"ನಾವಂತೂ ಗುಂಪುಗಾರಿಕೆ ಮಾಡಲ್ಲ, ಅದು ನಮ್ಮ ಸಂಸ್ಕೃತಿಯೂ ಅಲ್ಲ"
ಬಳ್ಳಾರಿ, ನವೆಂಬರ್ 16: "ಸಚಿವ ಶ್ರೀರಾಮುಲು ಅವರನ್ನು ಡಿಸಿಎಂ ಮಾಡಿ ಎಂದು ಕೇಳಿಕೊಳ್ಳುತ್ತೇವೆಯೇ ಹೊರತು ಈ ವಿಚಾರವಾಗಿ ಗುಂಪುಗಾರಿಕೆ ಮಾಡುವ ಪ್ರಶ್ನೆಯೇ ಇಲ್ಲ" ಎಂದಿದ್ದಾರೆ ಶಾಸಕ ಗಾಲಿ ಸೋಮಶೇಖರರೆಡ್ಡಿ.
ಬಳ್ಳಾರಿ ನಗರದ ಸರ್ಕಾರಿ ಅತಿಥಿ ಗೃಹದ ಸಮೀಪ ಸರ್ಕಾರಿ ನೌಕರರ ವಸತಿ ಗೃಹಗಳ ನಿರ್ಮಾಣ ಕಾರ್ಯಕ್ಕೆ ಸೋಮವಾರ ಭೂಮಿ ಪೂಜೆ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಅವರು, "ಅಂದಾಜು ಹದಿನೈದು ಕೋಟಿ ರೂಪಾಯಿ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಈ ವಸತಿ ಗೃಹ ನಿರ್ಮಾಣ ಕಾರ್ಯ ನಡೆಯುತ್ತಿದೆ" ಎಂದು ಮಾಹಿತಿ ನೀಡಿದರು.
ಇದೇ ಸಂದರ್ಭ, ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಸಚಿವ ಶ್ರೀರಾಮುಲು ಅವರಿಗೆ ಡಿಸಿಎಂ ಹುದ್ದೆ ನೀಡುವ ವಿಚಾರದಲ್ಲಿ ಗುಂಪುಗಾರಿಕೆ ಮಾಡುತ್ತಿರುವ ಮಾತಿದೆಯಲ್ಲಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, "ನಾವಂತೂ ಗುಂಪುಗಾರಿಕೆ ನಡೆಸಿಲ್ಲ. ಪ್ರಬಲ ನಾಯಕ ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡಬೇಕೆಂಬ ವಿಚಾರದ ಕುರಿತು ಚರ್ಚೆ ನಡೆದಿದೆಯಷ್ಟೆ. ಆದರೆ ಗುಂಪುಗಾರಿಕೆ ನಡೆಸಿಲ್ಲ. ಅದು ನಮ್ಮ ಸಂಸ್ಕೃತಿಯೂ ಅಲ್ಲ ಎಂದಿದ್ದಾರೆ.

ಈ ಬಾರಿಯ ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿ, ನಾನಂತೂ ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಆ ಭಗವಂತನ ಕೃಪೆ, ಆಶೀರ್ವಾದ ಇದ್ದರೆ ನನಗೆ ಸಚಿವ ಸ್ಥಾನ ಸಿಗುತ್ತದೆ" ಎಂದು ಹೇಳಿದರು.












Click it and Unblock the Notifications