್ದ ಟಂಟಂ ವಾಹನ ತಡರಾತ್ರಿ ಬಾಗಲಕೋಟೆ ಕಡೆಗೆ ವಾಪಸ್ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಇನ್ನೋವಾ ಕಾರು ಚಾಲಕನ ಅಜಾಗರೂಕತೆ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಮುಂದೆ ಹೋಗುತ್ತಿದ್ದ ಮಹಿಂದ್ರಾ ಪಿಕ್ ಅಪ್ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಎದುರಿಗೆ ಬರುತ್ತಿದ್ದ ಟಂಟಂಗೆ ಡಿಕ್ಕಿ ಹೊಡೆದಿದೆ.












Click it and Unblock the Notifications