ವಿಜಯನಗರ ಜಿಲ್ಲೆ; ಬಳ್ಳಾರಿ ಜನಪ್ರತಿನಿಧಿಗಳ ಸಭೆ ಕರೆದ ಸಿಎಂ
ಬೆಂಗಳೂರು, ಅಕ್ಟೋಬರ್ 02 : ಬಳ್ಳಾರಿಯನ್ನು ವಿಭಜನೆ ಮಾಡಿ ವಿಜಯನಗರವನ್ನು ಪ್ರತ್ಯೇಕ ಜಿಲ್ಲೆಯಾಗಿಸುವ ಪ್ರಸ್ತಾವನೆಗೆ ಬಿಜೆಪಿ ಶಾಸಕರೇ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವಿಚಾರದ ಬಗ್ಗೆ ಪರ-ವಿರೋಧ ಚರ್ಚೆ ನಡೆಯುತ್ತಿದೆ.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬುಧವಾರ ಮಧ್ಯಾಹ್ನ 3.30ಕ್ಕೆ ಬಳ್ಳಾರಿ ಜಿಲ್ಲೆಯ ಜನಪ್ರತಿನಿಧಿಗಳ ಸಭೆಯನ್ನು ಕರೆದಿದ್ದಾರೆ. ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಸಭೆ ನಡೆಯಲಿದೆ.
ಆರೋಗ್ಯ ಸಚಿವ ಶ್ರೀರಾಮುಲು, ಶಾಸಕರಾದ ಸೋಮಶೇಖರ ರೆಡ್ಡಿ, ಜಿ. ಕರುಣಾಕರ ರೆಡ್ಡಿ ವಿಜಯನಗರ ಜಿಲ್ಲೆಯನ್ನು ರಚನೆ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಜನಪ್ರತಿನಿಧಿಗಳ ಜೊತೆ ಮುಖ್ಯಮಂತ್ರಿಗಳು ಮಾತುಕತೆ ನಡೆಸಿಲ್ಲ ಎಂದು ಆರೋಪಿಸಿದ್ದಾರೆ.

ವಿಜಯನಗರ ಕ್ಷೇತ್ರದ ಅನರ್ಹ ಶಾಸಕ ಆನಂದ್ ಸಿಂಗ್ ವಿಜಯನಗರವನ್ನು ಪ್ರತ್ಯೇಕ ಜಿಲ್ಲೆಯಾಗಿ ಮಾಡಬೇಕು ಎಂದು ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲು ಟಿಪ್ಪಣಿ ಸಿದ್ಧಪಡಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಬಳ್ಳಾರಿ ಜಿಲ್ಲೆಯ ಜನಪ್ರತಿನಿಧಿಗಳು ಮುಖ್ಯಮಂತ್ರಿಗಳ ತೀರ್ಮಾನವನ್ನು ವಿರೋಧಿಸುತ್ತಿದ್ದಾರೆ. ಬಿಜೆಪಿ ಶಾಸಕರ ಅಭಿಪ್ರಾಯವನ್ನು ಪಡೆಯದೇ ಅವರು ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಆದ್ದರಿಂದ, ಜನಪ್ರತಿನಿಧಿಗಳ ಸಭೆಯನ್ನು ಕರೆಯಲಾಗಿದೆ.
ಯಡಿಯೂರಪ್ಪ ಸಂಪುಟದಲ್ಲಿ ಆರೋಗ್ಯ ಸಚಿವರಾಗಿರುವ ಮೊಳಕಾಲ್ಮೂರು ಶಾಸಕ ಬಿ. ಶ್ರೀರಾಮುಲು ಸಹ ಸರ್ಕಾರದ ಪ್ರಸ್ತಾವನೆಯನ್ನು ವಿರೋಧಿಸಿದ್ದಾರೆ. ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಬೇಕೆ?, ಬೇಡವೇ? ಎಂಬ ಬಗ್ಗೆ ಇಂದು ಅಂತಿಮ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.
ಸದ್ಯ ಇರುವ ಪ್ರಸ್ತಾವನೆಯಂತೆ ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿ ವಿಜಯನಗರವನ್ನು ಪ್ರತ್ಯೇಕ ಜಿಲ್ಲೆಯಾಗಿ ಮಾಡಲಾಗುತ್ತದೆ. ಹೊಸಪೇಟೆ ನೂತನ ಜಿಲ್ಲೆಯ ಕೇಂದ್ರಸ್ಥಾನವಾಗಲಿದೆ.
ಹೊಸ ಜಿಲ್ಲೆಯಲ್ಲಿ ಹೊಸಪೇಟೆ, ಕಂಪ್ಲಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹಡಗಲಿ ಮತ್ತು ಹರಪನಹಳ್ಳಿ ತಾಲೂಕುಗಳು ಇರಲಿವೆ.












Click it and Unblock the Notifications