ಬಳ್ಳಾರಿ ಜಿಲ್ಲೆಗೆ ಹೊಸ ಉಸ್ತುವಾರಿ ಸಚಿವರ ನೇಮಕ
ಬಳ್ಳಾರಿ, ಜೂನ್ 29: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಖಾತೆ ಸಚಿವರಾಗಿದ್ದ ಬಿ. ನಾಗೇಂದ್ರ ರಾಜೀನಾಮೆ ನೀಡಿದ್ದರು. ಅವರು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು.
ಬಿ. ನಾಗೇಂದ್ರ ರಾಜೀನಾಮೆ ನೀಡಿದ ಬಳಿಕ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನವೂ ಖಾಲಿಯಾಗಿತ್ತು. ಈಗ ಸರ್ಕಾರ ಬಳ್ಳಾರಿ ಜಿಲ್ಲೆಗೆ ನೂತನ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದೆ.

ಈ ಕುರಿತು ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಪುಟ್ಟರಾಮು ಅರ್. ಸರ್ಕಾರದ ಉಪ ಕಾರ್ಯದರ್ಶಿ(ಲೆಕ್ಕಪತ್ರ) ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಅಧಿಸೂಚನೆ ಹೊರಡಿಸಿದ್ದಾರೆ.
ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಬಳ್ಳಾರಿ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ ಮಾಡಲಾಗಿದೆ. ಜಮೀರ್ ಅಹ್ಮದ್ ಖಾನ್ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವರು ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ.
ಅಧಿಸೂಚನೆಯ ವಿವರ: ಜಮೀರ್ ಅಹ್ಮದ್ ಖಾನ್, ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ವಿಜಯನಗರ ಜಿಲ್ಲೆಯ ಉಸ್ತುವಾರಿ ಸಚಿವರು ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸಚಿವ ಬಿ. ನಾಗೇಂದ್ರ 2023ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಸೇರಿದ್ದರು. ಅವರಿಗೆ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಖಾತೆಯ ಹೊಣೆ ನೀಡಲಾಗಿತ್ತು ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ ಮಾಡಲಾಗಿತ್ತು.
ಆದರೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಸುಮಾರು 94.73 ಕೋಟಿ ಹಣ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಿ. ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಲಾಗಿತ್ತು. ಜೂನ್ 6ರಂದು ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಬಿ. ನಾಗೇಂದ್ರ ರಾಜೀನಾಮೆ ಬಳಿಕ ರಾಜ್ಯದಲ್ಲಿ ಸಚಿವ ಸ್ಥಾನವೊಂದು ಖಾಲಿಯಾಗಿತ್ತು. ಅಲ್ಲದೇ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನವೂ ಖಾಲಿಯಾಗಿತ್ತು. ಈಗ ಬಳ್ಳಾರಿ ಪಕ್ಕದ ವಿಜಯನಗರದ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಿಸಲಾಗಿದೆ.
ಜಮೀರ್ ಅಹ್ಮದ್ ಖಾನ್ ವಿಜಯನಗರ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರು. ಕಳೆದ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಅವರು ವಿಜಯನಗರಕ್ಕೆ ಭೇಟಿ ನೀಡಿ, ಕೆಡಿಪಿ ಸಭೆಯನ್ನು ನಡೆಸಿದ್ದರು. ಈಗ ಅವರನ್ನು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ನೇಮಿಸಲಾಗಿದೆ.
ಬಿ. ನಾಗೇಂದ್ರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನವನ್ನು ಯಾವಾಗ ಭರ್ತಿ ಮಾಡಲಾಗುತ್ತದೆ? ಎಂಬ ಮಾಹಿತಿ ಇದೆ. ಹಲವು ಕಾಂಗ್ರೆಸ್ ಶಾಸಕರು ಸಚಿವ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದಾರೆ. ವಿಧಾನ ಪರಿಷತ್ ಸದಸ್ಯರು ಸಹ ತಮಗೆ ಸಚಿವ ಸ್ಥಾನ ನೀಡಬೇಕು ಎಂದು ಬೇಡಿಕೆ ಮುಂದಿಟ್ಟಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸದಲ್ಲಿದ್ದು, ಅವರು ಈ ಕುರಿತು ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸುವ ನಿರೀಕ್ಷೆ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒಪ್ಪಿಗೆ ನೀಡಿದರೆ, ಶೀಘ್ರವೇ ಖಾಲಿ ಇರುವ ಒಂದು ಸಚಿವ ಸ್ಥಾನ ಭರ್ತಿಯಾಗಲಿದೆ.












Click it and Unblock the Notifications